ಅಮುಲ್ ವಿರುದ್ಧ ಕನ್ನಡಿಗರು ಸಿಡಿದೇಳಬೇಕು: ಎಚ್‌ ಡಿ ಕುಮಾರಸ್ವಾಮಿ

Date:

  • ‘ನಂದಿನಿಯನ್ನು ಮುಗಿಸಲು ಕೇಂದ್ರ ಮೂರು ಸಂಚು ರೂಪಿಸಿದೆ’
  • ‘ನಂದಿನಿಗೆ ಅಡ್ಡಿ ಮಾಡಬೇಕೆನ್ನುವುದು ಅಮುಲ್ ದುರಾಲೋಚನೆ’

ರಾಜ್ಯದಲ್ಲಿ ಅಮುಲ್ ಮಾರಾಟದ ಹಿಂದಿನ ಹುನ್ನಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ರಾಜ್ಯ ರೈತರ ಹಿತ ಕಾಯುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಗುಜರಾತ್ ಮೂಲದ ಅಮುಲ್ ಕಂಪನಿ ತನ್ನ ವ್ಯಾಪಾರವನ್ನು ರಾಜ್ಯಕ್ಕೆ ವಿಸ್ತರಿಸುತ್ತಿರುವ ಕುರಿತು ರಾಜ್ಯದೆಲ್ಲೆಡೆ ಭಾರೀ ಚರ್ಚೆಯಾಗುತ್ತಿದೆ. ಈ ನಡುವೆ ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಮಾಡಿ ಪ್ರತಿಕ್ರಿಯಿಸಿದ್ದಾರೆ.

“ಕನ್ನಡಿಗರ ಜೀವನಾಡಿ ನಂದಿನಿಯನ್ನು ಮುಗಿಸಲು ಬಿಜೆಪಿ ನಡೆಸುತ್ತಿರುವ 3ನೇ ಸಂಚಿದು. ಈ ಮೊದಲು ಅಮುಲ್ ಜತೆ ನಂದಿನಿ ವಿಲೀನ ಎನ್ನುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ. ಎರಡನೆಯದು, ಮೊಸರಿನ ಮೇಲೆ ಹಿಂದಿಯ ‘ದಹಿ’ ಪದ ಮುದ್ರಣ” ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

“ಕನ್ನಡಿಗರ ತೀವ್ರ ವಿರೋಧದಿಂದ ಎರಡೂ ಸಂಚು ವಿಫಲವಾಗಿವೆ. ಹಾಗಾಗಿ ಇದೀಗ ಮೂರನೇ ಸಂಚು ಸಫಲಗೊಳಿಸಲು ಅಮುಲ್ ಮೂಲಕ ಕೇಂದ್ರ ಸರಕಾರ ಹೊರಟಿದೆ” ಎಂದು ಹೇಳಿದ್ದಾರೆ.

“ತನ್ನ ಏಕೈಕ ಪ್ರತಿಸ್ಪರ್ಧಿ ನಂದಿನಿಗೆ ಕರ್ನಾಟಕದಲ್ಲೇ ಅಡ್ಡಿ ಮಾಡಬೇಕೆನ್ನುವುದು ಅಮುಲ್ ದುರಾಲೋಚನೆ. ‘ಒಂದು ದೇಶ, ಒಂದು ಅಮುಲ್, ಒಂದೇ ಹಾಲು, ಒಂದೇ ಗುಜರಾತ್ʼ ಎನ್ನುವುದು ಕೇಂದ್ರ ಸರ್ಕಾರದ ಅಧಿಕೃತ ನೀತಿಯಂತಿದೆ” ಎಂದು ವ್ಯಂಗ್ಯವಾಡಿದ್ದಾರೆ.

“ಕೇಂದ್ರದ ನೀತಿಯಂತೆ ಅಮುಲ್ʼಗೆ ಒತ್ತಾಸೆಯಾಗಿ ನಿಂತು ಕೆಎಂಎಫ್ ಕತ್ತು ಹಿಚುಕುತ್ತಿದೆ. ಈಗ ಅಮುಲ್ ಹಿಂಬಾಗಿಲ ಮೂಲಕ ಒಳನುಗ್ಗುತ್ತಿದೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚುನಾವಣೆ 2023 | ವರುಣಾದಲ್ಲಿ ಸಿದ್ದರಾಮಯ್ಯಗೆ ಸವಾಲೊಡ್ಡುವವರಾರು?

“ಹೈನುಗಾರಿಕೆಯ ಮೂಲ ಉತ್ಪನ್ನ ಹಾಲನ್ನು ತನ್ನ ಬ್ರ್ಯಾಂಡ್‌ನಲ್ಲಿಯೇ ಕರ್ನಾಟಕದಲ್ಲಿಯೇ ಮಾರಲು ಹೊರಟಿರುವ ಅಮುಲ್, ನಂದಿನಿಯನ್ನು ಆಪೋಶನ ತೆಗೆದುಕೊಳ್ಳುವುದು ಖಚಿತ. ವಿಲೀನಕ್ಕೆ, ಹಿಂದಿ ಹೇರಿಕೆಗೆ ಪ್ರಬಲ ಪ್ರತಿರೋಧ ಒಡ್ಡುತ್ತಿರುವ ಕನ್ನಡಿಗರು ಮತ್ತು ಕೆಎಂಎಫ್‌ನ ಕಥೆ ಮುಗಿಸಲೇಬೇಕು ಎಂದು ಅಮುಲ್ ಪಣ ತೊಟ್ಟಂತಿದೆ” ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

“ಕೆಎಂಎಫ್ ಜತೆ ಅಮುಲ್ ಅನಗತ್ಯ ಸ್ಪರ್ಧೆ ನಡೆಸಿ ದಿನದಿಂದ ದಿನಕ್ಕೆ ನಂದಿನಿಯನ್ನು ತುಳಿಯುವ ಹುನ್ನಾರ ನಡೆಸುತ್ತಿದೆ, ಇದು ಸ್ಪಷ್ಟ. ಸಹಕಾರಿ ಕ್ಷೇತ್ರದ ಪ್ರಸಿದ್ಧ ಸೋದರ ಸಂಸ್ಥೆಗಳ ನಡುವೆ ಅನಾರೋಗ್ಯಕರ ಪೈಪೋಟಿ ಯಾರಿಗೂ ಹಿತವಲ್ಲ. ಕೆಎಂಎಫ್ ರಾಜ್ಯದ ಸಾವಿರಾರು ಗ್ರಾಮಗಳ ಸಹಕಾರ ಸಂಘಗಳ ಮೂಲಕ ರೈತರಿಂದಲೇ ಹಾಲನ್ನು ನೇರವಾಗಿ ಖರೀದಿಸುತ್ತದೆ” ಎಂದಿದ್ದಾರೆ.

“ಬಿಜೆಪಿ ಡಬಲ್ ಎಂಜನ್ ಸರಕಾರ ನಮ್ಮ ರಾಜ್ಯದ ಹಾಲು ಉತ್ಪಾದಕರನ್ನು ಬೀದಿಗೆ ತಳ್ಳಿ ಗುಜರಾತಿಗಳ ಗುಲಾಮರನ್ನಾಗಿ ಮಾಡುವ ಹುನ್ನಾರ ನಡೆಸಿರುವುದು ಸ್ಪಷ್ಟ” ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

“ಈವರೆಗೂ ಇಷ್ಟೆಲ್ಲಾ ಆದರೂ ರಾಜ್ಯ ಬಿಜೆಪಿ ಸರ್ಕಾರದ ದಿವ್ಯಮೌನ, ಕೆಎಂಎಫ್ ನಿಷ್ಕ್ರಿಯತೆ ಹಲವು ಅನುಮಾನಗಳಿಗೆ ಕಾರಣವಾಗಿದೆ” ಎಂದು ಅನುಮಾನಿಸಿದ್ದಾರೆ.

“ಗುಜರಾತಿನಲ್ಲಿ ಎಂದೂ ಕೆಎಂಎಫ್ ಹಾಲು ಮಾರಿದ್ದಿಲ್ಲ. ಅದು ಅಮುಲ್‌ನ ಸ್ಥಳೀಯ ಮಾರುಕಟ್ಟೆ ಹಿತ, ಸಹಕಾರಿ ತತ್ವವನ್ನು ಗೌರವಿಸಿದೆ. ಹಾಲು ಸಮೃದ್ಧಿ ಇರುವ ಯಾವುದೇ ಮಹಾಮಂಡಳದ ಸ್ಥಳೀಯ ವ್ಯಾಪ್ತಿಯಲ್ಲಿ ಕೆಎಂಎಫ್ ತನ್ನ ಹಾಲನ್ನು ಮಾರಲ್ಲ. ಕರ್ನಾಟಕ ನೈಜ ಸಹಕಾರ ತತ್ವ ನಂಬಿದ್ದರೆ, ಗುಜರಾತ್ ಅಸಹಕಾರವನ್ನೇ ನಂಬಿದೆ” ಎಂದು ಹೇಳಿದ್ದಾರೆ.

“ರಾಜ್ಯ ಸರ್ಕಾರವು ಗುಜರಾತ್ ಹಾಲು ಮಹಾಮಂಡಳಿ ಅಮುಲ್‌ಗೆ ಬೆಂಗಳೂರಿನ ಕೋರಮಂಗಲದಲ್ಲಿ ಅತೀ ಕಡಿಮೆ ದರಕ್ಕೆ ಬೆಲೆ ಬಾಳುವ ಬೃಹತ್ ಜಾಗ ನೀಡಿದೆ. ಇಷ್ಟು ಔದಾರ್ಯ ತೋರಿದ ಕರ್ನಾಟಕ ಹಾಲು ಉತ್ಪಾದಕರು ಮತ್ತು ಕೆಎಂಎಫ್‌ಗೆ ದೊಡ್ಡ ಖೆಡ್ಡಾ ತೋಡಲು ಅಮುಲ್ ಹೊರಟಿದೆ” ಎಂದು ಹೇಳಿದ್ದಾರೆ.

“ಕನ್ನಡಿಗರಾದ ನಾವು ತಕ್ಷಣ ಎಚ್ಚೆತ್ತು ನಂದಿನಿಯನ್ನೇ ಅವಲಂಬಿಸಿರುವ ರಾಜ್ಯದ ರೈತರ ಹಿತವನ್ನು ಆದ್ಯತೆಯಲ್ಲಿ ರಕ್ಷಿಸಿ ಉಳಿಸಿಕೊಳ್ಳಬೇಕು. ನಮ್ಮ ಜನತೆ – ಗ್ರಾಹಕರು ನಂದಿನಿ ಉತ್ಪನ್ನಗಳನ್ನಷ್ಟೇ ಆದ್ಯತೆಯ ಮೇರೆಗೆ ಬಳಸಿ ರಾಜ್ಯದ ರೈತರ ಬದುಕನ್ನು ಕಾಪಾಡಬೇಕು” ಎಂದು ಆಗ್ರಹಿಸಿದ್ದಾರೆ.

“ಇಲ್ಲಿನ ಡಬಲ್ ಎಂಜಿನ್ ಬಿಜೆಪಿ ಸರ್ಕಾರ ಈಗಲಾದರೂ ಎಚ್ಚೆತ್ತು ತಕ್ಷಣ ರಾಜ್ಯದಲ್ಲಿ ಅಮುಲ್‌ನ ಪ್ಯಾಕೆಟ್ ಹಾಲಿನ ಮಾರಾಟಕ್ಕೆ ತಡೆ ಒಡ್ಡಬೇಕು. ಕೇಂದ್ರದ ಒತ್ತಾಸೆಯಿಂದ ಅಮುಲ್ ಕದ್ದುಮುಚ್ಚಿ ಹಿಂಬಾಗಿಲ ಮೂಲಕ ಬರುತ್ತಿದೆ. ಕೆಎಂಎಫ್ ಮತ್ತು ರೈತರ ಕುತ್ತಿಗೆಗೆ ಕುಣಿಕೆ ಬಿಗಿಯುತ್ತಿರುವ ಅಮುಲ್ ವಿರುದ್ಧ ಕನ್ನಡಿಗರು ಸಿಡಿದೇಳಬೇಕು” ಎಂದು ಕರೆ ಕೊಟ್ಟಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಕನ್ನಡ ಜಿಲ್ಲೆಯ ನೈತಿಕ ಪೊಲೀಸ್‌ ಗಿರಿಗೆ ಅಂತ್ಯ ಹಾಡುತ್ತೇವೆ: ಸಚಿವ ದಿನೇಶ್ ಗುಂಡೂರಾವ್

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾ ಉಸ್ತುವಾರಿಯಾದ ಸಚಿವ ಡಿಜಿಆರ್ ಇಲ್ಲಿನ ಜನ...

ಭ್ರಷ್ಟ ಪಿಡಿಒಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಪಿಡಿಒಗಳ ಮೇಲಿನ ತನಿಖೆಯನ್ನು ಚುರುಕುಗೊಳಿಸಿ ಅಂತಹವರ ವಿರುದ್ಧ...

ದಲಿತರ ನ್ಯಾಯಯುತ ಬೇಡಿಕೆಗಳ ಅನುಷ್ಠಾನಕ್ಕೆ ‍ಸರ್ಕಾರ ಬದ್ಧ, ನಿಮ್ಮ ಋಣ ತೀರಿಸುತ್ತೇವೆ: ಡಿಕೆ ಶಿವಕುಮಾರ್

ಅಂಬೇಡ್ಕರ್ ಅಂದರೆ ಶಕ್ತಿ-ಸ್ವಾಭಿಮಾನ ಅವರು ನೀಡಿರುವ ಸಂವಿಧಾನ ಶಕ್ತಿಯನ್ನು ಉಳಿಸಿಕೊಂಡು ಹೋಗಬೇಕಿದೆ....

ನಮ್ಮಲ್ಲಿನ ಕೆಲವರ ರಾಜಿ ರಾಜಕಾರಣದಿಂದ ಬಿಜೆಪಿಗೆ ಸೋಲು: ಸ್ವಪಕ್ಷಿಯರ ವಿರುದ್ಧ ಸಿ ಟಿ ರವಿ ಕಿಡಿ

ನಮ್ಮಲ್ಲೂ ರಾಜಿ ರಾಜಕಾರಣ ಮಾಡಿ ತಪ್ಪು ಮಾಡಿದ್ದಾರೆ ಹೊಂದಾಣಿಕೆ ರಾಜಕಾರಣದಿಂದಲೇ ಬಿಜೆಪಿಗೆ ಸೋಲಾಗಿದೆ ಪಕ್ಷದೊಳಗಿನ...