ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಗೆ ಹೆಚ್ಚುವರಿ ಪ್ರೋತ್ಸಾಹಧನ ನೀಡಲಾಗುವುದು ಎಂದು 2025-26ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಗೆ ಪ್ರತಿ ಕ್ವಿಂಟಾಲ್‌ಗೆ 7,550 ರೂ. ಜೊತೆಗೆ ರಾಜ್ಯ ಸರ್ಕಾರದ ವತಿಯಿಂದ ಹೆಚ್ಚುವರಿ ಪ್ರೋತ್ಸಾಹಧನ 450 ರೂ.ಗಳಂತೆ ಒಟ್ಟು 138 ಕೋಟಿ ರೂ. ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? Karnataka Budget 2025 | ಅಂಗನವಾಡಿ ಕಾರ್ಯಕರ್ತರು, ಅತಿಥಿ ಶಿಕ್ಷಕರಿಗೆ ಗೌರವ ಧನ ಹೆಚ್ಚಳ
ಹೆಚ್ಚುವರಿ ಪ್ರೋತ್ಸಾಹಧನ ನೀಡುವುದರಿಂದ ತೊಗರಿ ಬೆಳೆಯುವ ಪ್ರಮುಖ ಜಿಲ್ಲೆಗಳಾದ ಕಲಬುರಗಿ, ಬೀದರ್, ಯಾದಗಿರಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಕೋಲಾರ, ಚಿತ್ರದುರ್ಗ ಹಾಗೂ ಚಿಕ್ಕಬಳ್ಳಾಪುರ ಭಾಗದ ರೈತರಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.
ಈ ಹಿಂದೆ 2024ರ ಡಿಸೆಂಬರ್‌ನಲ್ಲಿ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರು, “ತೊಗರಿ ಬೆಳೆಗೆ ಬೆಂಬಲ ಬೆಲೆ ಹೆಚ್ಚಳ ಸಾಧ್ಯವಿಲ್ಲ. ಪರಿಹಾರ ನೀಡಲು ರಾಜ್ಯ ಸರ್ಕಾರಕ್ಕಾಗದು. ಆದರೆ ಬೆಂಬಲ ಬೆಲೆಯಡಿ ರೈತರ ತೊಗರಿ ಖರೀದಿಗೆ ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ತಿಳಿಸಿದ್ದರು.
ಆದರೆ ಬೆಂಬಲ ಬೆಲೆ ಹೆಚ್ಚಿಸುವ ಬೇಡಿಕೆ ಅಧಿಕವಾದ ಬಳಿಕ ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಗೆ ರಾಜ್ಯ ಸರ್ಕಾರ ಕ್ವಿಂಟಲ್‌ಗೆ ಹೆಚ್ಚುವರಿ 450 ರೂಪಾಯಿ ನೀಡಲು ನಿರ್ಧರಿಸಲಾಗಿದೆ. ಇದಕ್ಕಾಗಿ 140 ಕೋಟಿ ರೂಪಾಯಿ ಒದಗಿಸಲಾಗುವುದು ಎಂದು 2025ರ ಜನವರಿಯಲ್ಲಿ ಘೋಷಿಸಿದ್ದರು.
ಅದರಂತೆ ರಾಜ್ಯದಲ್ಲಿ 330 ತೊಗರಿ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿತ್ತು. ರೈತರು ತಮ ಹತ್ತಿರದ ಪಿಎಸಿಎಸ್/ಎಫ್‌ಪಿಒ/ಟಿಅಪಿಸಿಎಂಎಸ್‌ಗಳಿಗೆ ಭೇಟಿ ನೀಡಿ ನೊಂದಣಿ ಮಾಡಿಕೊಂಡು ಬೆಂಬಲ ಬೆಲೆ ಯೋಜನೆಯ ಹಾಗೂ ರಾಜ್ಯ ಸರ್ಕಾರದ ಪ್ರೋತ್ಸಾಹ ಧನದ ಸುದುಪಯೋಗ ಪಡೆದುಕೊಳ್ಳುವಂತೆ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದರು.
