ಮುಖ್ಯಮಂತ್ರಿ ಸಿದ್ದರಾಮಯ್ಯನವರು 3,71,383 ಕೋಟಿ ರೂ. ಗಾತ್ರದ ಬಜೆಟ್ ಅನ್ನು ಮಂಡಿಸಿದ್ದು, ಇದರಲ್ಲಿ ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡುವ ಮೂಲಕ ಅವರ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2024-25ನೇ ವರ್ಷದಲ್ಲಿ ಒಟ್ಟಾರೆಯಾಗಿ 393 ಕೋಟಿ ರೂ.ಗಳ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.
ರಾಜ್ಯದಲ್ಲಿನ ವಕ್ಫ್ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ ಸುಮಾರು 100 ಕೋಟಿ ರೂ. ಅನುದಾನ ಒದಗಿಸಲಾಗುವುದು ಹಾಗೂ ಭಾರತೀಯ ಪುರಾತತ್ವ ಇಲಾಖೆಯ ವ್ಯಾಪ್ತಿಯಲ್ಲಿರುವ ವಕ್ಫ್ ಆಸ್ತಿಗಳನ್ನು ಆದ್ಯತೆಯ ಮೇರೆಗೆ ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದ್ದಾರೆ.
ಇತರ ಪ್ರಮುಖ ಘೋಷಣೆಗಳು ಹೀಗಿದೆ.
- 50 ಸಂಖ್ಯಾಬಲವುಳ್ಳ 50 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪ್ರಾರಂಭ
- 100 ಸಂಖ್ಯಾಬಲವುಳ್ಳ 100 ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿನಿಲಯ ಪ್ರಾರಂಭ
- 100 ಹೊಸ ಮೌಲಾನಾ ಆಝಾದ್ ಶಾಲೆಗಳು
- ಸ್ವಂತ ಕಟ್ಟಡವನ್ನು ಹೊಂದಿರುವ 25 ಶಾಲೆಗಳಲ್ಲಿ ಪದವಿ ಪೂರ್ವ ಶಿಕ್ಷಣ ಪ್ರಾರಂಭ
- ಸರ್ಕಾರಿ-ಖಾಸಗಿ ಕಾಲೇಜುಗಳಲ್ಲಿ ಬಿ.ಎಸ್ಸಿ. ನರ್ಸಿಂಗ್, ಜಿ.ಎನ್.ಎಂ ನರ್ಸಿಂಗ್ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಶುಲ್ಕ ಭರಿಸುವ ಯೋಜನೆಯನ್ನು ಪುನಃ ಪ್ರಾರಂಭ.
- ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಉದ್ಯಮಶೀಲರು ಸ್ಥಾಪಿಸುವ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಹೊಸ ಘಟಕಗಳನ್ನು ಸ್ಥಾಪಿಸಲು ಹಾಗೂ ಅಸ್ತಿತ್ವದಲ್ಲಿರುವ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಘಟಕಗಳ ಉನ್ನತೀಕರಣಕ್ಕೆ KSFC ಮೂಲಕ ಪಡೆಯುವ 10 ಕೋಟಿ ರೂ.ವರೆಗಿನ ಸಾಲಕ್ಕೆ ಶೇ.6ರಷ್ಟು ಬಡ್ಡಿ ಸಹಾಯಧನ
- ರೇಷ್ಮೆ ನೂಲು ಬಿಚ್ಚಾಣಿಕೆಯಲ್ಲಿ ತೊಡಗಿರುವ ಅಲ್ಪಸಂಖ್ಯಾತ ಫಲಾನುಭವಿಗಳ ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಲು ರೇಷ್ಮೆ ಇಲಾಖೆ ಮೂಲಕ ತರಬೇತಿ ಮತ್ತು ಕೆ.ಎಂ.ಡಿ.ಸಿ ಮೂಲಕ ಸಾಲ ಸೌಲಭ್ಯ
- ಅಲ್ಪಸಂಖ್ಯಾತ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ವಿವಿಧ ರೀತಿಯ ಸ್ವಯಂ ಉದ್ಯೋಗ ಚಟುವಟಿಕೆಗಳಿಗೆ ಉತ್ತೇಜನ ನೀಡಲು 10 ಕೋಟಿ ರೂ.
- ವಕ್ಫ್ ಸಂಸ್ಥೆಯ ಧಾರ್ಮಿಕ ಗುರುಗಳಿಗೆ ಹಾಗೂ ಮುತವಲ್ಲಿಗಳಿಗೆ ಪ್ರಚಲಿತ ವಿದ್ಯಮಾನಗಳ ಬಗ್ಗೆ ಅರಿವು ಮೂಡಿಸಲು ತರಬೇತಿ ಕಾರ್ಯಾಗಾರ
- ರಾಜ್ಯದಲ್ಲಿನ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು 20 ಕೋಟಿ ರೂ. ಅನುದಾನ
- ಮಂಗಳೂರಿನ ಹಜ್ ಭವನದ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲು 10 ಕೋಟಿ ರೂ. ವೆಚ್ಚ
- ಜೈನರ ಪ್ರಮುಖ ಧಾರ್ಮಿಕ ಸ್ಥಳಗಳ ಅಭಿವೃದ್ಧಿಗಾಗಿ 50 ಕೋಟಿ ರೂ. ಅನುದಾನ ಒದಗಿಸಲಾಗುವುದು.
- ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗಾಗಿ 200 ಕೋಟಿ ರೂ.
- ಬೌದ್ಧರ ಪವಿತ್ರ ಗ್ರಂಥಗಳಾದ ತ್ರಿಪಿಟಕಗಳನ್ನು ಪಾಲಿ ಭಾಷೆಯಿಂದ ಕನ್ನಡಕ್ಕೆ ಅನುವಾದ ಮಾಡಲು ಸೂಕ್ತ ಅನುದಾನ.
- ರಾಜ್ಯದಲ್ಲಿ ವಾಸಿಸುತ್ತಿರುವ ಸಿಖ್ಖ್ ಲಿಗಾರ್ ಸಮುದಾಯದ ಜನರ ಆರ್ಥಿಕ ಸಬಲೀಕರಣಕ್ಕಾಗಿ ಎರಡು ಕೋಟಿ ರೂ. ಅನುದಾನದಲ್ಲಿ ಹೊಸ ಯೋಜನೆ
- ಬೀದರ್ನಲ್ಲಿರುವ ಶ್ರೀ ನಾನಕ್ ಝೀರಾ ಸಾಹೇಬ್ ಗುರುದ್ವಾರದ ಅಭಿವೃದ್ಧಿಗಾಗಿ ಒಂದು ಕೋಟಿ ರೂ. ಅನುದಾನ.