ಕಾಂಗ್ರೆಸ್‌ನ ಇಬ್ಬರು ನಾಯಕರ ಬೆಂಬಲಿಗರ ನಡುವೆ ಮಾರಾಮಾರಿ ನಡೆದಿರುವ ಘಟನೆ ಕೋಲಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದಿದೆ.
ಮಂಗಳವಾರ ಕರೆಯಲಾಗಿದ್ದ ಬೂತ್ ಪಟ್ಟದ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮತ್ತು ಸಚಿವ ಕೆ.ಎಚ್ ಮುನಿಯಪ್ಪ ಅವರ ಬೆಂಬಲಿಗರ ನಡುವೆ ಗಲಾಟೆ ನಡೆದಿದೆ.
ಕಚೇರಿಯಲ್ಲಿ ಹಾಕಲಾಗಿದ್ದ ಬ್ಯಾನರ್‌ನಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಕೊತ್ತೂರು ಮಂಜುನಾಥ್, ನಸೀರ್ ಅಹ್ಮದ್ ಅವರ ಫೋಟೋ ಹಾಕಿಲ್ಲದ ವಿಚಾರಕ್ಕೆ ಗಲಾಟೆ ನಡೆದಿದೆ ಎಂದು ತಿಳಿದುಬಂದಿದೆ.
ಲೋಕಸಭಾ ಚುನಾವಣೆ ಸಿದ್ದತೆಯ ಭಾಗವಾಗಿ ಬೂತ್ ಮಟ್ಟ ಏಜೆಂಟ್‌ಗಳನ್ನು ನೇಮಿಸಲು ಮಂಗಳವಾರ ಸಭೆ ಕರೆಯಲಾಗಿತ್ತು. ಸಭೆಗೆ ಕೆಪಿಸಿ ಕಾರ್ಯದರ್ಶಿ ರಮೇಶ್ ಮತ್ತು ವಿಕ್ಷಕರಾದ ರಾಮಕುಮಾರ್ ಭಾಗಿಯಾಗಿದ್ದರು. ಅವರ ಎದುರು ಮುನಿಯಪ್ಪ ಅವರ ಬೆಂಬಲಿಗರಾದ ಕಾಂಗ್ರೆಸ್ ಜಿಲ್ಲಾ ಕಾರ್ಯಾಧ್ಯಕ್ಷ ಊರುಬಾಲಿಲು ಶ್ರೀನಿವಾಸ್ ವಿರುದ್ಧ ಕೊತ್ತೂರು ಮಂಜುನಾಥ್ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವೇಳೆ, ಶ್ರೀನಿವಾಸ್ ಮತ್ತು ಮಂಜುನಾಥ್ ಬೆಂಬಲಿಗರ ನಡುವೆ ಗಲಾಟೆ ನಡೆದಿದ್ದು, ಪರಸ್ಪರ ತಳ್ಳಾಟ, ನೂಕಾಟ ನಡೆದಿದೆ. ಪೊಲೀಸರು ಮಧ್ಯಪ್ರವೇಶಿಸಿ ಗಲಾಟೆ ನಿಲ್ಲಿಸಿದ್ದಾರೆ.