“ವಿಧಾನ ಪರಿಷತ್ ಚುನಾವಣೆಗೆ ನಮ್ಮ ಪಕ್ಷದಲ್ಲಿ 300ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದು, ದೆಹಲಿ ನಾಯಕರ ಜತೆ ಚರ್ಚೆ ಮಾಡಿ ಎಲ್ಲಾ ವರ್ಗದ 65 ಸಂಭಾವ್ಯರ ಪಟ್ಟಿಯನ್ನು ಕೊಟ್ಟು ಬಂದಿದ್ದೇವೆ. ಉಳಿದಂತೆ ಹೈಕಮಾಂಡ್ ನಾಯಕರು ಅಂತಿಮ ತೀರ್ಮಾನ ಮಾಡಲಿದ್ದಾರೆ” ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, “ಯತೀಂದ್ರ ಅವರ ವಿಚಾರವಾಗಿ ಹೈಕಮಾಂಡ್ ನಾಯಕರು ಈಗಾಗಲೇ ಮಾತು ಕೊಟ್ಟಿದ್ದರು. ಕೇವಲ ಬೆಂಗಳೂರು ಮಾತ್ರವಲ್ಲದೇ ಕರಾವಳಿ ಕರ್ನಾಟಕ, ಮಧ್ಯ ಕರ್ನಾಟಕ, ಕಲ್ಯಾಣ ಕರ್ನಾಟಕ ಸೇರಿದಂತೆ ಎಲ್ಲಾ ವಲಯಗಳಿಂದಲೂ ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಮಂಗಳೂರಿನಲ್ಲಿ 21, ಚಿಕ್ಕಮಗಳೂರಿನಲ್ಲಿ 9 ಮಂದಿ ಆಕಾಂಕ್ಷಿಗಳಿದ್ದಾರೆ” ಎಂದು ತಿಳಿಸಿದರು.
ಹಿರಿಯರ ಅಭಿಪ್ರಾಯ ಕೇಳಬೇಕಿತ್ತು ಎಂಬ ಪರಮೇಶ್ವರ್ ಅವರ ಹೇಳಿಕೆ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ, “ನಾವು ಅವರ ಅಭಿಪ್ರಾಯ ಕೇಳಿದ್ದೇವೆ. ಪರಮೇಶ್ವರ್ ಅವರು ಸಿಎಂ ಅವರನ್ನು ಭೇಟಿ ಮಾಡಿದ್ದಾರೆ” ಎಂದರು.
ಪರಿಷತ್‌ಗೆ ಆಯ್ಕೆಯ ಮಾನದಂಡ ಏನು ಎಂದು ಕೇಳಿದಾಗ, “ಸಂಘಟನೆಗೆ ಆದ್ಯತೆ ನೀಡಲಾಗುವುದು. ಅನೇಕ ಪ್ರಮುಖರು, ಹಿರಿಯರು ಹಾಗೂ ಚುನಾವಣೆಯಲ್ಲಿ ಸೋತವರು, ವಿಧಾನಸಭೆ ಟಿಕೆಟ್ ತ್ಯಾಗ ಮಾಡಿರುವವರು ಟಿಕೆಟ್ ಕೇಳಿದ್ದು, ಹೈಕಮಾಂಡ್ ನಾಯಕರು ಅಂತಿಮ ತೀರ್ಮಾನ ಮಾಡಲಿದ್ದಾರೆ” ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.
ಇದನ್ನು ಓದಿದ್ದೀರಾ? ಜರ್ಮನಿಯಿಂದ ಬೆಂಗಳೂರಿನತ್ತ ಹೊರಟ ಪ್ರಜ್ವಲ್ ರೇವಣ್ಣ: ವಿಮಾನ ನಿಲ್ದಾಣದಲ್ಲಿ ಬಿಗಿ ಭದ್ರತೆ
ಜೂ 2 ರಂದು ಶಾಸಕಾಂಗ ಪಕ್ಷದ ಸಭೆ
ಜೂನ್ 2 ರಂದು ಸಂಜೆ 6 ಗಂಟೆಗೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಶಾಸಕಾಂಗ ಪಕ್ಷದ ಸಭೆ ಇದೆ. ಪರಿಷತ್ ಸದಸ್ಯರು, ಶಾಸಕರು ಹಾಗೂ ಸಂಸದರಿಗೆ ಆಹ್ವಾನ ನೀಡಲಾಗುವುದು. ಪರಿಷತ್ ಚುನಾವಣೆ ಸೇರಿದಂತೆ ಪಕ್ಷದ ಕೆಲವು ವಿಚಾರ ಚರ್ಚೆ ಮಾಡಲಾಗುವುದು. ಜೂನ್ 1ರಂದು ಕರೆಯಲಾಗಿದ್ದ ಪಕ್ಷದ ಪದಾಧಿಕಾರಿಗಳ ಸಭೆಯನ್ನು ಮುಂದೂಡಲಾಗಿದೆ ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.
