- 2013, 2018ರ ಪ್ರಣಾಳಿಕೆ ಕುರಿತು ಚರ್ಚೆಗೆ ಆಹ್ವಾನ
- ಐದು ಗ್ಯಾರಂಟಿಗಳನ್ನು ಘೋಷಿಸಿರುವ ಕಾಂಗ್ರೆಸ್
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಐದು ಗ್ಯಾರಂಟಿಗಳನ್ನು ಘೋಷಿಸಿದೆ. ಈ ಕುರಿತು ಬಿಜೆಪಿ ನಾಯಕರು ಟೀಕಿಸುತ್ತಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪ್ರಧಾನಿ ಮೋದಿ ಅವರಿಗೆ ಸವಾಲು ಹಾಕಿ ಚರ್ಚೆಗೆ ಆಹ್ವಾನಿಸಿದ್ದಾರೆ.
ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತ, ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 3,000 ರೂಪಾಯಿ ನಿರುದ್ಯೋಗ ಭತ್ಯೆ, ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂಪಾಯಿ, ಪ್ರತಿಯೊಬ್ಬರಿಗೆ 10 ಕೆಜಿ ಉಚಿತ ಅಕ್ಕಿ ಹಾಗೂ ಮಹಿಳೆಯರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೇರಿದಂತೆ ಐದು ಗ್ಯಾರಂಟಿಗಳನ್ನು ಕಾಂಗ್ರೆಸ್ ಘೋಷಿಸಿದೆ.
ಈ ಕುರಿತು ಪ್ರತಿಕ್ರಿಯೆ ನೀಡುತ್ತಿರುವ ಬಿಜೆಪಿ ನಾಯಕರು ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ ಟೀಕಿಸುತ್ತಿದ್ದಾರೆ. “ಚುನಾವಣೆವರೆಗೂ ಅಷ್ಟೇ ಕಾಂಗ್ರೆಸ್ ಗ್ಯಾರಂಟಿ ಇರುತ್ತವೆ. ಚುನಾವಣೆ ಬಳಿಕ ಯಾವುದು ಈಡೇರುವುದಿಲ್ಲ. ಇದಕ್ಕೆ ಉದಾಹರಣೆಗೆ ಬೇರೆ ಕಾಂಗ್ರೆಸ್ ಆಡಳಿತ ರಾಜ್ಯದಲ್ಲಿ ಕೊಟ್ಟ ಭರವಸೆ ಈಡೇರಿಸಿಲ್ಲ” ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್ ನೂರು ವರ್ಷದ ಸಂಸ್ಕೃತಿಯನ್ನು ಗಾಳಿಗೆ ತೂರಿದೆ: ಸಿಎಂ ಬೊಮ್ಮಾಯಿ
ಪ್ರಧಾನಿ ಮೋದಿ ಅವರು, “ಭ್ರಷ್ಟಾಚಾರವಷ್ಟೇ ಕಾಂಗ್ರೆಸ್ ಗ್ಯಾರಂಟಿ” ಎಂದಿದ್ದಾರೆ. ಈ ನಡುವೆ, ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು ಸವಾಲು ಹಾಕಿ ಚರ್ಚೆಗೆ ಕರೆದಿದ್ದಾರೆ.
“ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ ಕುಹಕವಾಡುವ ಬಿಜೆಪಿ ನಾಯಕರಿಗೆ ನನ್ನದೊಂದು ನೇರ ಸವಾಲು. 2013ರ ಕಾಂಗ್ರೆಸ್ ಪ್ರಣಾಳಿಕೆ ಮತ್ತು 2018ರ ಬಿಜೆಪಿ ಪ್ರಣಾಳಿಕೆಗಳಲ್ಲಿ ನೀಡಲಾದ ಭರವಸೆಗಳು ಹಾಗೂ ಈಡೇರಿಸಲಾಗಿರುವ ಭರವಸೆಗಳ ಬಗ್ಗೆ ಬಹಿರಂಗವಾಗಿ ಚರ್ಚೆ ನಡೆಸೋಣ” ಎಂದು ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
“ದಮ್ –ತಾಕತ್ ಇದ್ದ ಮುಖ್ಯಮಂತ್ರಿಗಳು ಇಲ್ಲವೇ ಐವತ್ತಾರು ಇಂಚಿನ ಎದೆಯ ಪ್ರಧಾನಿಗಳು ಯಾರಾದರೂ ಬರಲಿ ನಾನು ಚರ್ಚೆಗೆ ಸಿದ್ಧನಿದ್ದೇನೆ” ಎಂದು ಮೋದಿ ಅವರಿಗೂ ಸಿದ್ದರಾಮಯ್ಯ ಆಹ್ವಾನ ನೀಡಿದ್ದಾರೆ.
“ನುಡಿದಂತೆ ನಡೆದಿರುವ ವಿಶ್ವಾಸ ನನ್ನದು, ಜನತಾ ಜನಾರ್ದನರೇ ಇದಕ್ಕೆ ಸಾಕ್ಷಿ”