ಲೋಕಸಭೆ ಚುನಾವಣೆಗೆ ಕರ್ನಾಟಕದ ಕಾಂಗ್ರೆಸ್ ಮೊದಲ ಮತ್ತು ಎರಡನೇ ಪಟ್ಟಿಯಲ್ಲಿ 24 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಫೈನಲ್ ಮಾಡಿದ್ದು, ಇನ್ನು ನಾಲ್ಕು ಕ್ಷೇತ್ರಗಳಲ್ಲಿ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಹಗ್ಗ ಜಗ್ಗಾಟ ಮುಂದುವರಿದಿದೆ.
ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜ ನಗರ ಹಾಗೂ ಬಳ್ಳಾರಿ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಾಂಗ್ರೆಸ್ ಅಂತಿಮಗೊಳಿಸುವುದು ಬಾಕಿ ಇದೆ. ಈ ನಡುವೆ ಕೋಲಾರದಲ್ಲಿ ಬಣ ರಾಜಕೀಯ ತಾರಕಕ್ಕೇರಿದೆ. ಸಚಿವ ಕೆ ಎಚ್ ಮುನಿಯಪ್ಪ ಮತ್ತು ಮಾಜಿ ಸಭಾಧ್ಯಕ್ಷ ರಮೇಶ್ ಕುಮಾರ್ ಬಣಗಳ ನಡುವಣ ತಿಕ್ಕಾಟ ಹೆಚ್ಚಾಗಿದೆ.
ಸಚಿವ ಮುನಿಯಪ್ಪ ಅವರು ತಮ್ಮ ಅಳಿಯ ಚಿಕ್ಕಪೆದ್ದಣ್ಣಗೆ ಟಿಕೆಟ್ ಕೊಡಿಸಲು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಇತ್ತ ರಮೇಶ್ ಕುಮಾರ್ ಬಣ ಕೂಡ ಪಟ್ಟು ಹಿಡಿದಿದ್ದು, ಅವರಿಗೆ ಟಿಕೆಟ್ ನೀಡಿದರೆ ಯಾವುದೇ ಕಾರಣಕ್ಕೂ ಕೆಲಸವೇ ಮಾಡುವುದಿಲ್ಲ ಎಂಬ ಸಂದೇಶ ಸಾರಿದ್ದಾರೆ.
ಮುನಿಯಪ್ಪ ಕುಟುಂಬ ಸದಸ್ಯರಿಗೆ ಟಿಕೆಟ್ ನೀಡುವುದಕ್ಕೆ ಉನ್ನತ ಶಿಕ್ಷಣ ಸಚಿವ ಎಂ ಸಿ ಸುಧಾಕರ್, ಶಾಸಕ ಕೊತ್ತೂರು ಮಂಜುನಾಥ್ ಸಹ ವಿರೋಧ ವ್ಯಕ್ತಪಡಿಸಿದ್ದಾರೆ. ಮಾದಿಗ ಸಮುದಾಯಕ್ಕೆ ಸೇರಿದ ರಾಜ್ಯಸಭೆಯ ಮಾಜಿ ಸದಸ್ಯ ಡಾ.ಎಲ್ ಹನುಮಂತಯ್ಯ ಅವರನ್ನು ಕಣಕ್ಕೆ ಇಳಿಸಬೇಕು ಎಂದು ರಮೇಶ್ ಕುಮಾರ್ ಬಣದವರು ಒತ್ತಡ ಹೇರಿದ್ದು, ಅವರನ್ನು ಗೆಲ್ಲಿಸಿಕೊಂಡು ಬರುವ ಹೊಣೆ ತಮ್ಮದು ಎಂದು ಕೇಂದ್ರ ನಾಯಕರಿಗೆ ಭರವಸೆ ಖುಡ ನೀಡಿದ್ದಾರೆ ಎನ್ನಲಾಗಿದೆ.
ಆದರೆ, ಕೋಲಾರ ಕ್ಷೇತ್ರದಲ್ಲಿ ತಮ್ಮ ಕುಟುಂಬ ಸದಸ್ಯರಿಗೆ ಟಿಕೆಟ್ ನೀಡಬೇಕು ಎಂದು ಆಹಾರ ಸಚಿವ ಕೆ ಎಚ್ ಮುನಿಯಪ್ಪ ಹಿಡಿದ ಪಟ್ಟು ಸಡಿಲಿಸಿಲ್ಲ. ಹೈಕಮಾಂಡ್‌ನ ನಾಯಕರ ಮೇಲೂ ಒತ್ತಡ ತರುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಮ್ಮತಿಸಿದರೆ ಮಾತ್ರ ಕೋಲಾರ ಕ್ಷೇತ್ರದಿಂದ ಚಿಕ್ಕಪೆದ್ದಣ್ಣ ಕಣಕ್ಕಿಳಿಯುವ ಸಾಧ್ಯತೆ ಇದೆ.
ರಾಜ್ಯದ ಅಧಿಕಾರ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಅನ್ನು ಮಣಿಸಲು ಒಂದಾಗಿರುವ ಬಿಜೆಪಿ-ಜೆಡಿಎಸ್ ಪಕ್ಷಗಳಿಗೆ ಕೋಲಾರ ಲೋಕಸಭೆ ಕ್ಷೇತ್ರ ಪ್ರತಿಷ್ಠೆಯ ವಿಷಯವಾಗಿದೆ. ಟಿಕೆಟ್ ಹಂಚಿಕೆ ವಿಚಾರದಲ್ಲಿ ಮೈತ್ರಿಯಲ್ಲಿ ಗೊಂದಲ ಮುಂದುವರಿದಿದೆ. ಕೋಲಾರ್ ಜೆಡಿಎಸ್‌ಗೆ ಸಿಕ್ಕಿದೆ ಎನ್ನುವ ಮಾತುಗಳು ಕೇಳಿಬಂದಿದ್ದರೂ ಅದು ಅಧಿಕೃತಗೊಂಡಿಲ್ಲ.
ಜೆಡಿಎಸ್ ಪಕ್ಷ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಒಂದಾದರೂ ಮೀಸಲು ಕ್ಷೇತ್ರವನ್ನು ಪಡೆಯದಿದ್ದರೆ ಜೆಡಿಎಸ್ ಕೇವಲ ಒಂದು ಸಮುದಾಯಕ್ಕೆ ಸೀಮಿತವಾದ ಪಕ್ಷವೆಂಬ ವಿರೋಧಿಗಳ ಟೀಕೆಗೆ ಗುರಿಯಾಗಬೇಕಾಗುತ್ತದೆಂಬ ಆತಂಕ ಜೆಡಿಎಸ್ ವರಿಷ್ಠರಲ್ಲಿದೆ. ಇದೇ ಕಾರಣದಿಂದಾಗಿ ಒಂದಾದರೂ ಮೀಸಲು ಕ್ಷೇತ್ರ ಪಡೆಯಲೇಬೇಕೆಂಬ ನಿರ್ಧಾರವನ್ನು ದಳಪತಿಗಳು ಮಾಡಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಬಿಜೆಪಿ ಸಂಸದರಿದ್ದು, ಎಂಟೂ ಕ್ಷೇತ್ರಗಳಲ್ಲಿ ಮುನಿಸ್ವಾಮಿ ಜನರಿಗೆ ಹತ್ತಿರವಾಗಿದ್ದಾರೆ. ಬಿಜೆಪಿ ಪಕ್ಷದ ನಾಯಕರು ನಡೆಸಿದಂತಹ ಸರ್ವೇಯಿಂದಾಗಿ ಬಿಜೆಪಿ-ಜೆಡಿಎಸ್ ಮೈತ್ರಿಯೊಂದಿಗೆ ಬಿಜೆಪಿ ಅಭ್ಯರ್ಥಿ ಸ್ಪರ್ಧೆ ಮಾಡಿದರೆ ಗೆಲುವು ಸುಲಭವೆಂಬ ವರದಿ ಬಂದಿದೆ. ಜೆಡಿಎಸ್‌ನಲ್ಲಿ ಕಾಂಗ್ರೆಸ್‌ಗೆ ಪೈಪೋಟಿ ನೀಡುವಂತಹ ಅಭ್ಯರ್ಥಿಗಳಿಲ್ಲವೆಂಬ ವರದಿಗಳ ಹಿನ್ನೆಲೆಯಲ್ಲಿ ಕೋಲಾರ ಕ್ಷೇತ್ರ ಬಿಟ್ಟುಕೊಡಲು ಬಿಜೆಪಿ ನಾಯಕರು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೆಂಗಳೂರು ಉತ್ತರಕ್ಕೆ ಬೆಂಕಿ ಹಚ್ಚದಿರಲಿ ಶೋಭಾ ಕರಂದ್ಲಾಜೆ
ಬಗೆಹರಿಯದ ಚಿಕ್ಕಬಳ್ಳಾಪುರ
ಚಿಕ್ಕಬಳ್ಳಾಪುರ ಕ್ಷೇತ್ರ ಕೂಡ ಕಾಂಗ್ರೆಸ್‌ಗೆ ಕಗ್ಗಂಟಾಗಿದೆ. ಬಿಜೆಪಿ ಅಭ್ಯರ್ಥಿ ನೋಡಿಕೊಂಡೇ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಮಾಡುವ ತೀರ್ಮಾನಕ್ಕೆ ಬರುವ ಸಾಧ್ಯತೆ ಹೆಚ್ಚಿದೆ. ಬಿಜೆಪಿಯಲ್ಲಿ ಶಾಸಕ ಎಸ್ ಆರ್ ವಿಶ್ವನಾಥ್ ತಮ್ಮ ಮಗನಿಗೆ ಟಿಕೆಟ್ ಕೊಡಿಸಲು ರಾಜ್ಯ ನಾಯಕರ ದುಂಬಾಲು ಬಿದ್ದಿದ್ದಾರೆ. ಅತ್ತ ಮಾಜಿ ಸಚಿವ ಸುಧಾಕರ್ ಕೂಡ ತಮಗೇ ಟಿಕೆಟ್ ಸಿಗುವ ಭರವಸೆಯಲ್ಲಿದ್ದಾರೆ. ಇವರಿಬ್ಬರ ನಡುವೆ ಮಂಡ್ಯದ ಸಂಸದೆ ಸುಮಲತಾ ಅಂಬರೀಷ್ ಹೆಸರು ಕೂಡ ಕೇಳಿ ಬರುತ್ತಿದೆ.
ಕಾಂಗ್ರೆಸ್‌ನಲ್ಲಿ ಚಿಕ್ಕಬಳ್ಳಾಪುರ ಟಿಕೆಟ್ ತಮಗೆ ನೀಡಬೇಕು ಎಂದು ಮಾಜಿ ಸಿಎಂ ವೀರಪ್ಪ ಮೊಯಿಲಿ ಪಟ್ಟು ಹಿಡಿದಿದ್ದಾರೆ. ರಕ್ಷಾ ರಾಮಯ್ಯ ಹೆಸರು ಕೂಡ ಕೇಳಿಬರುತ್ತಿದೆ. ಸಿದ್ದರಾಮಯ್ಯ ಅವರು ರಕ್ಷಾ ರಾಮಯ್ಯ ಪರ ಬ್ಯಾಟ್ ಮಾಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಚಾಮರಾಜನಗರದಲ್ಲಿ ಗೊಂದಲ
ಚಾಮರಾಜನಗರ ಟಿಕೆಟ್ ಹಂಚಿಕೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲದ ವಾತಾವರಣ ತಿಳಿಯಾಗಿಲ್ಲ. ಸಮಾಜ ಕಲ್ಯಾಣ ಸಚಿವ ಎಚ್ ಸಿ ಮಹದೇವಪ್ಪ ಅವರು ಚಾಮರಾಜನಗರ ಕ್ಷೇತ್ರದಿಂದ ಕಣಕ್ಕಿಳಿಯಲು ಹಿಂದೇಟು ಹಾಕಿದ್ದು, ಪುತ್ರ ಸುನೀಲ್ ಬೋಸ್‌ಗೆ ಟಿಕೆಟ್ ಕೊಡಿಸಲು ಇನ್ನಿಲ್ಲದ ಪ್ರಯತ್ನ ನಡೆಸಿದ್ದಾರೆ.
ಟಿಕೆಟ್ ಆಕಾಂಕ್ಷಿ ಸುನೀಲ್ ಬೋಸ್ ಈಗಾಗಲೇ ಕ್ಷೇತ್ರದಲ್ಲಿ ದೇಗುಲ ಸುತ್ತಾಟ ನಡೆಸಿದ್ದು, ನಂಜನಗೂಡು ನಂಜುಂಡೇಶ್ವರ ರಥವನ್ನು ಎಳೆದು, ಬಳಿಕ ಚಾಮುಂಡಿ ಬೆಟ್ಟಕ್ಕೆ ತೆರಳಿ ದೇವಿಯ ದರ್ಶನ ಪಡೆದಿದ್ದಾರೆ. ಟಿಕೆಟ್ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿ ಸುನೀಲ್ ಬೋಸ್ ಇದ್ದಾರೆ.
ಚಾಮರಾಜನಗರದಲ್ಲಿ ಕಾಂಗ್ರೆಸ್ ಟಿಕೆಟ್ ಕಗ್ಗಂಟಾಗಿ ಉಳಿದಿದ್ದರೆ, ಮತ್ತೊಂದು ಕಡೆ ಬಿಜೆಪಿ ಅಭ್ಯರ್ಥಿ ಬಾಲರಾಜು ಅಧಿಕೃತವಾಗಿ ಪ್ರಚಾರಕ್ಕೆ ಶುಕ್ರವಾರ ಧುಮುಕಲಿದ್ದಾರೆ. ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿ ಹನೂರು ಹಾಗೂ ಕೊಳ್ಳೇಗಾಲದಲ್ಲಿ ಕಾರ್ಯಕರ್ತರ ಸಮಾವೇಶ ನಡೆಸಲಿದ್ದಾರೆ.
ಬಳ್ಳಾರಿ; ಶ್ರೀರಾಮುಲುಗೆ ಕಾಂಗ್ರೆಸ್ ಠಕ್ಕರ್
ಬಳ್ಳಾರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಅವರಿಗೆ ಠಕ್ಕರ್ ಕೊಡಲು ಶಾಸಕ ಈ.ತುಕಾರಾಂ ಅವರು ತಮ್ಮ ಪುತ್ರಿಯನ್ನು ಕಣಕ್ಕಿಳಿಸಲು ಬಯಸಿದ್ದರು. ಆದರೆ, ಸಿದ್ದರಾಮಯ್ಯ ಅವರು ಸಂಡೂರು ಶಾಸಕ, ಮಾಜಿ ಸಚಿವ ಈ.ತುಕಾರಾಂ ಅವರನ್ನೇ ಕಣ್ಣಕಿಳಿಸಲು ಬಯಸಿದ್ದಾರೆ.
ಬುಧವಾರ ಸಿದ್ದರಾಮಯ್ಯ ಅವರು ತುಕಾರಾಂ ಅವರಿಗೆ ನೀನು ಒಪ್ಪಲೇಬೇಕೆಂದು ಹಠ ಹಿಡಿದು ಬೆಂಗಳೂರಿಗೆ ಕರೆಸಿ ಮಾತನಾಡಿದ್ದಾರೆ. ಸಚಿವರಾದ ಸಂತೋಷ್ ಲಾಡ್, ಬಿ.ನಾಗೇಂದ್ರ, ಜಮೀರ್ ಅಹಮ್ಮದ್ , ಮಾಜಿ ಎಂಎಲ್ ಸಿ ಕೆಎಸ್.ಎಲ್ ಸ್ವಾಮಿ, ಇಬ್ಬರು ಜಿಲ್ಲಾ ಅಧ್ಯಕ್ಷರಾದ ಮಹಮ್ಮದ್ ರಫೀಕ್, ಬಿ ವಿ ಶಿವಯೋಗಿ ಮೊದಲಾದವರು ಸೇರಿ ತುಕಾರಾಂ ಅವರಿಗೆ ಸ್ಪರ್ಧೆ ಮಾಡಲು ಒಪ್ಪಿಸಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ.

ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.