“ಕೇಂದ್ರದಿಂದ ಜಿಎಸ್‌ಟಿ ಮೋಸದ ಬಗ್ಗೆ ಜನರೇ ಏರ್ಪಡಿಸಿರುವ ಬಹಿರಂಗ ಚರ್ಚೆಗೆ ನಾನು ಸಿದ್ದ. ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಿದ್ದರಿದ್ದಾರ?”..ಹೀಗಂತ ಸವಾಲೆಸೆದಿರುವುದು ಕಂದಾಯ ಸಚಿವ ಕೃಷ್ಣಬೈರೇಗೌಡ.
ಈ ಬಗ್ಗೆ ಹೇಳಿಕೆ ನೀಡಿರುವ ಸಚಿವ ಕೃಷ್ಣಬೈರೇಗೌಡ, “ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಸತತವಾಗಿ ಅನ್ಯಾಯವಾಗುತ್ತಿದೆ. ಅದರಲ್ಲೂ ಮುಖ್ಯವಾಗಿ ಜಿಎಸ್‌ಟಿ ತೆರಿಗೆ ಹಂಚಿಕೆ ವಿಚಾರದಲ್ಲಂತೂ ಕೇಂದ್ರ ಸರ್ಕಾರ ರಾಜ್ಯಕ್ಕೆ ಬಹಿರಂಗವಾಗಿಯೇ ಅನ್ಯಾಯ ಎಸಗುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ಹಣಕಾಸು ಆಯೋಗ 2020-21ನೇ ಸಾಲಿನ ಅಂತಿಮ ವರದಿಯಲ್ಲಿ ಕರ್ನಾಟಕಕ್ಕೆ ರೂ.5495 ಕೋಟಿ ವಿಶೇಷ ಅನುದಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಅಲ್ಲದೆ, 2021-26ನೇ ಸಾಲಿನ ವರದಿಯಲ್ಲೂ ರೂ.6,000 ಕೋಟಿ ವಿಶೇಷ ಅನುದಾನ ನೀಡುವಂತೆ ಶಿಫಾರಸು ಮಾಡಿದೆ. ಒಟ್ಟಾರೆ ಕೇಂದ್ರದಿಂದ ಕರ್ನಾಟಕಕ್ಕೆ ರೂ.11495 ಕೋಟಿ ಹಣ ವಿಶೇಷ ಅನುದಾನದ ರೂಪದಲ್ಲಿ ಬರಬೇಕಿದೆ” ಎಂದು ತಿಳಿಸಿದ್ದಾರೆ.
“ಕರ್ನಾಟಕಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಆದರೆ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಣಕಾಸು ಆಯೋಗ ಅಂತಹದ್ದೊಂದು ಶಿಫಾರಸು ಮಾಡೇ ಇಲ್ಲ. ನಾವು ಹಣಕಾಸು ಆಯೋಗದ ಒಂದೇ ಒಂದು ಶಿಫಾರಸ್ಸನ್ನು ಸಹ ತಿದ್ದಲು ಹೋಗುವುದಿಲ್ಲ ಎಂದು ಹಸಿ ಹಸಿ ಸುಳ್ಳುಗಳನ್ನು ಹೇಳುತ್ತಾ ರಾಜ್ಯಕ್ಕೆ ಅನ್ಯಾಯವೆಸಗುತ್ತಿದ್ದಾರೆ” ಎಂದು ಆಕ್ರೋಶ ಹೊರಹಾಕಿದ್ದಾರೆ.
I have accepted the invite of civil society to debate issues of fiscal federalism and injustices to K’taka with truth and facts. Hon Chief minister, Sri @Siddaramaiah and myself had invited Hon Finance minister for an open debate. I hope she will participate. #GOK pic.twitter.com/EIaxVKqsvh
— Krishna Byre Gowda (@krishnabgowda) April 5, 2024
“ಒಂದೆಡೆ ಅಮಿತ್ ಶಾ ಸ್ವತಃ ರಾಜ್ಯಕ್ಕೆ ಆಗಮಿಸಿ ಚುನಾವಣಾ ಪ್ರಚಾರದಲ್ಲಿ ರಾಜ್ಯಕ್ಕೆ ನೀಡಬೇಕಾದ ಬರ ಪರಿಹಾರದ ಬಗ್ಗೆ ಸುಳ್ಳು ಹೇಳುತ್ತಿದ್ದರೆ, ನಿರ್ಮಲಾ ಸೀತಾರಾಮನ್ ಅವರಂತೂ ತೆರಿಗೆ ಹಂಚಿಕೆ ಹಾಗೂ ಹಣಕಾಸು ಆಯೋಗದ ಶಿಫಾರಸಿನ ಬಗ್ಗೆ ಹಲವು ದಿನಗಳಿಂದಲೂ ಸರಣಿ ಸುಳ್ಳುಗಳನ್ನು ಹೇಳುತ್ತಾ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಇದರಿಂದ ಜನರೂ ಸಹ ಗೊಂದಲಕ್ಕೀಡಾಗಿದ್ದಾರೆ. ತೆರಿಗೆ ಹಂಚಿಕೆ ಬಗ್ಗೆ ರಾಜ್ಯ ಸರ್ಕಾರ ಹೇಳುತ್ತಿರುವುದು ನಿಜವೇ? ಅಥವಾ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳುತ್ತಿರುವುದು ನಿಜವೇ? ಎಂಬ ಗೊಂದಲ ಅವರನ್ನೂ ಕಾಡುತ್ತಿರುವುದು ಸುಳ್ಳಲ್ಲ” ಎಂದು ಸಚಿವ ಕೃಷ್ಣಬೈರೇಗೌಡ ಹೇಳಿಕೆಯಲ್ಲಿ ತಿಳಿಸಿದ್ದಾರೆ.
“ಹೀಗಾಗಿ ಯಾವುದು ಸತ್ಯ? ಯಾವುದು ಸುಳ್ಳು? ಎಂದು ತಿಳಿದುಕೊಳ್ಳುವ ಸಲುವಾಗಿ ರಾಜ್ಯದ ಒಂದಷ್ಟು ಪ್ರಜ್ಞಾವಂತ ಜನ ಸಮೂಹ ಒಂದಾಗಿ ಬಹಿರಂಗ ಚರ್ಚೆಗೆ ವೇದಿಕೆ ಸಿದ್ದಪಡಿಸಿದೆ. ಏಪ್ರಿಲ್ 06ರ ಶನಿವಾರ ಸಂಜೆ 05 ಗಂಟೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ಬಹಿರಂಗ ಚರ್ಚೆಯಲ್ಲಿ ಪಾಲ್ಗೊಳ್ಳುವಂತೆ ರಾಜ್ಯದ ಕಂದಾಯ ಸಚಿವ ಹಾಗೂ ಜಿಎಸ್‌ಟಿ ಮಂಡಳಿ ಸದಸ್ಯನಾಗಿರುವ ನನ್ನನ್ನು ಹಾಗೂ ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಬಹಿರಂಗ ಚರ್ಚೆಗೆ ಆಹ್ವಾನಿಸಲಾಗಿದೆ. ಬಹಿರಂಗ ಚರ್ಚೆಯಲ್ಲಿ ಪಾಲ್ಗೊಳ್ಳಲು ನಾನು ಈಗಾಗಲೇ ಒಪ್ಪಿಗೆ ಸೂಚಿಸಿದ್ದೇನೆ” ಎಂದು ಕಂದಾಯ ಸಚಿವರು ತಿಳಿಸಿದ್ದಾರೆ.
“ರಾಜ್ಯದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿ ಸಚಿವ ಸ್ಥಾನವನ್ನೂ ಅಲಂಕರಿಸಿರುವ ನಿರ್ಮಲಾ ಸೀತಾರಾಮನ್ ಅವರೂ ಸಹ ಸಕಾರಾತ್ಮಕವಾಗಿ ಸ್ಪಂದಿಸಿ, ಈ ಚರ್ಚೆಯಲ್ಲಿ ಪಾಲ್ಗೊಂಡು ಜಿಎಸ್‌ಟಿ ತೆರಿಗೆ ಹಂಚಿಕೆ ಕುರಿತು ರಾಜ್ಯದ ಜನ ಸಾಮಾನ್ಯರಲ್ಲಿ ಮೂಡಿರುವ ಗೊಂದಲಕ್ಕೆ ತೆರೆ ಎಳೆಯಬೇಕು ಎಂದು ಈ ಮೂಲಕ ನಾನು ಅವರಲ್ಲಿ ಕೇಳಿಕೊಳ್ಳುತ್ತೇನೆ” ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿಕೆಯಲ್ಲಿ ತಿಳಿಸಿದ್ದಾರೆ.
