ಚುನಾವಣೆಗಾಗಿ ಅಪೂರ್ಣಗೊಂಡ ರಾಮಮಂದಿರ ಉದ್ಘಾಟಿಸುತ್ತಿರುವ ಮೋದಿ: ಸಿಎಂ ಸಿದ್ದರಾಮಯ್ಯ

Date:

Advertisements

ರಾಮಮಂದಿರ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕರು ಭಾಗವಹಿಸದಿರುವ ಸಂಬಂಧ ಮುಖ್ಯಮಂತ್ರಿ
ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸದೆ ಇರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಮ್ಮ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಅಧೀರ್ ಚೌದರಿ ಅವರ ತೀರ್ಮಾನ ಸರಿಯಾಗಿದೆ, ಇದನ್ನು ನಾನು ಬೆಂಬಲಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಅವರು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿ, “ಜಾತಿ, ಧರ್ಮ, ಪಕ್ಷ-ಪಂಥವನ್ನು ಮೀರಿ ಸರ್ವರನ್ನೂ ಒಳಗೊಂಡು ಭಕ್ತಿ ಮತ್ತು ಗೌರವದಿಂದ ನಡೆಸಬೇಕಾದ ಒಂದು ಧಾರ್ಮಿಕ ಕಾರ್ಯಕ್ರಮವನ್ನು ಒಂದು ಪಕ್ಷದ ಕಾರ್ಯಕ್ರಮವನ್ನಾಗಿ ಮಾಡಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಸಂಘ ಪರಿವಾರದ ನಾಯಕರು ಶ್ರೀರಾಮನಿಗೆ ಹಾಗೂ ದೇಶದ 140 ಕೋಟಿ ಜನತೆಗೆ ಅಗೌರವವನ್ನುಂಟು ಮಾಡಿದ್ದಾರೆ. ಶ್ರದ್ದಾಪೂರ್ವಕವಾಗಿ ನಡೆಸಬೇಕಾಗಿದ್ದ ಧಾರ್ಮಿಕ ಕಾರ್ಯಕ್ರಮವನ್ನು ರಾಜಕೀಯ ಪ್ರಚಾರದ ಅಭಿಯಾನವನ್ನಾಗಿ ಮಾಡಿದ್ದು ಸಮಸ್ತ ಹಿಂದೂ ಬಾಂಧವರಿಗೆ ಮಾಡಿರುವ ದ್ರೋಹವಾಗಿದೆ” ಎಂದು ಆರೋಪಿಸಿದ್ದಾರೆ.

“ಹಿಂದೂ ಧರ್ಮದ ಸಂಸ್ಕೃತಿ, ಆಚಾರ-ವಿಚಾರಗಳ ಬಗ್ಗೆ ಪ್ರತಿನಿತ್ಯ ಉಪದೇಶ ನೀಡುವ ಬಿಜೆಪಿ ಮತ್ತು ಆರ್.ಎಸ್‌.ಎಸ್ ನಾಯಕರು ಅಪೂರ್ಣಗೊಂಡಿರುವ ಶ್ರೀರಾಮನ ದೇವಸ್ಥಾನವನ್ನು ಉದ್ಘಾಟಿಸಲು ಹೊರಟಿರುವ ಪ್ರಧಾನಿ ನರೇಂದ್ರ ಮೋದಿ ಅವರ ನಡೆಯ ಬಗ್ಗೆ ಮೌನವಾಗಿರುವುದು ಇವರೆಲ್ಲರ ಪೊಳ್ಳು ಹಿಂದುತ್ವದ ಮುಖವಾಡವನ್ನು ಬಯಲುಗೊಳಿಸಿದೆ” ಎಂದು ಟೀಕಿಸಿದ್ದಾರೆ.

Advertisements

“ರಾಮಜನ್ಮಭೂಮಿ ವಿವಾದ ಶುರುವಾದ ದಿನದಿಂದ ಕಾಂಗ್ರೆಸ್ ತನ್ನ ನಿಲುವಿಗೆ ಬದ್ಧವಾಗಿ ಉಳಿದಿದೆ. ನ್ಯಾಯಾಲಯದ ತೀರ್ಪಿಗೆ ನಾವು ತಲೆಬಾಗುತ್ತೇವೆ ಎಂಬ ನಮ್ಮ ನಿಲುವಿನಂತೆ ರಾಮಮಂದಿರ ನಿರ್ಮಾಣಕ್ಕೆ ನಮ್ಮ ಸಂಪೂರ್ಣ ಬೆಂಬಲ ನೀಡಿದ್ದೆವು. ಇದರ ಬಗ್ಗೆ ನಮ್ಮಲ್ಲಿ ಯಾವುದೇ ತಕರಾರಿಲ್ಲ. ಮುಸ್ಲಿಂ ಬಾಂಧವರು ಕೂಡಾ ನ್ಯಾಯಾಲಯದ ತೀರ್ಪನ್ನು ಒಪ್ಪಿಕೊಂಡು ನ್ಯಾಯಾಂಗದ ಮೇಲಿನ ತಮ್ಮ ನಿಷ್ಠೆಯನ್ನು ಸಾಬೀತುಪಡಿಸಿದ್ದಾರೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಭಿಮಾನ ಅಂಧಾಭಿಮಾನವಾಗದಿರಲಿ; ಬಡವರ ಮಕ್ಕಳು ಬಲಿಯಾಗದಿರಲಿ

“ರಾಮಮಂದಿರದಲ್ಲಿ ಶೈವರು-ಶಾಕ್ತರಿಗೆ ಅಧಿಕಾರ ಇಲ್ಲ ಎಂಬ ರಾಮಮಂದಿರ ಟ್ರಸ್ಟ್‌ನ ಕಾರ್ಯದರ್ಶಿಯವರ ಹೇಳಿಕೆ ವಿವಾದ ಸೃಷ್ಟಿಸಿದೆ. ಇದು ನಿಜವೆಂದಾದರೆ ಇದು ಸಮಸ್ತ ಶೈವ ಆರಾಧಕರಿಗೆ ಮಾಡಿರುವ ಅವಮಾನವಾಗಿದೆ. ಇದೇ ರೀತಿ ರಾಮಮಂದಿರವನ್ನು ರಾಜಕೀಯಕ್ಕಾಗಿ ದುರುಪಯೋಗಗೊಳಿಸುತ್ತಿರುವುದನ್ನು ವಿರೋಧಿಸಿ ನಾಲ್ವರು ಶಂಕರಾಚಾರ್ಯರು ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಬಹಿಷ್ಕರಿಸುವುದಾಗಿ ಹೇಳಿರುವುದು ವರದಿಯಾಗಿದೆ. ಸಮಸ್ತ ಹಿಂದೂಗಳನ್ನು ಒಗ್ಗೂಡಿಸುವ ಕಾರ್ಯಕ್ರಮವಾಗಬೇಕಾಗಿದ್ದ ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ರಮ ಬಿಜೆಪಿಯ ರಾಜಕೀಯದಿಂದಾಗಿ ಹಿಂದೂಗಳನ್ನು ಒಡೆಯುವ ಕಾರ್ಯಕ್ರಮವಾಗಿರುವುದು ದುರಂತ” ಎಂದು ಹೇಳಿದ್ದಾರೆ.

“ಇನ್ನೇನು ಹತ್ತು ವರ್ಷಗಳ ಆಡಳಿತವನ್ನು ಪೂರ್ಣಗೊಳಿಸಲಿರುವ ಪ್ರಧಾನಿ ನರೇಂದ್ರಮೋದಿ ಅವರಿಗೆ ತಮ್ಮ ಸಾಧನೆಯನ್ನು ಮತದಾರರ ಮುಂದಿಟ್ಟು ಚುನಾವಣೆಯನ್ನು ಗೆಲ್ಲುವ ಆತ್ಮವಿಶ್ವಾಸ ಇಲ್ಲ. ಇದಕ್ಕಾಗಿ ಲೋಕಸಭಾ ಚುನಾವಣೆಯ ಕಾಲದಲ್ಲಿಯೇ ಅವಸರದಿಂದ ಅಪೂರ್ಣ ಸ್ಥಿತಿಯಲ್ಲಿರುವ ರಾಮಮಂದಿರವನ್ನು ಉದ್ಘಾಟಿಸಿ ಈ ಮೂಲಕ ಹಿಂದುತ್ವದ ಅಲೆಯನ್ನು ಬಡಿದೆಬ್ಬಿಸಿ ಅದರ ಮರೆಯಲ್ಲಿ ತಮ್ಮ ವೈಫಲ್ಯವನ್ನು ಮುಚ್ಚಿಹಾಕುವ ಪ್ರಯತ್ನ ನಡೆಸಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

“ಕಳೆದ 30-35 ವರ್ಷಗಳಿಂದ ಬಿಜೆಪಿ ಮತ್ತು ಸಂಘ ಪರಿವಾರ ರಾಮನ ಹೆಸರಲ್ಲಿ ನಡೆಸಿಕೊಂಡು ಬಂದಿರುವ ರಾಜಕೀಯವನ್ನು ಗಂಭೀರವಾಗಿ ಗಮನಿಸುತ್ತಾ ಬಂದಿರುವ ದೇಶದ ಜನತೆ ಈ ಬಾರಿ ಇಂತಹ ಡೋಂಗಿ ಹಿಂದುತ್ವದ ಜಾಲಕ್ಕೆ ಖಂಡಿತ ಬಲಿಯಾಗುವುದಿಲ್ಲ ಎಂಬ ವಿಶ್ವಾಸ ನನಗಿದೆ. ಈಗಾಗಲೇ ಜನ ಇಟ್ಟಿಗೆಯ ಹೆಸರಲ್ಲಿ ಸಂಗ್ರಹಿಸಿರುವ ದೇಣಿಗೆಯ ಲೆಕ್ಕವನ್ನು ಕೇಳತೊಡಗಿದ್ದಾರೆ” ಎಂದು ಹೇಳಿದ್ದಾರೆ.

“ಶ್ರೀರಾಮನ ಮೇಲೆ ನಂಬಿಕೆ ಮತ್ತು ಭಕ್ತಿ ಇದ್ದವರು ಪ್ರತಿದಿನ ಆತನನ್ನು ಪೂಜಿಸುವುದು ಹೇಗೆ ಧಾರ್ಮಿಕ ಕರ್ತವ್ಯವೋ, ಅದೇ ರೀತಿ ಶ್ರೀರಾಮನನ್ನು ರಾಜಕೀಯಕ್ಕೆ ಬಳಸುವವರ ವಿರುದ್ಧ ದನಿ ಎತ್ತುವುದು ಕೂಡಾ ಅಷ್ಟೇ ಪವಿತ್ರವಾದ ಧಾರ್ಮಿಕ ಕರ್ತವ್ಯವಾಗಿದೆ. ಯಾವ ಧರ್ಮ ಕೂಡಾ ಇನ್ನೊಂದು ಧರ್ಮವನ್ನು ದ್ವೇಷಿಸುವುದಿಲ್ಲ, ನಿರಾಕರಿಸುವುದಿಲ್ಲ. ಸಮಾಜವನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿ ಮಾಡುವ ಸಂವಿಧಾನದ ಆಶಯಕ್ಕೆ ನಾನು ಮತ್ತು ನಮ್ಮ ಪಕ್ಷ ಬದ್ಧವಾಗಿದೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X