ವಾಹನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ಎಲ್‌ಇಡಿ ದೀಪಗಳನ್ನು ಅಳವಡಿಸುತ್ತಿರುವ ಕ್ರಮದ ವಿರುದ್ಧ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದ್ದು, ಕಟ್ಟುನಿಟ್ಟನ ಕಾನೂನು ಕ್ರಮಕೈಗೊಳ್ಳಲು ಮುಂದಾಗಿದೆ.
ಇತ್ತೀಚಿನ ದಿನಗಳಲ್ಲಿ ಹಲವಾರು ವಾಹನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ಎಲ್‌ಇಡಿ ದೀಪಗಳನ್ನು ಅಳವಡಿಸುತ್ತಿರುವುದು ಹೆಚ್ಚಾಗಿದೆ. ಇದರಿಂದ ಎದುರು ಮುಖದಲ್ಲಿ ಸಂಚರಿಸುವ ಇತರೆ ವಾಹನ ಸವಾರರಿಗೆ ತೀವ್ರ ತೊಂದರೆಯುಂಟಾಗಿ, ಹೆಚ್ಚು ರಸ್ತೆ ಅಪಘಾತಗಳು ಸಂಭವಿಸುತ್ತಿರುವುದು ಕಂಡು ಬಂದಿದೆ.
ಪ್ರಮುಖವಾಗಿ ಭಾರಿ ಗಾತ್ರ ವಾಹನಗಳಾದ ಲಾರಿ, ಟ್ರಕ್, ಬಸ್ ಮುಂತಾದವುಗಳು ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್‌ಇಡಿ ದೀಪಗಳನ್ನು ತಮ್ಮ ವಾಹನಗಳಲ್ಲಿ ಅಳವಡಿಸುತ್ತಿರುವುದರಿಂದ ಇತರ ವಾಹನ ಚಾಲಕರುಗಳಿಗೆ ವಾಹನ ಚಲಾಯಿಸಲು ತೊಂದರೆಯಾಗುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ.
ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದ್ದು, ವಾಹನಗಳಿಗೆ ಎಲ್‌ಇಡಿ ದೀಪಗಳನ್ನು ಅಳವಡಿಸುತ್ತಿರುವ ವಾಹನ ಸವಾರರ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆಯನ್ನು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರು, ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಆಲೋಕ್ ಕುಮಾರ್ ನೀಡಿದ್ದಾರೆ.
ವಾಹನ ಸವಾರರು ತಮ್ಮ ತಮ್ಮ ವಾಹನಗಳಿಗೆ ಕೇಂದ್ರ ಮೋಟಾರು ವಾಹನ ಕಾಯ್ದೆಯಲ್ಲಿ ನಮೂದಿಸಿರುವ ಮಾನದಂಡದಂತೆ ಅಳವಡಿಸಬೇಕಾಗಿರುವ ಹೆಡ್‌ಲೈಟ್‌ಗಳನ್ನೇ ಅಳವಡಿಸಬೇಕಾಗಿರುವುದು ಕಡ್ಡಾಯವಾಗಿದೆ. ಒಂದು ವೇಳೆ ಸಿಎಂವಿ ಕಾಯ್ದೆಯಲ್ಲಿನ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಲ್ಲಿ ಅಂತಹ ವಾಹನ ಸವಾರರ ವಿರುದ್ಧ ಐಎಂವಿ ಕಾಯ್ದೆಯ ಕಲಂ 177 ರಡಿ ಪ್ರಕರಣಗಳನ್ನು ದಾಖಲಿಸಿ ಎಂದು ಆಲೋಕ್ ಕುಮಾರ್ ಸೂಚಿಸಿದ್ದಾರೆ.
ಎಲ್ಲ ಪೊಲೀಸ್ ಆಯುಕ್ತರಿಗೆ, ಜಂಟಿ ಪೊಲೀಸ್ ಆಯುಕ್ತರಿಗೆ ಹಾಗೂ ಪೊಲೀಸ್ ಅಧೀಕ್ಷಕರುಗಳಿಗೆ ಜ್ಞಾಪನ ಪತ್ರ ಹೊರಡಿಸಿದ್ದು, ಘಟಕಾಧಿಕಾರಿಗಳು ತಮ್ಮ ತಮ್ಮ ಘಟಕಗಳಲ್ಲಿ ಸಂಚರಿಸುವ ವಾಹನಗಳಲ್ಲಿ ಈ ರೀತಿಯ ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್‌ಇಡಿ ದೀಪಗಳನ್ನು ಅಳವಡಿಸಿರುವುದು ಕಂಡು ಬಂದಲ್ಲಿ, ಅಂತಹ ವಾಹನ ಸವಾರರ ವಿರುದ್ಧ ಐಎಂವಿ ಕಾಯ್ದೆಯ ಕಲಂ 177 ರಡಿ ಪ್ರಕರಣಗಳನ್ನು ದಾಖಲು ಮಾಡಿ, ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಿದ್ದಾರೆ.
ಹಾಗೆಯೇ ಎಲ್‌ಇಡಿ ದೀಪಗಳನ್ನು ಅಳವಡಿಸಿರುವ ವಾಹನ ಚಾಲಕರ ವಿರುದ್ಧ ಜುಲೈ ತಿಂಗಳಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ, ಪ್ರಕರಣಗಳನ್ನು ದಾಖಲಿಸಿ, ಕೈಗೊಂಡ ಕ್ರಮ ಬಗ್ಗೆ ಪಾಲನಾ ವರದಿಯನ್ನು 31.07.2024 ರೊಳಗಾಗಿ ಕಚೇರಿಗೆ ಸಲ್ಲಿಸಲು ಸೂಚಿಸಿದ್ದಾರೆ.
