ಬಿಜೆಪಿ ತೊರೆದು ಜೆಡಿಎಸ್ ಸೇರಿದ್ದ ಮೂಡಿಗೆರೆ ಮಾಜಿ ಶಾಸಕ ಎಂ.ಪಿ ಕುಮಾರಸ್ವಾಮಿ ಅವರು ಇದೀಗ ಕಾಂಗ್ರೆಸ್ ಸೇರಲು ನಿರ್ಧರಿಸಿದ್ದಾರೆ. “ನಾನು ಕಾಂಗ್ರೆಸ್ ಸೇರುವ ಬಗ್ಗೆ ಕ್ಷೇತ್ರದಲ್ಲಿ ಯಾವುದೇ ಅಡ್ಡಿ-ಆತಂಕಗಳಿಲ್ಲ. ಶೀಘ್ರದಲ್ಲೇ ಕಾಂಗ್ರೆಸ್ ಸೇರುವ ದಿನಾಂಕವನ್ನು ತಿಳಿಸುತ್ತೇನೆ” ಎಂದು ಅವರು ಹೇಳಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷರು ಮತ್ತು ಮುಖ್ಯಮಂತ್ರಿಗಳು ಹೊರ ರಾಜ್ಯಗಳ ಪ್ರವಾಸದಲ್ಲಿದ್ದಾರೆ. ಅವರು ರಾಜ್ಯಕ್ಕೆ ಮರಳಿದ ನಂತರ, ಅವರನ್ನು ಭೇಟಿಯಾಗಿ ಪಕ್ಷಕ್ಕೆ ಸೇರುವ ದಿನಾಂಕ ತೀರ್ಮಾನಿಸುತ್ತೇವೆ ಎಂದು ಅವರು ಹೇಳಿದ್ದಾರೆ.
ಮಹಿಷಾ ದಸರಾ ಬಗ್ಗೆ ಮಾತನಾಡಿದ ಅವರು, “ಮಹಿಷ ನಮ್ಮ ಕುಲದ ನಾಯಕ. ದಲಿತ ಹಿಂದುಳಿದ ಸಮುದಾಯಗಳ ಸ್ವಾಭಿಮಾನದ ಪ್ರತೀಕ. ಮಹಿಷ ದಸರಾ ವಿಚಾರದಲ್ಲಿ ಸಂಸದ ಪ್ರತಾಪ್ ಸಿಂಹ ಅವರ ನಿಲುವಿಗೆ ನನ್ನ ವಿರೋಧವಿದೆ. ಮುಂದೆ ರಾಜ್ಯಾದ್ಯಂತ ಮಹಿಷ ದಸರಾ ಆಚರಿಸುತ್ತೇವೆ” ಎಂದಿದ್ದಾರೆ.
ಹಿಂದಿನ ಸರ್ಕಾರದ ಅವಧಿಯಲ್ಲಿ ಎಂ.ಪಿ ಕುಮಾರಸ್ವಾಮಿ ಅವರು ಮೂಡಿಗೆರೆ ಕ್ಷೇತ್ರದ ಶಾಸಕರಾಗಿದ್ದರು. ಆದರೆ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅವರಿಗೆ ಬಿಜೆಪಿ ಟಿಕೆಟ್ ನೀಡಲಿಲ್ಲ. ಹೀಗಾಗಿ, ಅವರು ಬಿಜೆಪಿಗೆ ರಾಜೀನಾಮೆ ನೀಡಿ ಜೆಡಿಎಸ್ ಸೇರಿದ್ದರು. ಜೆಡಿಎಸ್‌ನಿಂದ ಸ್ಪರ್ಧಿಸಿ ಸೋಲುಂಡಿದ್ದರು. ಇದೀಗ, ಕಾಂಗ್ರೆಸ್ ಸೇರಲು ನಿರ್ಧರಿಸಿದ್ದಾರೆ.
ಆದರೆ, ಅವರು ಕಾಂಗ್ರೆಸ್ ಸೇರುವುದಕ್ಕೆ ಮೂಡಿಗೆರೆ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಹಾಗೂ ಪಕ್ಷದ ಸ್ಥಳೀಯ ಮುಖಂಡರು ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ.