ಮುಡಾ ಪ್ರಕರಣ | ಸೈಟು ಹಿಂದಿರುಗಿಸಲು ನಿರ್ಧರಿಸಿದ ಸಿಎಂ ಸಿದ್ದರಾಮಯ್ಯ ಪತ್ನಿ

Date:

Advertisements

ದೇಶಾದ್ಯಂತ ಮುಡಾ ಪ್ರಕರಣವು ಭಾರೀ ಚರ್ಚೆಯಲ್ಲಿರುವಾಗಲೇ ಸಿಎಂ ಸಿದ್ದರಾಮಯ್ಯ ಅವರ ಪತ್ನಿ, ತಮಗೆ ದೊರೆತಿದ್ದ 14 ಸೈಟ್‌ಗಳನ್ನು ಹಿಂದಿರುಗಿಸಲು ನಿರ್ಧರಿಸಿದ್ದಾರೆ. ಅಲ್ಲದೇ, ಈ ಬಗ್ಗೆ ಸಮಗ್ರ ತನಿಖೆ ನಡೆಯಲಿ ಎಂದು ಸುದೀರ್ಘ ಪತ್ರದ ಮೂಲಕ ಆಗ್ರಹಿಸಿದ್ದಾರೆ.

ಸುದೀರ್ಘವಾದ ಪತ್ರದಲ್ಲಿ ಹಲವು ವಿಚಾರಗಳನ್ನು ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ ಪತ್ನಿ ಶ್ರೀಮತಿ ಪಾರ್ವತಿಯವರು, ಹೆಣ್ಣು ಮಕ್ಕಳನ್ನು ರಾಜಕೀಯ ದ್ವೇಷ ಸಾಧನೆಗಾಗಿ ವಿವಾದದ ಕಣಕ್ಕೆ ಎಳೆದು ತಂದು ಅವರ ಘನತೆ, ಗೌರವಗಳಿಗೆ ಹಾನಿ ಮಾಡಬೇಡಿ ಎಂದು ವಿನಂತಿಸಿಕೊಂಡಿದ್ದಾರೆ.

ಸಿಎಂ ಸಿದ್ದರಾಮಯ್ಯನವರ ಪತ್ನಿ ಪಾರ್ವತಿಯವರ ಪತ್ರ ಹೀಗಿದೆ

Advertisements

“ನನ್ನ ಪತಿಯಾಗಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ 40 ವರ್ಷದ ಸುದೀರ್ಘ ರಾಜಕಾರಣದಲ್ಲಿ ಯಾವುದೇ ಸಣ್ಣ ಕಳಂಕವೂ ಅಂಟಿಕೊಳ್ಳದಂತಹ ನೈತಿಕತೆಯನ್ನು ವ್ರತದಂತೆ ಪಾಲಿಸಿಕೊಂಡು ಬಂದವರು. ರಾಜಕೀಯವೂ ಸೇರಿದಂತೆ ಸಾರ್ವಜನಿಕ ಜೀವನದಲ್ಲಿ ಕಾಣಿಸಿಕೊಂಡು ಅವರಿಗೆ ಮುಜುಗರ ಉಂಟು ಮಾಡಬಾರದು ಎಂಬ ನಿರ್ಧಾರಕ್ಕೆ ಬದ್ಧಳಾಗಿ ಬದುಕಿದವಳು. ನಾನೆಂದೂ ಮನೆ, ಆಸ್ತಿ, ಚಿನ್ನ, ಸಂಪತ್ತನ್ನು ಬಯಸಿದವಳಲ್ಲ. ಯಾವುದೇ ಕಾರಣಕ್ಕೂ ನನ್ನಿಂದ ಅವರ ರಾಜಕೀಯ ಜೀವನಕ್ಕೆ ಒಂದು ಸಣ್ಣ ಹನಿಯಷ್ಟೂ ಕಳಂಕ ತಟ್ಟಬಾರದೆಂದು ಎಚ್ಚರಿಕೆಯಿಂದ ನಡೆದುಕೊಂಡವಳು. ನನ್ನ ಪತಿಗೆ ರಾಜ್ಯದ ಜನತೆ ಹರಿಸುತ್ತಾ ಬಂದ ಪ್ರೀತಿ ಅಭಿಮಾನಗಳನ್ನು ದೂರದಿಂದಲೇ ಕಂಡು ಸಂತೋಷ ಮತ್ತು ಹೆಮ್ಮೆ ಪಟ್ಟವಳು. ಹೀಗಿದ್ದರೂ ಮೈಸೂರಿನ ಮುಡಾ ನಿವೇಶನಕ್ಕೆ ಸಂಬಂಧಿಸಿದಂತೆ ಕೇಳಿಬಂದ ಆರೋಪಗಳಿಂದ ನಾನು ಘಾಸಿಗೊಂಡಿದ್ದೇನೆ. ನನ್ನ ಸ್ವಂತ ಸೋದರ ಅರಿಶಿನ – ಕುಂಕುಮದ ಭಾಗವಾಗಿ ಕೊಟ್ಟ ಜಮೀನಿನ ಬಾಬ್ತು ಪಡೆದ ನಿವೇಶನಗಳು ಇಷ್ಟೊಂದು ರಾದ್ಧಾಂತವಾಗುತ್ತದೆ. ಇದರಿಂದ ನನ್ನ ಪತಿಯವರು ಅನ್ಯಾಯವಾಗಿ ಆರೋಪಗಳನ್ನು ಎದುರಿಸುವಂತಾಗಬಹುದು ಎನ್ನುವುದನ್ನು ನಾನು ಊಹಿಸಿದವಳೂ ಅಲ್ಲ.

WhatsApp Image 2024 09 30 at 10.00.32 PM

ನನಗೆ ಈ ನಿವೇಶನ, ಮನೆ, ಆಸ್ತಿ, ಸಂಪತ್ತು ಯಾವುದೂ ಕೂಡ ನನ್ನ ಪತಿಯ ಗೌರವ, ಘನತೆ, ಮರ್ಯಾದೆ ಮತ್ತು ಅವರ ನೆಮ್ಮದಿಗಿಂತ ದೊಡ್ಡದಲ್ಲ. ಇಷ್ಟು ವರ್ಷಗಳ ಕಾಲ ಅಧಿಕಾರದಲ್ಲಿದ್ದ ಅವರಿಂದ ಏನನ್ನೂ ನನಗಾಗಲೀ, ನನ್ನ ಕುಟುಂಬಕ್ಕಾಗಲೀ ಬಯಸದೇ ಇದ್ದ ನನಗೆ ಈ ನಿವೇಶನಗಳು ತೃಣಕ್ಕೆ ಸಮ. ಈ ಹಿನ್ನೆಲೆಯಲ್ಲಿ ವಿವಾದಕ್ಕೆ ಕಾರಣವಾಗಿರುವ ಮುಡಾದ 14 ನಿವೇಶನಗಳನ್ನು ವಾಪಸ್ ಮಾಡಲು ನಿರ್ಧರಿಸಿದ್ದೇನೆ. ಈ ಬಗ್ಗೆ ನನ್ನ ಪತಿಯವರ ಅಭಿಪ್ರಾಯ ಏನಿದೆ ಎನ್ನುವುದು ನನಗೆ ತಿಳಿದಿಲ್ಲ. ನನ್ನ ಮಗನ ಬಳಿಯಾಗಲಿ, ನನ್ನ ಕುಟುಂಬದ ಇತರ ಸದಸ್ಯರ ಬಳಿಯಾಗಲಿ ಇದರ ಬಗ್ಗೆ ನಾನು ಚರ್ಚಿಸಿಲ್ಲ. ಇದು ನಾನು ನನ್ನ ಆತ್ಮಸಾಕ್ಷಿಯ ಕರೆಗೆ ಓಗೊಟ್ಟು ಪ್ರಜ್ಞಾಪೂರ್ವಕವಾಗಿ ಕೈಗೊಂಡಿರುವ ತೀರ್ಮಾನ.

ಈ ಹಂತದಲ್ಲಿ ಇಂತಹ ನಿರ್ಧಾರಕ್ಕೆ ಏಕೆ ಬಂದಿರಿ? ಎಂದು ಯಾರಾದರೂ ಕೇಳಬಹುದು. ಆರೋಪ ಕೇಳಿ ಬಂದ ದಿನವೇ ನಾನು ಈ ನಿರ್ಧಾರ ಮಾಡಿದ್ದೆ. ಆದರೆ, ಈ ಮುಡಾ ನಿವೇಶನ ಹಂಚಿಕೆಯ ಆರೋಪವನ್ನು ರಾಜಕೀಯ ದುರುದ್ದೇಶದಿಂದ ಮಾಡಲಾಗಿದ್ದು, ಈ ಅನ್ಯಾಯದ ವಿರುದ್ಧ ಹೋರಾಡಬೇಕು. ಅವರ ಸಂಚಿಗೆ ನಾವು ಬಲಿಯಾಗಬಾರದು ಎಂದು ಕೆಲವು ಹಿತೈಷಿಗಳು ಹೇಳಿದ ಕಾರಣಕ್ಕೆ ನಿವೇಶನ ವಾಪಸು ಮಾಡಬೇಕೆಂಬ ನಿರ್ಧಾರವನ್ನು ಕೈ ಬಿಟ್ಟಿದ್ದೆ. ನನ್ನ ಈ ನಿರ್ಧಾರ ಅಚಲವಾಗಿದ್ದು, ಈ ನಿವೇಶನಗಳನ್ನು ವಾಪಸು ನೀಡುವುದರ ಜೊತೆಗೆ ಮುಡಾಕ್ಕೆ ಸಂಬಂಧಿಸಿದ ಎಲ್ಲಾ ಆರೋಪಗಳ ಬಗ್ಗೆ ಸಮಗ್ರ ತನಿಖೆ ಮಾಡಬೇಕೆಂದು ಆಗ್ರಹಿಸುತ್ತೇನೆ.

ಕೊನೆಯದಾಗಿ, ಎಲ್ಲ ರಾಜಕೀಯ ಪಕ್ಷದ ನಾಯಕರು ಮತ್ತು ಮಾಧ್ಯಮ ಕ್ಷೇತ್ರದ ಬಂಧುಗಳಲ್ಲಿ ನನ್ನ ವಿನಮ್ರ ವಿನಂತಿ. ದಯವಿಟ್ಟು ರಾಜಕೀಯ ಕ್ಷೇತ್ರದಿಂದ ದೂರವಿದ್ದು, ತಮ್ಮ ಪಾಡಿಗೆ ತಾವಿರುವ ರಾಜಕೀಯ ಕುಟುಂಬದ ಹೆಣ್ಣು ಮಕ್ಕಳನ್ನು ರಾಜಕೀಯ ದ್ವೇಷ ಸಾಧನೆಗಾಗಿ ವಿವಾದದ ಕಣಕ್ಕೆ ಎಳೆದು ತಂದು ಅವರ ಘನತೆ, ಗೌರವಗಳಿಗೆ ಹಾನಿ ಮಾಡಬೇಡಿ.

‘ಶ್ರೀಮತಿ ಪಾರ್ವತಿ’ ಎಂಬ ಒಕ್ಕಣೆಯೊಂದಿಗೆ ಪತ್ರವನ್ನು ಕೊನೆಗೊಳಿಸಿದ್ದಾರೆ.

WhatsApp Image 2024 09 30 at 10.00.33 PM
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X