ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ನಡೆಸಿದ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿ ಮಾಡಿದೆ.
ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಕರ್ನಾಟಕ ಹೈಕೋರ್ಟ್‌ಗೆ ರಿಟ್ ಅರ್ಜಿಯನ್ನು ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮಂಗಳವಾರ ನಡೆಸಿದೆ.
ಇದನ್ನು ಓದಿದ್ದೀರಾ? ಬಾಗಲಕೋಟೆ | ಮುಡಾ ಪ್ರಕರಣ; ನ.6ರಂದು ಅರೆಬೆತ್ತಲೆ ಮೆರವಣಿಗೆಗೆ ದಸಂಸ ಕರೆ
ಸ್ನೇಹಮಯಿ ಕೃಷ್ಣ ಪರ ಹಿರಿಯ ವಕೀಲ ಕೆ ಜಿ ರಾಘವನ್ ಹಾಜರಾಗಿದ್ದು, ತನಿಖೆಯಲ್ಲಿ ಸಾರ್ವಜನಿಕ ನಂಬಿಕೆ ಬರಬೇಕು. ಅದಕ್ಕಾಗಿ ಸಿಬಿಐ ತನಿಖೆ ಅಗತ್ಯ ಎಂದು ಹೇಳಿದ್ದಾರೆ.
ನವೆಂಬರ್ 25ರವರೆಗೆ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಏನೆಲ್ಲಾ ತನಿಖೆ ನಡೆಸಲಾಗಿದೆ ಎಂಬುದರ ವರದಿಯನ್ನು ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಲು ಹೈಕೋರ್ಟ್ ಸೂಚಿಸಿದೆ. ಜೊತೆಗೆ ಎಲ್ಲಾ ಪ್ರತಿವಾದಿಗಳು ನೋಟಿಸ್ ಜಾರಿ ಮಾಡಿ ನವೆಂಬರ್ 26ಕ್ಕೆ ವಿಚಾರಣೆ ಮುಂದೂಡಿದೆ.
ಹೈಕೋರ್ಟ್ ಪ್ರಕರಣದ ಪ್ರತಿವಾದಿಗಳಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿ.ಎಂ.ಪಾರ್ವತಿ, ಮಲ್ಲಿಕಾರ್ಜುನ ಸ್ವಾಮಿ, ಜೆ.ದೇವರಾಜು, ಮೈಸೂರು ಜಿಲ್ಲಾ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ, ಕೇಂದ್ರ ಗೃಹ ಸಚಿವಾಲಯದ ಕಾರ್ಯದರ್ಶಿ, ಲೋಕಾಯುಕ್ತ ಎಡಿಜಿಪಿ, ರಾಜ್ಯ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ರಾಜ್ಯ ಡಿಜಿ-ಐಜಿಪಿ, ವಿಜಯನಗರ ಪೊಲೀಸ್ ಠಾಣಾಧಿಕಾರಿ ಮತ್ತು ಸಿಬಿಐ ನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿದೆ.
ರಾಜ್ಯ ಸರ್ಕಾರದ ಪರ ರಾಜ್ಯದ ಹೆಚ್ಚುವರಿ ಪ್ರಾಸಿಕ್ಯೂಟರ್ ಬಿ.ಎನ್.ಜಗದೀಶ್, ಸಿಬಿಐ ಪರ ಪಿ.ಪ್ರಸನ್ನ ಕುಮಾರ್ ನೋಟಿಸ್ ಪಡೆದರು.
