ಮೈಸೂರು ಅಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ನೋಟಿಸ್ ಜಾರಿಗೊಳಿಸುವಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.
ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಅಕ್ರಮವಾಗಿ 14 ಮುಡಾ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿ ಸ್ನೇಹಮಯಿ ಕೃಷ್ಣ ಎಂಬವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಬಳಿಕ ಇಡಿ ಕೂಡ ಪ್ರಕರಣ ದಾಖಲಿಸಿಕೊಂಡಿತ್ತು. ಪ್ರಕರಣವು ಭಾರೀ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿತ್ತು. ತಮ್ಮ ಜಮೀನನ್ನು ಅನುಮತಿ ಪಡೆಯದೆಯೇ ಮುಡಾ ವಶಪಡಿಸಿಕೊಂಡು, ನಿವೇಶನ ನಿರ್ಮಿಸಿತ್ತು. ಅದಕ್ಕೆ ಪರಿಹಾರವಾಗಿ 14 ನಿವೇಶನಗಳನ್ನು ಬೇರೆಡೆ ನೀಡಿದೆ ಎಂದು ಸಿದ್ದರಾಮಯ್ಯ ಮತ್ತು ಪಾರ್ವತಿ ಹೇಳಿದ್ದರು. ಆದಾಗ್ಯೂ, ತಾವು ಪಡೆದಿದ್ದ ನಿವೇಶನಗಳನ್ನು ಮುಡಾಗೆ ಹಿಂದಿರುಗಿಸಿದ್ದರು.
ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡುವಂತೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ವಜಾ ಗೊಳಿಸಿತ್ತು. ಲೋಕಾಯುಕ್ತ ತನಿಖೆಯು ಅಸಮರ್ಪಕವಾಗಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಪೀಠ ಹೇಳಿತ್ತು.
ಬಳಿಕ, ಸ್ನೇಹಮಯಿ ಕೃಷ್ಣ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿಯ ವಿಚಾರಣೆ ನಡೆಸಿರುವ ಹೈಕೋರ್ಟ್ ನ್ಯಾಯಮೂರ್ತಿ ವಿ ಕಾಮೇಶ್ವರ ರಾವ್ ಮತ್ತು ಸಿ.ಎಂ ಜೋಶಿ ಅವರಿದ್ದ ಪೀಠವು, ಪ್ರಕರಣದಲ್ಲಿ ಪಾರ್ವತಿ ಅವರಿಗೆ ಈವರೆಗೆ ನೋಟಿಸ್ ನೀಡಲಾಗಿಲ್ಲ ಎಂಬುದನ್ನು ಗಮನಿಸಿದೆ. ಅವರಿಗೆ ನೋಟಿಸ್ ನೀಡುವಂತೆ ಆದೇಶಿಸಿದೆ. ವಿಚಾರಣೆಯನ್ನು ಸೆಪ್ಟೆಂಬರ್ 4ಕ್ಕೆ ಮುಂದೂಡಿದೆ.