ಮುಡಾ ನಿವೇಶನ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಮೈಸೂರಿನ ಲೋಕಾಯುಕ್ತ ಎಸ್.ಪಿ. ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.
ಬೆಳಿಗ್ಗೆ 10.10ಕ್ಕೆ ಅವರು ವಿಚಾರಣೆಗೆ ಬಂದಿದ್ದು, ಲೋಕಾಯುಕ್ತ ಎಸ್.ಪಿ. ಟಿ.ಜೆ. ಉದೇಶ್ ನೇತೃತ್ವದ ತಂಡವು ಅವರನ್ನು ವಿಚಾರಣೆಗೆ ಒಳಪಡಿಸುತ್ತಿದೆ. ತಮ್ಮ ನಾಲ್ಕೂವರೆ ದಶಕಗಳ ಸುದೀರ್ಘ ರಾಜಕಾರಣದಲ್ಲಿ ಸಿದ್ದರಾಮಯ್ಯ ಅವರು ಇದೇ ಮೊದಲ ಬಾರಿಗೆ ವಿಚಾರಣೆ ಎದುರಿಸುತ್ತಿದ್ದಾರೆ.
ಸಿದ್ದರಾಮಯ್ಯ ಈ ಪ್ರಕರಣದಲ್ಲಿ ಎ1 ಆರೋಪಿ ಆಗಿದ್ದು, ಅಧಿಕಾರಿಗಳ ಮೇಲೆ ಪ್ರಭಾವ ಬೀರಿ ಪತ್ನಿಗೆ ನಿವೇಶನ ಕೊಡಿಸಿದ ಆರೋಪ ಅವರ ಮೇಲಿದೆ. ಪ್ರಕರಣದ ಇತರ ಆರೋಪಿಗಳಾದ ಬಿ.ಎಂ. ಪಾರ್ವತಿ, ಮಲ್ಲಿಕಾರ್ಜುನ ಸ್ವಾಮಿ ಹಾಗೂ ದೇವರಾಜು ಅವರ ವಿಚಾರಣೆಯು ಈಗಾಗಲೇ ಪೂರ್ಣಗೊಂಡಿದೆ.
ಮುಡಾದಿಂದ 50:50 ಅನುಪಾತದಲ್ಲಿ ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ ಅವರು 14 ಬದಲಿ ನಿವೇಶನ ಪಡೆದ ಪ್ರಕರಣದಲ್ಲಿ ಲೋಕಾಯುಕ್ತ ಅಧಿಕಾರಿಗಳು ನ್ಯಾಯಾಲಯದ ನಿರ್ದೇಶನದಂತೆ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.