ಡಾ. ಬಿ.ಆರ್ ಅಂಬೇಡ್ಕರ್ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಕಾಂಗ್ರೆಸ್ ಮುಖಂಡರು ಆಗ್ರಹಿಸಿದ್ದಾರೆ. ಮೈಸೂರು ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.
ಮೈಸೂರಿನಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್ ಸಚಿವರು, ಮುಖಂಡರು ಹಾಗೂ ಕಾರ್ಯಕರ್ತರು ಅಮಿತ್ ಶಾ ಭಾವಚಿತ್ರವನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ರಾಜ್ಯಸಭೆಯಲ್ಲಿ ಅಮಿತ್ ಶಾ ಅವರು ಅಂಬೇಡ್ಕರ್ ಬಗ್ಗೆ ನೀಡಿರುವ ಹೇಳಿಕೆ ದೇಶದ್ರೋಹದ್ದಾಗಿದೆ. ಅವರನ್ನು ಕೂಡಲೇ ಸಚಿವ ಸ್ಥಾನದಿಂದ ರಾಷ್ಟ್ರಪತಿಗಳು ವಜಾಗೊಳಿಸಬೇಕು ಮತ್ತು ಬಂಧಿಸಬೇಕು” ಎಂದು ಆಗ್ರಹಿಸಿದ್ದಾರೆ.
“ಭಾರತವನ್ನು ಹಿಂದು ರಾಷ್ಟ್ರ ಮಾಡಲು ಅಮಿತ್ ಶಾ ಮತ್ತು ಬಿಜೆಪಿಗರು ಸಂವಿಧಾನದ ಆಶಯವನ್ನು ನಾಶಪಡಿಸಲು ಯತ್ನಿಸುತ್ತಿದ್ದಾರೆ. ಅಂಬೇಡ್ಕರ್ ಎನ್ನುವುದು ವ್ಯಸನ ಎಂದಿರುವುದು ರಾಷ್ಟ್ರಕ್ಕೆ ಮಾಡಿದ ಅಪಮಾನ.ಅಮಿತ್ ಶಾ ಅವರಿಗೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕಿಲ್ಲ. ಅವರನ್ನು ಸಚಿವ ಸ್ಥಾನದಿಂದ ರಾಷ್ಟ್ರಪತಿಗಳು ವಜಾಗೊಳಿಸಬೇಕು” ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ ಮಹದೇವಪ್ಪ ಒತ್ತಾಯಿಸಿದ್ದಾರೆ.
“ಕೋಮುಗಲಭೆ ಸೃಷ್ಠಿಸಿ ಗುಜರಾತ್‌ನಿಂದ ಹೊರ ಬಂದಿರುವ ಅಮಿತ್ ಶಾ ದೇಶದ ಗೃಹ ಸಚಿವರಾಗಿರುವುದೇ ಅಪಾಯಕಾರಿ. ಅವರು ಆರ್‌ಎಸ್‌ಎಸ್ ನಿರ್ದೇಶನದಂತೆ ಜನರ ಸಾಂವಿಧಾನಿಕ ಆಕಾಂಕ್ಷೆಗಳನ್ನು ನಾಶ ಮಾಡುತ್ತಿದ್ದಾರೆ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ತನ್ವೀರ್ ಸೇಠ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆಯಲ್ಲಿ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್, ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ, ಶಾಸಕ ದರ್ಶನ್ ದ್ರುವನಾರಾಯಣ, ತಿಮ್ಮಯ್ಯ, ಹರೀಶ್ ಗೌಡ, ಮಾಜಿ ಶಾಸಕ ಎಂ.ಕೆ ಸೋಮಶೇಖರ್, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಪುಷ್ಪಾ ಅಮರನಾಥ್ ಸೇರಿದಂತೆ ಹಲವರು ಇದ್ದರು.