‘ಒಂದು ರಾಷ್ಟ್ರ, ಒಂದು ಚುನಾವಣೆ’ ಕಲ್ಪನೆಯು ಭಾರತದ ಒಕ್ಕೂಟ ಮತ್ತು ಅದರ ಎಲ್ಲ ರಾಜ್ಯಗಳ ಮೇಲಿನ ದಾಳಿಯಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟ್ವಿಟರ್‌ನಲ್ಲಿ ಫೋಸ್ಟ್ ಮಾಡಿರುವ ಅವರು, ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕಲ್ಪನೆಯು ಭಾರತೀಯ ಒಕ್ಕೂಟ ಮತ್ತು ಅದರ ಎಲ್ಲ ರಾಜ್ಯಗಳ ಮೇಲಿನ ದಾಳಿಯಾಗಿದೆ. ಪ್ರತಿಪಕ್ಷಗಳ ಒಕ್ಕೂಟ ‘ಇಂಡಿಯಾ’ ನಿಜವಾದ ಭಾರತವಾಗಿದ್ದು, ರಾಜ್ಯಗಳ ಒಕ್ಕೂಟಗಳನ್ನು ಪ್ರತಿನಿಧಿಸುತ್ತದೆ ಎಂದು ತಿಳಿಸಿದ್ದಾರೆ.
ಏಕಕಾಲಕ್ಕೆ ಚುನಾವಣೆ ನಡೆಸುವ ಸಾಧ್ಯತೆಯ ಕುರಿತು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯನ್ನು ಸರ್ಕಾರ ರಚಿಸಿದ ನಂತರ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸಮಿತಿಯ ಭಾಗವಾಗಲು ಅಧೀರ್ ರಂಜನ್ ಚೌಧರಿ ನಿರಾಕರಣೆ
‘ಒಂದು ರಾಷ್ಟ್ರ, ಒಂದು ಚುನಾವಣೆ’ ಕಲ್ಪನೆಯನ್ನು ಅನುಷ್ಠಾನಗೊಳಿಸುವ ಸಾಧ್ಯತೆಯನ್ನು ಪರಿಶೀಲಿಸಲು ಕೇಂದ್ರ ಸರ್ಕಾರ ರಚಿಸಿರುವ ಸಮಿತಿಯ ಭಾಗವಾಗಲು ಆಹ್ವಾನವನ್ನು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ನಿರಾಕರಿಸಿದ್ದಾರೆ.
ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಮಿತಿಯಿಂದ ಹೊರಗಿಟ್ಟಿರುವ ಬಗ್ಗೆಯೂ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಖರ್ಗೆ ಬದಲಿಗೆ ಪ್ರತಿಪಕ್ಷದ ಮಾಜಿ ನಾಯಕ ಗುಲಾಂ ನಬಿ ಆಜಾದ್ ಅವರನ್ನು ಸರ್ಕಾರ ಸಮಿತಿಗೆ ಸೇರಿಸಲಾಗಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಈ ಕುರಿತು ಪತ್ರ ಬರೆದಿರುವ ಅಧೀರ್ ರಂಜನ್ ಚೌಧರಿ, ಸಮಿತಿಗೆ ರಾಜ್ಯಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ಕೈಬಿಟ್ಟಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.

“ಒಂದು ರಾಷ್ಟ್ರ, ಒಂದು ಚುನಾವಣೆ ಸಮಿತಿಯಲ್ಲಿ ಸೇವೆ ಸಲ್ಲಿಸಲು ನನಗೆ ಯಾವುದೇ ಹಿಂಜರಿಕೆಯಿಲ್ಲ. ಆದರೆ ಬೇಕಾದವರನ್ನು ಸಮಿತಿಗೆ ಸೇರಿಸಿರುವುದು ಕಣ್ಣೊರೆಸುವ ತಂತ್ರವಾಗಿದೆ. ಸಾರ್ವತ್ರಿಕ ಚುನಾವಣೆಗೆ ಕೆಲವು ತಿಂಗಳುಗಳು ಬಾಕಿಯಿರುವ ಮೊದಲು, ಸಾಂವಿಧಾನಿಕವಾಗಿ ಶಂಕಿತ, ಪ್ರಾಯೋಗಿಕವಾಗಿ ಕಾರ್ಯಸಾಧ್ಯವಲ್ಲದ ಮತ್ತು ಸುವ್ಯವಸ್ಥವಾಗಿ ಕಾರ್ಯಗತಗೊಳಿಸಲಾಗದ ಯೋಜನೆಯನ್ನು ರಾಷ್ಟ್ರದ ಮೇಲೆ ಹೇರುವ ಹಠಾತ್ ಪ್ರಯತ್ನವು ಸರ್ಕಾರದ ಗುಪ್ತ ಉದ್ದೇಶಗಳ ಬಗ್ಗೆ ಗಂಭೀರವಾದ ಗೊಂದಲವನ್ನು ಉಂಟುಮಾಡುತ್ತದೆ. ಅದಲ್ಲದೆ ಸಮಿತಿಗೆ ರಾಜ್ಯಸಭೆ ವಿರೋಧ ಪಕ್ಷದ ನಾಯಕನನ್ನು ಸೇರಿಸದಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿರುವ ಅಪಮಾನವಾಗಿದೆ. ಈ ಕಾರಣಗಳಿಂದ, ನಿಮ್ಮ ಆಹ್ವಾನವನ್ನು ನಿರಾಕರಿಸುವುದನ್ನು ಬಿಟ್ಟು ನನಗೆ ಬೇರೆ ಆಯ್ಕೆಯಿಲ್ಲ” ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಸುದ್ದಿ ಓದಿದ್ದೀರಾ? ಲಖನೌ | ಕೇಂದ್ರ ಸಚಿವ ಕೌಶಲ್ ಕಿಶೋರ್ ಮನೆಯಲ್ಲಿ ಗುಂಡು ಹಾರಿಸಿ ವ್ಯಕ್ತಿಯ ಹತ್ಯೆ
‘ಒಂದು ರಾಷ್ಟ್ರ ಒಂದು ಚುನಾವಣೆ’ ಕಾರ್ಯಸಾಧ್ಯತೆ ಕುರಿತು ಪರಿಶೀಲನೆ ಮಾಡಲು ಸಮಿತಿ ರಚನೆ ಮಾಡಿದ ಕುರಿತು ಈಗಾಗಲೇ ಪರ, ವಿರೋಧ ಚರ್ಚೆಗಳು ಆರಂಭವಾಗಿವೆ. ಬಿಜೆಪಿ ಆಡಳಿತ ಇರುವ ರಾಜ್ಯಗಳ ಮುಖ್ಯಮಂತ್ರಿಗಳು ಈ ತೀರ್ಮಾನವನ್ನು ಸ್ವಾಗತಿಸಿದ್ದಾರೆ. 2024ರ ಲೋಕಸಭೆ ಚುನಾವಣೆಗೆ ಒಂದಾಗಿರುವ ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟದಿಂದ ಈ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿದೆ.