ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕುಸ್ತಿ ಪಟುಗಳು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠ ಬುಧವಾರ ವಿಚಾರಣೆ ನಡೆಸಿದೆ.
ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ಕೆಲ ಕೋಚ್‌ಗಳು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿರುವುದಾಗಿ ಮಹಿಳಾ ಕುಸ್ತಿ ಪಟುಗಳು ದೆಹಲಿ ಪೊಲೀಸರಿಗೆ ದೂರು ನೀಡಿದರೂ, ಪೊಲೀಸ್ ಸಿಬ್ಬಂದಿ ಮಾತ್ರ ಬ್ರಿಜ್ ಭೂಷಣ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿಲ್ಲ ಎನ್ನಲಾಗಿದೆ.
ಈ ಹಿನ್ನೆಲೆ ಅರ್ಜಿ ವಿಚಾರಣೆ ನಡೆಸಿರುವ ಮುಖ್ಯನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರನ್ನೊಳಗೊಂಡ ಪೀಠ, “ಅರ್ಜಿದಾರರು ದೂರು ನೀಡಿದರೂ ಬ್ರಿಜ್ ಭೂಷಣ್ ವಿರುದ್ಧ ಈವರೆಗೆ ಏಕೆ ಪ್ರಕರಣ ದಾಖಲಿಸಿಲ್ಲ” ಎಂದು ದೆಹಲಿ ಪೊಲೀಸರನ್ನು ಪ್ರಶ್ನಿಸಿದ್ದು, ಈ ಬಗ್ಗೆ ಮೂರು ದಿನಗಳ ಒಳಗಾಗಿ ಸ್ಪಷ್ಟನೆ ನೀಡುವಂತೆ ನೋಟಿಸ್ ಜಾರಿ ಮಾಡಿದೆ.
ಈ ಸುದ್ದಿ ಓದಿದ್ದೀರಾ? ಕುಸ್ತಿಪಟುಗಳ ಪ್ರತಿಭಟನೆಯಲ್ಲಿ ಭಾಗಿಯಾದ ಹರಿಯಾಣದ ಮಾಜಿ ಸಿಎಂ ಭೂಪಿಂದರ್ ಸಿಂಗ್ ಹೂಡಾ
ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಭಾರತವನ್ನು ಪ್ರತಿನಿಧಿಸಿರುವ 7 ಮಂದಿ ಮಹಿಳಾ ಕ್ರೀಡಾಪಟುಗಳು ಬ್ರಿಜ್ ಭೂಷಣ್ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ದೂರುದಾರರಲ್ಲಿ 16ನೇ ವಯಸ್ಸಿನ ಅಪ್ರಾಪ್ತ ಕುಸ್ತಿ ಪಟು ಕೂಡ ಇದ್ದಾರೆ. ಈ ಹಿನ್ನೆಲೆ ಬ್ರಿಜ್ ಭೂಷಣ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆಯೂ ಆಗ್ರಹಗಳು ಕೇಳಿಬಂದಿವೆ.
ಭಾರತದ ಜನಪ್ರಿಯ ಕುಸ್ತಿ ಪಟುಗಳಾದ ಬಜರಂಗ್ ಪೂನಿಯಾ, ವಿನೇಶ್ ಫೋಗಟ್ ಮತ್ತು ಸಾಕ್ಷಿ ಮಲಿಕ್ ಸೇರಿದಂತೆ ಹಲವು ಕುಸ್ತಿಪಟುಗಳು ಕಳೆದ ಕೆಲ ದಿನಗಳಿಂದ ಜಂತರ್ ಮಂತರ್‌ನಲ್ಲಿ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ.