ದೆಹಲಿ ವಿಧಾನಸಭಾ ಚುನಾವಣೆಯ ಗೆಲುವಿನಿಂದ ಉತ್ಸಾಹಿಗಾಳಾಗಿರುವ ಎನ್‌ಡಿಎ ನಾಯಕರು ಮುಂದಿನ ಎರಡು ವರ್ಷಗಳಲ್ಲಿ ಎದುರಾಗುವ ಎಲ್ಲ ಚುನಾವಣೆಗಳಲ್ಲಿ ಒಗ್ಗಟ್ಟಿನಿಂದ ಸ್ಪರ್ಧಿಸಲು ನಿರ್ಧರಿಸಿದ್ದಾರೆ.
ಗುರುವಾರ ದೆಹಲಿಯ ಮುಖ್ಯಮಂತ್ರಿ ರೇಖಾ ಗುಪ್ತಾ ಪ್ರಮಾಣವಚನ ಸ್ವೀಕಾರ ಸಮಾರಂಭದ ಬಳಿಕ ಎನ್‌ಡಿಎ ಅಧಿಕಾರದಲ್ಲಿರುವ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಸಭೆ ನಡೆಸಿದ್ದಾರೆ. ಒಗ್ಗಟ್ಟಿನ ಸ್ಪರ್ಧೆಯ ಬಗ್ಗೆ ನಿರ್ಧಾರ ತೆಗೆದುಕೊಂಡಿದ್ದಾರೆ.
ಇದೇ ವರ್ಷದ ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆ NDAಗೆ ಮೊದಲ ಸವಾಲಾಗಿರಲಿದೆ. ಬಿಹಾರದಲ್ಲಿ ಪ್ರಸ್ತುತ ಎನ್‌ಡಿಎ ಸರ್ಕಾರವೇ ಅಧಿಕಾರದಲ್ಲಿದೆ. ಅಲ್ಲಿ, ಮುಖ್ಯಮಂತ್ರಿ ನಿತೀಶ್ ಕುಮಾರ್ ಎನ್‌ಡಿಎಅನ್ನು ಮುನ್ನಡೆಸಲಿದ್ದಾರೆ ಎಂದು ಸಭೆಯಲ್ಲಿ ನಿರ್ಧರಿಸಲಾಗಿದೆ.
ಇನ್ನು ಮುಂದಿನ ಎರಡು ವರ್ಷಗಳಲ್ಲಿ ಪಶ್ಚಿಮ ಬಂಗಾಳ, ಅಸ್ಸಾಂ, ಉತ್ತರ ಪ್ರದೇಶ ಹಾಗೂ ಪಂಜಾಬ್‌ನಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಈ ಎಲ್ಲ ಚುನಾವಣೆಗಳಲ್ಲಿಯೂ ಎನ್‌ಡಿಎ ಒಗ್ಗಟ್ಟಿನಿಂದ ಸ್ಪರ್ಧಿಸಲಿದೆ ಎಂದು ವರದಿಯಾಗಿದೆ.
ಸಭೆಯಲ್ಲಿ ಬಿಹಾರ ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ, ರಾಜಸ್ಥಾನ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮತ್ತು ಉಪಮುಖ್ಯಮಂತ್ರಿ ಪವನ್ ಕಲ್ಯಾಣ್, ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ, ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್, ರಾಜಸ್ಥಾನ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹಾಗೂ ತ್ರಿಪುರ ಮುಖ್ಯಮಂತ್ರಿ ಮಾಣಿಕ್ ಸಹಾ ಇದ್ದರು.
ಅಲ್ಲದೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷೆ ಜೆ ಪಿ ನಡ್ಡಾ ಕೂಡ ಸಭೆಯಲ್ಲಿ ಭಾಗವಹಿಸಿದ್ದರು.