ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಂತಹ ಘಟನೆಗಳು ದೇಶದ ಶಿಕ್ಷಣ ವ್ಯವಸ್ಥೆಯ ಮೇಲಿನ ವಿದ್ಯಾರ್ಥಿಗಳ ನಂಬಿಕೆ ಮತ್ತು ಆತ್ಮವಿಶ್ವಾಸಕ್ಕೆ ಧಕ್ಕೆ ತಂದಿವೆ ಎಂದು ಕಾಂಗ್ರೆಸ್ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.
ಬೆಂಗಳೂರಿನ ಕಾಂಗ್ರೆಸ್ ಪಕ್ಷದ ‘ಭಾರತ್ ಜೋಡೋ’ ಭವನದಲ್ಲಿ ಯುವ ಕಾಂಗ್ರೆಸ್ ಆಯೋಜಿಸಿದ್ದ ವಿದ್ಯಾರ್ಥಿ–ಯುವ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ವಿದ್ಯಾರ್ಥಿಗಳ ಕನಸುಗಳನ್ನು ರಕ್ಷಿಸುವುದು ಹಾಗೂ ಪಾರದರ್ಶಕ ಮತ್ತು ನ್ಯಾಯಸಮ್ಮತ ಪರೀಕ್ಷಾ ವ್ಯವಸ್ಥೆಯನ್ನು ಖಾತ್ರಿಪಡಿಸುವುದು ಎಲ್ಲರ ಜವಾಬ್ದಾರಿಯಾಗಿದೆ. ದೇಶದ ಯುವಜನತೆಯ ಭವಿಷ್ಯಕ್ಕೆ ಧಕ್ಕೆ ತಂದಿರುವ ಕೇಂದ್ರದ ಬಿಜೆಪಿ ಸರ್ಕಾರದ ಅಕ್ರಮಗಳ ವಿರುದ್ಧ ಕಾಂಗ್ರೆಸ್ ಪಕ್ಷ ಸದಾ ದೃಢವಾಗಿ ನಿಲ್ಲಲಿದೆ” ಎಂದು ಅವರು ತಿಳಿಸಿದ್ದಾರೆ.
“ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಶಿಕ್ಷಣ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆ ತರಲು ‘ಛಾತ್ರೋಂ ಕಿ ಗೂಂಜ್’ ಅಭಿಯಾನದ ಮೂಲಕ ವಿದ್ಯಾರ್ಥಿಗಳಲ್ಲಿ ಭರವಸೆ ಮೂಡಿಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ವಿದ್ಯಾರ್ಥಿ-ಯುವಜನತೆ ಆತ್ಮವಿಶ್ವಾಸ ಕಳೆದುಕೊಳ್ಳಬಾರದು” ಎಂದು ಬಿ.ಕೆ. ಹರಿಪ್ರಸಾದ್ ಕರೆ ನೀಡಿದ್ದಾರೆ
ಕಾರ್ಯಕ್ರಮದಲ್ಲಿ ರಾಜ್ಯಸಭಾ ಸದಸ್ಯ ಮನ್ಸೂರ್ ಅಲಿಖಾನ್ ಮತ್ತು ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಉಪಸ್ಥಿತರಿದ್ದರು.




