ಸಚಿವ ಸತೀಶ್ ಜಾರಕಿಹೊಳಿ ಮತ್ತು ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಸತೀಶಣ್ಣ ಅನುಭವಿ ರಾಜಕಾರಣಿ. ಅವರ ನೇತೃತ್ವದಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಪಕ್ಷದ ಎಲ್ಲ ಶಾಸಕರು ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸತೀಶ್ ಜಾರಕಿಹೊಳಿ ನಡುವೆ ಅಸಮಾಧಾನವಿದೆ ಎಂಬ ವಿಚಾರಕ್ಕೆ ಅವರು ಬೆಳಗಾವಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. “ನಮ್ಮಿಬ್ಬರ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ನನಗೆ ಒಳ್ಳೆಯ ಖಾತೆ ನೀಡಿದ್ದಾರೆ. ಸಹೋದರ ಚನ್ನರಾಜ್ ಹಟ್ಟಿಹೊಳಿ ಅವರಿಗೆ ಎಂಎಲ್‌ಸಿ ಟಿಕೆಟ್ ನೀಡುವ ವಿಚಾರ ಸೇರಿದಂತೆ ಎಲ್ಲ ವಿಚಾರಗಳಲ್ಲೂ ನಮ್ಮಿಬ್ಬರ ನಡುವೆ ಭಿನ್ನಾಭಿಪ್ರಾಯ ಬಂದಿಲ್ಲ” ಎಂದು ಅವರು ಸ್ಪಷ್ಟವಾಗಿ ಹೇಳಿದ್ದಾರೆ.
“ಬೆಳಗಾವಿ ರಾಜಕೀಯದಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ಯಾಕೆ ಎಳೆದು ತರಬೇಕು. ಕೆಪಿಸಿಸಿ ಅಧ್ಯಕ್ಷರು ಇಡೀ ರಾಜ್ಯ ಸುತ್ತಾಡಿ 135 ಸ್ಥಾನಗಳನ್ನು ಪಕ್ಷ ಗೆಲ್ಲುವಲ್ಲಿ ಕೊಡುಗೆ ನೀಡಿದ್ದಾರೆ” ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.