“ನನ್ನ ಮೇಲೆ ಯಾರ ಒತ್ತಡವೂ ಇಲ್ಲ. ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಅಕ್ರಮದ ಬಗ್ಗೆ ನಡೆಯುತ್ತಿರುವ ತನಿಖೆಗೆ ಸಹಕಾರ ನೀಡುವ ನಿಟ್ಟಿನಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಸಂಜೆ 7.30ಕ್ಕೆ ಸಿಎಂ ಸಿದ್ದರಾಮಯ್ಯನವರಿಗೆ ರಾಜೀನಾಮೆ ಪತ್ರ ಸಲ್ಲಿಸಲಿದ್ದೇನೆ” ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ತಿಳಿಸಿದ್ದಾರೆ.
ಗುರುವಾರ ಸಂಜೆ 4.30ಕ್ಕೆ ವಿಧಾನಸೌಧದಲ್ಲಿರುವ ತಮ್ಮ ಕೊಠಡಿಯಲ್ಲಿ ಪತ್ರಿಕಾಗೋಷ್ಠಿ ಕರೆದು ಮಾತನಾಡಿದ ಅವರು, “ಈ ಪ್ರಕರಣದಲ್ಲಿ ನನ್ನ ಯಾವುದೇ ಪಾತ್ರವಿಲ್ಲ. ನೀನು ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರಾದರೂ ನಾನು ರಾಜೀನಾಮೆ ನೀಡುತ್ತೇನೆ, ಆರೋಪ ಮುಕ್ತನಾದ ಬಳಿಕ ಮತ್ತೆ ಸಚಿವ ಸಂಪುಟಕ್ಕೆ ಸೇರುವ ಅವಕಾಶ ಇದ್ದರೆ ಸೇರುವೆ” ಎಂದು ನಾಗೇಂದ್ರ ತಿಳಿಸಿದ್ದಾರೆ.
