ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಮಹಿಳೆಯರ ಸುರಕ್ಷತೆಗೆ ಅಪಾಯವನ್ನುಂಟು ಮಾಡುವುದು ಮಾತ್ರವಲ್ಲದೆ, ಮಹಿಳೆಯರ ವಿರುದ್ಧ ಅಗೌರವ ಮತ್ತು ಹಿಂಸೆಯ ಸಂಸ್ಕೃತಿಯನ್ನು ಪ್ರಚೋದಿಸುತ್ತದೆ. ದೇಶದಿಂದ ಪರಾರಿಯಾಗಿರುವ ಆರೋಪಿಯನ್ನು ಶೀಘ್ರವೇ ಬಂಧಿಸಿ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ರಾಷ್ಟ್ರೀಯ ಮಹಿಳಾ ಆಯೋಗ ಒತ್ತಾಯಿಸಿದೆ.
ಹಾಸನ ಕ್ಷೇತ್ರದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯದ ಆರೋಪದ ಕುರಿತು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ವರದಿ ಸಲ್ಲಿಸುವಂತೆ ಕರ್ನಾಟಕ ಪೊಲೀಸರಿಗೆ ಸೂಚಿಸಿದೆ.
“ಪ್ರಜ್ವಲ್ ವಿರುದ್ಧ ಕೇಳಿಬಂದಿರುವ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಮಹಿಳಾ ಆಯೋಗವು ಬಲವಾಗಿ ಖಂಡಿಸುತ್ತದೆ. ಪ್ರಕರಣ ಸಂಬಂಧ ಪೊಲೀಸರು ಕೈಗೊಂಡ ಕ್ರಮಗಳ ಕುರಿತು ವಿವರವಾದ ವರದಿಯನ್ನು ಮೂರು ದಿನಗಳಲ್ಲಿ ಸಲ್ಲಿಸಬೇಕು” ಎಂದು ಆಯೋಗವು ತಿಳಿಸಿದೆ.
ಹಲವು ಮಹಿಳೆಯರ ಮೇಲೆ ಪ್ರಜ್ವಲ್ ನಡೆಸಿದ್ದಾರೆ ಎನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣ ಬಹಿರಂಗಗೊಂಡ ಬೆನ್ನಲ್ಲೇ ಸರಣಿಯೋಪಾದಿಯಲ್ಲಿ ವಿಡಿಯೊ ತುಣುಕುಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.
ರೇವಣ್ಣ ಮತ್ತು ಪ್ರಜ್ವಲ್ ವಿರುದ್ಧ ಹೊಳೆನರಸೀಪುರ ನಗರ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣವೂ ದಾಖಲಾಗಿದೆ. ಈ ಎಲ್ಲ ಬೆಳವಣಿಗೆಗಳ ಕುರಿತು ವರದಿ ಸಲ್ಲಿಸುವಂತೆ ಕರ್ನಾಟಕ ಡಿಜಿಪಿಗೆ ಬರೆದ ಪತ್ರದಲ್ಲಿ ಮಹಿಳಾ ಆಯೋಗ ಉಲ್ಲೇಖಿಸಿದೆ.