ಆಪಾದಿತ ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆದೇಶ ಹೊರಡಿಸಿದ್ದಾರೆ. ಈ ಬೆನ್ನಲ್ಲೇ, ಬಿಜೆಪಿ ನಾಯಕರ ಹುಮ್ಮಸ್ಸು ಗರಿಗೆದರಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸುತ್ತಿದ್ದಾರೆ
ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರಾಸಿಕ್ಯೂಷನ್ ಅನುಮತಿ ಪತ್ರವನ್ನು ಪೋಸ್ಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, “ಸಿದ್ದರಾಮಯ್ಯ ಮುಖ್ಯಮಂತ್ರಿ ಕಚೇರಿಯ ಘನತೆ ಕಾಪಾಡಬೇಕು. ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು” ಎಂದು ಆಗ್ರಹಿಸಿದ್ದಾರೆ.
“ಮುಖ್ಯಮಂತ್ರಿ ವಿರುದ್ಧದ ಮುಡಾ ಹಗರಣದ ದೂರಿನ ಮೇಲೆ ಕಾನೂನು ಕ್ರಮಕ್ಕೆ ಅಧಿಕಾರ ನೀಡಲು ರಾಜ್ಯಪಾಲರು ತಮ್ಮ ಸಾಂವಿಧಾನಿಕ ಅಧಿಕಾರವನ್ನು ಚಲಾಯಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ, ಅಕ್ರಮಗಳ ಬಗ್ಗೆ ಸಾಕಷ್ಟು ಪುರಾವೆಗಳು ಇವೆ. ಗಂಭೀರ ಆರೋಪಗಳು ಕೇಳಿಬಂದಿರುವ ಕಾರಣ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವುದು ನಿರ್ಣಾಯಕವಾಗಿದೆ. ಅವರು ರಾಜೀನಾಮೆ ನೀಡಿ ಪಾರದರ್ಶಕ ಮತ್ತು ನಿಷ್ಪಕ್ಷಪಾತ ತನಿಖೆಗೆ ಅವಕಾಶ ಕಲ್ಪಿಸಿ, ಮುಖ್ಯಮಂತ್ರಿ ಕಚೇರಿಯ ಘನತೆ ಕಾಪಾಡಬೇಕಿದೆ. ಅವರಿಗೆ ನ್ಯಾಯ ಸಿಗುತ್ತದೆ” ಎಂದು ವಿಜಯೇಂದ್ರ ಬರೆದುಕೊಂಡಿದ್ದಾರೆ.
“ಮುಡಾ ಪ್ರಕರಣದ ಬಗ್ಗೆ ವಿಧಾನಸಭಾ ಅಧಿವೇಶನದಲ್ಲಿ ಸಿದ್ದರಾಮಯ್ಯ ಸ್ಪಷ್ಟನೆ ಕೊಡಬಹುದಿತ್ತು. ಆದರೆ, ಅವರು ಹಾಗೆ ಮಾಡಲಲ್ಲ, ಕಲಾಪದಿಂದ ಓಡಿ ಹೋದರು. ಈಗ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದಾರೆ. ಮುಡಾ ಹಗರಣದ ವಿರುದ್ಧ ನಮ್ಮ ಹೋರಾಟ ಯಶಸ್ವಿಯಾಗಿದೆ” ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.