ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ವಿಚಾರವಾಗಿ ವಿಪಕ್ಷ ಮತ್ತು ಆಡಳಿತ ಪಕ್ಷದ ನಡುವೆ ಸದಾ ಜಟಾಪಟಿ ನಡೆಯುತ್ತಲೇ ಇದೆ. ಈ ನಡುವೆ ಕಾಂಗ್ರೆಸ್ ಹೈಕಮಾಂಡ್ ಮುಂದೆ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಬಂದ್ ಮತ್ತು ಪರಿಷ್ಕರಣೆಗೆ ಸಚಿವರು ಡಿಮ್ಯಾಂಡ್ ಇಟ್ಟಿದ್ದಾರೆ ಎನ್ನುವ ಸುದ್ದಿ ವಾಹಿನಿಗಳ ಊಹಾಪೋಹ ಸುದ್ದಿ ರಾಜ್ಯದಲ್ಲಿ ಸದ್ದು ಮಾಡುತ್ತಿದೆ.
ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತ ಪಡೆಯಲು ಐದು ಉಚಿತ ಗ್ಯಾರಂಟಿಗಳೂ ನೆರವಾಗಿದ್ದವು. ಗ್ಯಾರಂಟಿ ಯೋಜನೆಗಳು ಸರ್ಕಾರಕ್ಕೆ ಹೊರೆ ಆಗುತ್ತಿವೆ ಎಂದು ಪ್ರತಿಪಕ್ಷಗಳು ಆಗಾಗ ಆರೋಪಿಸುತ್ತಲೇ ಇವೆ. ಗ್ಯಾರಂಟಿಗಳ ಬಗ್ಗೆ ಕೇಳಿಬಂದ ಈವರೆಗಿನ ಎಲ್ಲ ಆರೋಪಗಳನ್ನು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಅಲ್ಲಗಳೆಯುತ್ತಲೇ ಬಂದಿದ್ದಾರೆ.
ಇತ್ತೀಚೆಗೆ ನಡೆದ ಮೈಸೂರು ಜನಾಂದೋಲನ ಸಭೆಯಲ್ಲಿ ಕೂಡ ಸರ್ಕಾರ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಸಿಎಂ, ಡಿಸಿಎಂ ಮತ್ತೆ ಬಹಿರಂಗವಾಗಿ ಸ್ಪಷ್ಟಪಡಿಸಿದ್ದರು. ಈಗ ಮತ್ತೆ ಗ್ಯಾರಂಟಿಗಳ ಬಗ್ಗೆ ಊಹಾಪೋಹದ ಮಾತುಗಳು ಕೇಳಿಬರುತ್ತಿವೆ. ಎಲ್ಲ ಊಹಾಪೋಹಗಳ ಬಗ್ಗೆ ಸರಣಿಯಾಗಿ ಪ್ರತಿಕ್ರಿಯಿಸಿರುವ ಸಚಿವರು ಗ್ಯಾರಂಟಿ ಯೋಜನೆಗಳ ಪ್ರಕ್ರಿಯೆಯಲ್ಲಿ ಯಾವುದೇ ಪರಿಷ್ಕರಣೆ ಇಲ್ಲ ಎಂದು ತಿಳಿಸಿದ್ದಾರೆ.
ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ: ಪರಮೇಶ್ವರ್
“ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಕುರಿತು ಸರ್ಕಾರದ ಹಂತದಲ್ಲಿ ಚರ್ಚೆಯಾಗಿಲ್ಲ. ಸಚಿವರು, ಮುಖಂಡರು ದೆಹಲಿಗೆ ಹೋದಾಗ ಎಐಸಿಸಿ ಕಚೇರಿಗೆ ಭೇಟಿ ನೀಡುವುದು ಸಂಪ್ರದಾಯ. ಇದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ತಿಳಿಸಿದ್ದಾರೆ.
“ಗ್ಯಾರಂಟಿ ಯೋಜನೆಗಳು ಬಡವರಿಗೆ ಮಾತ್ರ ತಲುಪಬೇಕು ಎಂಬುದು ಬಹಳ ಜನರ ಅಭಿಪ್ರಾಯವಾಗಿದೆ. ಈಗಾಗಲೇ ಬಜೆಟ್‌ನಲ್ಲಿ ಗ್ಯಾರಂಟಿ ಯೋಜನೆಗಳಿಗೆ ರೂ. 56 ಸಾವಿರ ಕೋಟಿ ಮೀಸಲಿಡಲಾಗಿದೆ. ಹೀಗಾಗಿ ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಣೆ ಮಾಡುವುದು ಸಾಧ್ಯವಿಲ್ಲ” ಎಂದರು.
ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತೆ: ಖಂಡ್ರೆ
ರಾಜ್ಯ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದ್ದು, ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಐದೂ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದಿದೆ. ಇದರ ಪರಿಣಾಮವಾಗಿ 1 ಕೋಟಿಗೂ ಹೆಚ್ಚು ಜನರು ಬಡತನ ರೇಖೆಯಿಂದ ಹೊರಬಂದಿದ್ದಾರೆ. ಹೀಗಾಗಿ ಗ್ಯಾರಂಟಿ ಯೋಜನೆ ಯಾವುದೇ ಬದಲಾವಣೆ ಇಲ್ಲ, ಪ್ರಸಕ್ತ ಸ್ವರೂಪದಲ್ಲಿ ಮುಂದುವರಿಯುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.
ವಿಕಾಸಸೌಧದಲ್ಲಿಂದು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಗ್ಯಾರಂಟಿ ಯೋಜನೆಗಳಿಂದಾಗಿ ಹಣದ ಹರಿವು ನಿರಂತರವಾಗಿದ್ದು, ಜನರ ಕೊಳ್ಳುವ ಶಕ್ತಿ ಹೆಚ್ಚಾಗಿದೆ. ಇದು ರಾಜ್ಯದ ಪ್ರಗತಿಗೂ ಪರೋಕ್ಷವಾಗಿ ಪ್ರಯೋಜವಾಗುತ್ತಿದೆ. ಕಾಂಗ್ರೆಸ್ ಪಕ್ಷ ಮೊದಲಿನಿಂದಲೂ ಬಡವರು, ದುರ್ಬಲರು, ವಂಚಿತರು, ಶೋಷಿತರ ಪರವಾಗಿ ನಿಂತಿದೆ. ಅವರ ಸರ್ವಾಂಗೀಣ ಅಭಿವೃದ್ಧಿಗಾಗಿ, ಕಲ್ಯಾಣಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದೆ” ಎಂದರು.
ಗ್ಯಾರಂಟಿಗಳನ್ನು ನಾವು ನಿಲ್ಲಿಸುವುದಿಲ್ಲ: ಮುನಿಯಪ್ಪ
“ಯಾವುದೇ ಗ್ಯಾರಂಟಿಗಳನ್ನು ನಾವು ನಿಲ್ಲಿಸುವುದಿಲ್ಲ. ಗ್ಯಾರಂಟಿಗಳಿಗಾಗಿ ಹಣವನ್ನು ಮೀಸಲಿಟ್ಟಿದ್ದು, ನಾವು ಇವುಗಳನ್ನು ಬಡಜನರಿಗೆ ನೀಡುತ್ತೇವೆ. ಈ ಗ್ಯಾರಂಟಿ ಯೋಜನೆಗಳ ಮುಂದುವರೆಸುವುದರ ಜೊತೆಗೆ ಅಭಿವೃದ್ಧಿ ಕಾರ್ಯಕ್ರಮಗಳನ್ನು ನಾವು ಮಾಡುತ್ತೇವೆ ಎಂದು ಆಹಾರ ಖಾತೆ ಸಚಿವ ಕೆ ಎಚ್ ಮುನಿಯಪ್ಪ ದೆಹಲಿಯಲ್ಲಿ ತಿಳಿಸಿದ್ದಾರೆ.
“ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಣೆ ಮಾಡುತ್ತಿದ್ದು, ಅಂದರೆ ಅರ್ಹ ಇರುವ ಪಡಿತರದಾರರಿಗೆ ಮತ್ತು ಗೃಹ ಜೋತಿ ಬಳಸುವ ಅರ್ಹರಿಗೆ ಮಾತ್ರ ಸೌಲಭ್ಯಗಳನ್ನು ಕಲ್ಪಸಲು ನಾವು ಪರಿಷ್ಕರಣೆ ಮಾಡುತ್ತಿದ್ದೇವೆ. ಇದು ಆರಂಭಿಕ ಚರ್ಚೆ ಅಷ್ಟೇ. ಈ ಬಗ್ಗೆ ಯಾವುದೇ ನಿರ್ಧಾರ ಆಗಿಲ್ಲ” ಎಂದು ಹೇಳಿದರು.
ಹೈಕಮಾಂಡ್ ಮುಂದೆ ತಾವಿಟ್ಟ ವಾದದ ಬಗ್ಗೆ ಸ್ಪಷ್ಟನೆ ಕೊಟ್ಟಿರುವ ಸಚಿವ ಸತೀಶ್ ಜಾರಕಿಹೊಳಿ, “ಗ್ಯಾರಂಟಿ ಬಂದ್ ಮಾಡಬೇಕೆಂದು ನಾನು ಹೇಳಿಲ್ಲ. ಗ್ಯಾರಂಟಿಗಳನ್ನು ಪರಿಷ್ಕರಣೆ ಮಾಡುವುದಕ್ಕೆ ಸಲಹೆ ನೀಡಿದ್ದೇನೆ. ಅದು ಜನರ ಅಭಿಪ್ರಾಯವನ್ನು ಆದರಿಸಿ ಹೈಕಮಾಂಡ್ಗೆ ತಿಳಿಸಿದ್ದೇನೆ” ಎಂದಿದ್ದಾರೆ.