ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪಗೆ ನ್ಯಾಯಾಲಯ ಸಮನ್ಸ್ ನೀಡಿದೆ. ಜುಲೈ 15ರಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗಬೇಕೆಂದು ಸೂಚನೆ ನೀಡಿದೆ.
ಯಡಿಯೂರಪ್ಪ ಸೇರಿ ನಾಲ್ವರು ಆರೋಪಿಗಳ ವಿರುದ್ಧದ ಜಾರ್ಜ್‌ಶೀಟ್ ಗಮನಿಸಿರುವ ಬೆಂಗಳೂರಿನ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎನ್.ಎಂ ರಮೇಶ್ ಸಮನ್ಸ್ ಜಾರಿಗೊಳಿಸಿದ್ದಾರೆ.
ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) 750 ಪುಟಗಳಲ್ಲಿ ಸಲ್ಲಿಸಿರುವ ದೋಷಾರೋಪ ಪಟ್ಟಿಯನ್ನು ಕಳೆದ ವಾರ ನ್ಯಾಯಾಲಯಕ್ಕೆ ಸಲ್ಲಿಸಿದಿತ್ತು. ಚಾರ್ಜ್‌ಶೀಟ್‌ಅನ್ನು ನ್ಯಾಯಾಲಯ ಅವಲೋಕಿಸಿದೆ. ಬಳಿಕ, ಯಡಿಯೂರಪ್ಪ ಮತ್ತು ಅವರ ಸಹಚರರಾದ ವೈ.ಎಂ ಅರುಣ್ ಎಂ ರುದ್ರೇಶ ಹಾಗೂ ವೈ ಮರಿಸ್ವಾಮಿ – ನಾಲ್ವರಿಗೂ ಸಮನ್ಸ್ ನೀಡಿದೆ.
ಬಿಎಸ್ ಯಡಿಯೂರಪ್ಪ ಅವರ ಬಳಿ ಸಹಾಯ ಕೇಳಲು ಹೋಗಿದ್ದಾಗ, ತಮ್ಮ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತೆಯ ತಾಯಿ ಆರೋಪಿಸಿದ್ದರು. ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಬಳಿಕ, ಪ್ರಕರಣವನ್ನು ಎಸ್‌ಐಟಿ ತನಿಖೆಗೆ ನೀಡಲಾಗಿತ್ತು. ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆ-2012ರ ಕಲಂ 8ರ ಅಡಿಯಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಐಪಿಸಿ ಸೆಕ್ಷನ್ 354 (ಎ)ರ ಅಡಿಯಲ್ಲಿ ಲೈಂಗಿಕ ಕಿರುಕುಳದ ಆರೋಪ ಹೊರಿಸಲಾಗಿದೆ. ಸಾಕ್ಷ್ಯ ನಾಶಕ್ಕೆ ಯತ್ನಿಸಿದ ಆರೋಪದ ಮೇಲೆ ಅವರ ಮೂವರು ಸಹಚರರ ವಿರುದ್ಧ ಐಪಿಸಿ ಸೆಕ್ಷನ್ 204 ಮತ್ತು 214ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ, ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಪಡೆದಿರುವ ಯಡಿಯೂರಪ್ಪ ಬಂಧನದಿಂದ ಪಾರಾಗಿದ್ದಾರೆ.