ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳಿದ್ದ ಪೆನ್‌ಡ್ರೈವ್ ಅನ್ನು ಹಂಚಿಕೆ ಮಾಡಿದ ಆರೋಪ ಎದುರಿಸುತ್ತಿರುವ ಬಿಜೆಪಿಯ ಮಾಜಿ ಶಾಸಕ ಪ್ರೀತಂ ಗೌಡ ಅವರನ್ನು ಬಂಧಿಸದಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.
ತನ್ನ ವಿರುದ್ಧ ದಾಖಲಿಸಲಾಗಿರುವ ಎಫ್‌ಐಆರ್ ಅನ್ನು ರದ್ದು ಮಾಡುವಂತೆ ಕೋರಿ ಪ್ರೀತಂ ಗೌಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಏಕಸದಸ್ಯ ಪೀಠವು, ಮಾಜಿ ಶಾಸಕರನ್ನು ಬಂಧಿಸದಂತೆ ಎಸ್‌ಐಟಿಗೆ ಆದೇಶಿಸಿದೆ.
ಹಾಸನ ಪೆನ್‌ಡ್ರೈವ್ ಹಂಚಿಕೆ ಪ್ರಕರಣ: ಬಿಜೆಪಿ ಮಾಜಿ ಶಾಸಕ ಪ್ರೀತಮ್ ಗೌಡ ಬಂಧಿಸದಂತೆ ಎಸ್‌ಐಟಿಗೆ ಆದೇಶಿಸಿದ ಕರ್ನಾಟಕ ಹೈಕೋರ್ಟ್.@preethamgowda_j #KarnatakaHighCourt #prajwalvideos pic.twitter.com/HfwZA04E4r
— ಬಾರ್ & ಬೆಂಚ್ – Kannada Bar & Bench (@Kbarandbench) June 28, 2024
“ಪ್ರಕರಣಕ್ಕೆ ಸಂಬಂಧಿಸಿ ಅರ್ಜಿದಾರ ಪ್ರೀತಂ ಗೌಡ ಅವರನ್ನು ಬೆಳಗ್ಗೆ 7ರಿಂದ ಸಂಜೆ 9ರವರೆಗೆ ವಿಚಾರಣೆಗೆ ಒಳಪಡಿಸಬಹುದು. ಯಾವುದೇ ದಾಖಲೆ ಬೇಕಾದರೂ ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆಯಬಹುದು. ಆದರೆ, ಅವರನ್ನು ಬಂಧಿಸುವಂತಿಲ್ಲ” ಎಂದ ಪೀಠ ಆದೇಶ ಹೊರಡಿಸಿದೆ.
ಇದಕ್ಕೆ ಆಕ್ಷೇಪಿಸಿದ ವಿಶೇಷ ಸರ್ಕಾರಿ ಅಭಿಯೋಜಕರಾದ ಪ್ರೊ. ರವಿವರ್ಮ ಕುಮಾರ್, “ಎಲ್ಲ ಪ್ರಕರಣಗಳ ವಿಚಾರಣೆಯಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸಿದರೆ ಹೇಗೆ?” ಎಂದು ಪ್ರಶ್ನಿಸಿದರು.
ಇದಕ್ಕೆ ಉತ್ತರಿಸಿದ ನ್ಯಾಯಪೀಠವು, “ಎಸ್‌ಐಟಿ ವೇದನೆಯನ್ನು ದಾಖಲೆಯಲ್ಲಿ ಸೇರ್ಪಡೆ ಮಾಡಲಾಗಿದೆ” ಎಂದು ಉತ್ತರಿಸಿದ ಪೀಠವು, “ಪೊಲೀಸ್ ರಾಜ್ ಮಾಡಲು ಅವಕಾಶ ನೀಡಲಾಗದು” ಎಂದು ಸ್ಪಷ್ಟಪಡಿಸಿತು.
ನಾಲ್ಕನೇ ಪ್ರಕರಣ ದಾಖಲಿಸಿಕೊಂಡಿದ್ದ ಎಸ್‌ಐಟಿ
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ವಿರುದ್ಧ ನಾಲ್ಕನೇ ಪ್ರಕರಣ ದಾಖಲಾಗಿದ್ದು, ಈ ಪ್ರಕರಣದಲ್ಲಿ ಸಂತ್ರಸ್ತೆಯ ವಿಡಿಯೋ ಹಂಚಿಕೆ ಆರೋಪದಲ್ಲಿ ಹಾಸನ ಮಾಜಿ ಬಿಜೆಪಿ ಶಾಸಕ ಪ್ರೀತಂ ಗೌಡ, ಸೇರಿದಂತೆ ಇತರ ಮೂವರ ವಿರುದ್ಧವೂ ಪ್ರಕರಣ ದಾಖಲಿಸಿಕೊಂಡಿತ್ತು.
ಹಾಸನದ ಮಾಜಿ ಶಾಸಕ ಪ್ರೀತಂ ಗೌಡ ವಿರುದ್ಧ ಪೆನ್‌ಡ್ರೈವ್ ಹಂಚಿಕೆ ಆರೋಪ ಕೇಳಿ ಬಂದಿತ್ತು. ಇದಕ್ಕೆ ಪೂರಕ ಎಂಬಂತೆ ಅವರ ಇಬ್ಬರ ಆಪ್ತರನ್ನು ಎಸ್‌ಐಟಿ ಬಂಧಿಸಿತ್ತು. ಸಂತ್ರಸ್ತೆಯೋರ್ವರು ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಪ್ರೀತಂ ಗೌಡ ಹಾಗೂ ಇತರ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಹೀಗಾಗಿ, ಎಸ್‌ಐಟಿ ಅಧಿಕಾರಿಗಳು ತನ್ನನ್ನು ಬಂಧಿಸದಂತೆ ಪ್ರೀತಂ ಗೌಡ ಹೈಕೋರ್ಟ್ ಮೊರೆ ಹೋಗಿದ್ದರು.
