ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ದಿನ ಜೈಲಿನಲ್ಲಿದ್ದು, ಇತ್ತೀಚೆಗೆ ಬಿಡುಗಡೆಯಾಗಿದ್ದ ಎಚ್.ಡಿ ರೇವಣ್ಣ ಅವರಿಗೆ ಮತ್ತೊಂದು ಪ್ರಕರಣದಲ್ಲಿ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ರೇವಣ್ಣ ಅವರಿಗೆ ಒಂದು ದಿನದ ಮಧ್ಯಂತರ ಜಾಮೀನು ನೀಡಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.
ಹಾಸನದ ಹೊಳೆನರಸೀಪುರದಲ್ಲಿ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ರೇವಣ್ಣ ಅವರು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಮೇ 17ರ ಮಧ್ಯಾಹ್ನದವರೆಗೂ ಮಾತ್ರ ಎಚ್.ಡಿ.ರೇವಣ್ಣ ಅವರಿಗೆ ಜಾಮೀನು ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.
ವಿಚಾರಣೆ ವೇಳೆ, ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು, ಇಬ್ಬರ ಶ್ಯೂರಿಟಿ, ₹5 ಲಕ್ಷ ಬಾಂಡ್ ಒದಗಿಸುವಂತೆ ಷರತ್ತು ವಿಧಿಸಿದೆ. ಮತ್ತೆ ಈ ಜಾಮೀನು ಅರ್ಜಿ ವಿಚಾರಣೆಯನ್ನು ಮೇ 17ರಂದು ಮಧ್ಯಾಹ್ನ 3 ಗಂಟೆಗೆ ಮುಂದೂಡಿದೆ.
ಈ ಪ್ರಕರಣದಲ್ಲಿ ಜಾಮೀನು ನೀಡಬೇಕೆಂದು ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಪರ ವಕೀಲ ಅರುಣ್ ಮನವಿ ಮಾಡಿದ್ದರು.
ಈ ಸುದ್ದಿ ಓದಿದ್ದೀರಾ? ಸಿಇಟಿ ಪರೀಕ್ಷೆ ಎಡವಟ್ಟು | ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ತಲೆದಂಡ
ಲೈಂಗಿಕ ದೌರ್ಜನ್ಯ ಕೇಸ್‌ನಲ್ಲೂ ಮೊದಲನೇ ಆರೋಪಿ ಆಗಿರುವ ರೇವಣ್ಣ, ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್‌ಗೆ ಹಾಜರಾಗಿದ್ದರು. ನ್ಯಾಯಾಧೀಶರ ಮುಂದೆಯೇ ಹಾಜರಾಗಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.
ಇನ್ನು ಮೈಸೂರಿನ ಕೆ.ಆರ್ ನಗರದ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಂತ್ರಸ್ತೆಯ ಅಪಹರಣ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಕೆಲ ದಿನಗಳ ಹಿಂದೆ ಜೈಲಿನಿಂದ ಬಿಡುಗಡೆಯಾಗಿರುವ ರೇವಣ್ಣ ಅವರಿಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ರೇವಣ್ಣ ಅವರ ಜಾಮೀನು ರದ್ದು ಕೋರಿ ಎಸ್‌ಐಟಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ.