ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎನ್ನಲಾದ ಲೈಂಗಿಕ ಹಗರಣದಲ್ಲಿ ಪ್ರಮುಖ ನಾಯಕರ ಹೆಸರು ಇರುವುದರಿಂದ ವಿಶೇಷ ತನಿಖಾ ತಂಡವು (ಎಸ್‌ಐಟಿ) ಪಾರದರ್ಶಕವಾಗಿ ತನಿಖೆ ಮಾಡಲು ಸಾಧ್ಯವಿಲ್ಲ. ಹೀಗಾಗಿ, ತನಿಖೆಯನ್ನು ತಡ ಮಾಡದೆ ಸಿಬಿಐಗೆ ವಹಿಸಬೇಕು” ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕರ್ನಾಟಕ ಸರ್ಕಾರ ಪ್ರಕರಣವನ್ನು ಸಿಬಿಐಗೆ ವಹಿಸಬೇಕು” ಎಂದು ಆಗ್ರಹಿಸಿದ್ದಾರೆ.
“ಹಗರಣದ ಸಂತ್ರಸ್ತರಿಗೆ ನ್ಯಾಯ ಸಿಗಬೇಕು. ಹಗರಣದಲ್ಲಿ ಪ್ರಮುಖ ನಾಯಕರ ಹೆಸರು ಹೇಳಲಾಗುತ್ತಿದೆ. ಈ ಪ್ರಕರಣದಲ್ಲಿ ಎಸ್‌ಐಟಿ ನ್ಯಾಯ ನೀಡಲು ಸಾಧ್ಯವಿಲ್ಲ. ರಾಜ್ಯ ಸರ್ಕಾರ ಈ ತನಿಖೆಯನ್ನು ಸಿಬಿಐಗೆ ವಹಿಸಬೇಕು” ಎಂದಿದ್ದಾರೆ.
“ಹಗರಣದ ಬಗ್ಗೆ ಬಿಜೆಪಿಯ ನಿಲುವು ಸ್ಪಷ್ಟವಾಗಿದೆ. ದಿನದಿಂದ ದಿನಕ್ಕೆ ಹೊಸ ಹೊಸ ಅಂಶಗಳು ಹೊರಬರುತ್ತಿವೆ. ವಿಡಿಯೋಗಳು ಹೊರಬರುವಲ್ಲಿ ರಾಜ್ಯ ಸರ್ಕಾರದ ಪ್ರಮುಖ ನಾಯಕರ ಪಾತ್ರದ ಬಗ್ಗೆ ಕೇಳಿಬರುತ್ತಿದೆ. ಈ ಹಗರಣದಲ್ಲಿ ನಾನು ಯಾರನ್ನೂ ಬೆಂಬಲಿಸುವುದಿಲ್ಲ. ರಾಜಕೀಯ ಉದ್ದೇಶಕ್ಕಾಗಿ ಹಗರಣವನ್ನು ಬಳಸುವುದನ್ನು ನಿಲ್ಲಿಸಬೇಕು. ಸಂತ್ರಸ್ತರಿಗೆ ನ್ಯಾಯ ಸಿಗಬೇಕು. ಪ್ರಕರಣವು ತಾರ್ಕಿಕ ಅಂತ್ಯ ಕಾಣಬೇಕೆಂದರೆ, ಸಿಬಿಐ ತನಿಖೆಗೆ ನೀಡಬೇಕು” ಎಂದು ವಿಜಯೇಂದ್ರ ಹೇಳಿದ್ದಾರೆ.