- ರಾಜ್ಯದ ಎಂಟು ಜಿಲ್ಲೆಗಳಲ್ಲಿನ ನೀರಿನ ಸಮಸ್ಯೆ ಕುರಿತು ಸಭೆ ನಡೆಸಿದ ಸಿಎಂ
- ವಿಡಿಯೋ ಕಾನ್ಫರೆನ್ಸ್ ಮೂಲಕ ಡಿಸಿಗಳ ಜೊತೆ ಸಿದ್ದರಾಮಯ್ಯ ಸಭೆ
ಕುಡಿಯುವ ನೀರಿನ ಸಮಸ್ಯೆ ಕುರಿತು ಎಚ್ಚರಿಕೆಯಿಂದ ಕೆಲಸ ಮಾಡಬೇಕು. ನೀರಿನ ಸಮಸ್ಯೆ ಉದ್ಭವಿಸಿದ 24 ಗಂಟೆಯೊಳಗೆ ನೀರು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಗೆ ಸೂಚನೆ ನೀಡಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳಿಗೆ ತಾಕೀತು ಮಾಡಿದ ಸಿಎಂ, ಸಮಸ್ಯೆ ಕಂಡ ತಕ್ಷಣವೇ ಅದಕ್ಕೆ ಸ್ಪಂದಿಸುವಂತೆ ತಿಳಿಸಿದರು. ಸಿಎಂ ಸಭೆಯ ಪ್ರಮುಖ ನಿರ್ಧಾರಗಳು ಈ ಕೆಳಗಿನಂತಿವೆ:
- ಯಾವುದೇ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವ ಆಗಿದ್ದರೆ, ಕೂಡಲೇ ಬಗೆಹರಿಸಲು ಕ್ರಮ ಕೈಗೊಳ್ಳಬೇಕು. ಆಡಳಿತಾತ್ಮಕ ವಿಚಾರಗಳಿಗೆ ವಿಳಂಬ ಧೋರಣೆ ಸರಿಯಲ್ಲ. ಈ ಕುರಿತು ಅಧಿಕಾರ ಪ್ರತ್ಯಾಯೋಜನೆ ಮಾಡುವ ಕುರಿತೂ ಚಿಂತನೆ ನಡೆಸಲು ಸೂಚನೆ ನೀಡಲಾಯಿತು.
- ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳೂ ಸಹ ಈ ಕುರಿತು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಯಿತು.
- ಜಲಜೀವನ್ ಮಿಷನ್ ಮೂಲಕ ನೀರು ಒದಗಿಸಿದ ಗ್ರಾಮಗಳಲ್ಲಿ ಇಓ, ಎಂಜಿನಿಯರುಗಳು ತಪಾಸಣೆ ನಡೆಸಿ, ಪೈಪ್ ಲೈನ್ ಗಳನ್ನು ಪರಿಶೀಲಿಸಿ, ಸಮಸ್ಯೆಗಳಿದ್ದಲ್ಲಿ ಸರಿಪಡಿಸಬೇಕು. ಕಲುಷಿತ ನೀರು ಸೇವನೆ ಪ್ರಕರಣಗಳು ಮರುಕಳಿಸಬಾರದು ಎಂದು ಎಚ್ಚರಿಕೆ ನೀಡಲಾಯಿತು.
- ಎಲ್ಲ ಜನರಿಗೂ ಶುದ್ಧ ಕುಡಿಯುವ ನೀರು ಒದಗಿಸುವುದು ನಿಮ್ಮ ಜವಾಬ್ದಾರಿ. ಅನುದಾನದ ಅಗತ್ಯವಿದ್ದರೆ ಒದಗಿಸಲಾಗುವುದು. ನೆಪ ಹೇಳಿ, ಜವಾಬ್ದಾರಿಯನ್ನು ಇನ್ನೊಬ್ಬರಿಗೆ ವಹಿಸಬೇಡಿ ಎಂದು ತಾಕೀತು.
- ಕುಡಿಯುವ ನೀರಿನ ಸಮಸ್ಯೆ ಅತ್ಯಂತ ಸೂಕ್ಷ್ಮ ವಿಷಯ. ಮಳೆ ಬಂದು ಕುಡಿಯುವ ನೀರಿನ ಸಮಸ್ಯೆ ಬಗೆಹರಿದರೆ ಒಳ್ಳೆಯದು. ಇಲ್ಲವಾದರೆ, ಅಧಿಕಾರಿಗಳು ದಿನದ 24 ಗಂಟೆಯೂ ಜಾಗೃತರಾಗಿದ್ದು, ನೀರಿನ ಸಮಸ್ಯೆ ಬಗೆಹರಿಸಬೇಕು. ಇದಕ್ಕಾಗಿ ನಿಮಗೆ ಒದಗಿಸಿದ ಸವಲತ್ತುಗಳನ್ನು ಬಳಸಿಕೊಂಡು ಕ್ರಮ ಕೈಗೊಳ್ಳಿ.
- ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಸಂಪರ್ಕದಲ್ಲಿದ್ದು, ನೀರಿನ ಸಮಸ್ಯೆ ಕುರಿತು ಸರಿಯಾದ ಮಾಹಿತಿ ಒದಗಿಸಬೇಕು.
- ಜಾನುವಾರುಗಳಿಗೂ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಎಚ್ಚರ ವಹಿಸಬೇಕು. ಮುನ್ನೆಚ್ಚರಿಕಾ ಕ್ರಮಗಳಿಗೆ ಆದ್ಯತೆ. ಸಮಸ್ಯೆ ಬಗೆಹರಿಸಲು ಎಲ್ಲ ಬೆಂಬಲ ನೀಡಲಾಗುವುದು. ತಪ್ಪು ಮಾಡಿದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು.
ಈ ಸುದ್ದಿ ಓದಿದ್ದೀರಾ?: ಸಣ್ಣ ನೀರಾವರಿ ಇಲಾಖೆಯಲ್ಲಿ ಅಕ್ರಮದ ಆರೋಪ; ವರದಿ ಕೇಳಿದ ಸಚಿವ ಬೋಸರಾಜು
ಜಲ ಜೀವನ್ ಮಿಷನ್ ಯೋಜನೆ ಪರಾಮರ್ಶೆ
ರಾಜ್ಯದಲ್ಲಿ ಜಲಜೀವನ್ ಮಿಷನ್ ಯೋಜನೆಯ ಅನುಷ್ಠಾನ ಕುರಿತಂತೆ ಪರಿಶೀಲನೆ ನಡೆಸಲಾಯಿತು. ಈ ಯೋಜನೆಯಡಿ ಸುಸ್ಥಿರ ನೀರಿನ ಮೂಲ ಇರುವ ಯೋಜನೆಗಳನ್ನು ಗುರುತಿಸಿ, ಅವುಗಳನ್ನು ಆದ್ಯತೆಯ ಮೇರೆಗೆ ಅನುಷ್ಠಾನಗೊಳಿಸಲು ನಿರ್ಧರಿಸಲಾಯಿತು. ಈ ಯೋಜನೆ ಕಾಮಗಾರಿ ಹಾಗೂ ರಾಜ್ಯದಲ್ಲಿ ಅಳವಡಿಸಿರುವ ಆರ್. ಓ. ಪ್ಲಾಂಟ್‌ಗಳ ಕುರಿತು ಕುರಿತು ಥರ್ಡ್ ಪಾರ್ಟಿ ಆಡಿಟ್ ನಡೆಸಲು ತೀರ್ಮಾನಿಸಲಾಯಿತು.