ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ದೊಡ್ಡ ಹಗರಣಗಳ ಪೈಕಿ ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮವೆಸಗಿ ಬಂಧಿತರಾಗಿದ್ದ 52 ಅಭ್ಯರ್ಥಿಗಳನ್ನು ಶಾಶ್ವತವಾಗಿ ಪೊಲೀಸ್ ಇಲಾಖೆಯ ನೇಮಕಾತಿಯಲ್ಲಿ ಭಾಗವಹಿಸದಂತೆ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.
ಈ ಕುರಿತು ರಾಜ್ಯ ಪೊಲೀಸ್ ಇಲಾಖೆಯ ನೇಮಕಾತಿ ವಿಭಾಗದ ಡಿಜಿಪಿ ಈ ಆದೇಶವನ್ನು ಬುಧವಾರ ಹೊರಡಿಸಿದ್ದಾರೆ. 2021ರಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸಿವಿಲ್ (545) ಪುರುಷ ಮತ್ತು ಮಹಿಳಾ ಹಾಗೂ ಸೇವಾನಿರತ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯದ 7 ಕೇಂದ್ರಗಳಾದ ಬೆಂಗಳೂರು, ಮಂಗಳೂರು, ಹುಬ್ಬಳ್ಳಿ- ಧಾರವಾಡ, ಕಲಬುರಗಿ, ತುಮಕೂರು ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು.
ಈ ವೇಳೆ ಲಿಖಿತ ಪರೀಕ್ಷೆಯಲ್ಲಿ ಬ್ಲೂಟೂತ್ ಹಾಗೂ ಎಲೆಕ್ಟ್ರಾನಿಕ್ ಸಾಧನ ಬಳಸಿ ಅಕ್ರಮ ಎಸಗಿರುವ ಬಗ್ಗೆ ಎಂಬ ದೂರು ಕೇಳಿಬಂದಿತ್ತು. ಈ ಪ್ರಕರಣವನ್ನು ಆಗಿನ ಬಿಜೆಪಿ ಸರ್ಕಾರ ಸಿಐಡಿ ತನಿಖೆಗೆ ನೀಡಿತ್ತು. ನಂತರ ಅಕ್ರಮವೆಸಗಿದ 52 ಆರೋಪಿಗಳನ್ನು ಬಂಧಿಸಲಾಗಿತ್ತು. ಪ್ರಾಥಮಿಕ ತನಿಖೆಯಲ್ಲಿ ಇವರ ಆರೋಪ ಸಾಬೀತಾಗಿದ್ದರಿಂದ ಮುಂದಿನ ಯಾವುದೇ ಪೊಲೀಸ್ ನೇಮಕಾತಿಯಲ್ಲಿ ಇವರು ಭಾಗವಹಿಸದಂತೆ ನಿಷೇಧಿಸಿ ಆದೇಶಿಸಲಾಗಿದೆ.