ರಾಜ್ಯದ ಶೈಕ್ಷಣಿಕ ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತರಲು ಮತ್ತು ನೇಮಕಾತಿ ಪರೀಕ್ಷೆಗಳಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ತಜ್ಞರ ಸಲಹೆ ಮತ್ತು ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸುವುದು ಅತ್ಯಗತ್ಯ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿ, ಶಿಕ್ಷಣ ವ್ಯವಸ್ಥೆಯಲ್ಲಿ ಅಗತ್ಯ ಸುಧಾರಣೆಗಳನ್ನು ತರಲು ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ನೇತೃತ್ವದಲ್ಲಿ ರಚಿಸಲಾಗಿರುವ ‘ವಿದ್ಯಾರ್ಥಿಗಳ ಸಮಸ್ಯೆಗಳು ಮತ್ತು ಶಿಕ್ಷಣ ಸುಧಾರಣೆಗಳ ಕುರಿತ ಸಂಪುಟ ಉಪಸಮಿತಿ’ಯ ಮೊದಲ ಸಭೆ ಗುರುವಾರ ನಡೆದಿದೆ. ಸಭೆಯಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, “ಸಮಿತಿಯ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ನಿಜವಾದ ಬದಲಾವಣೆ ತರಬೇಕು” ಎಂದು ಆಶಯ ವ್ಯಕ್ತಪಡಿಸಿದ್ದಾರೆ.
“ಮೊದಲು ಶಿಕ್ಷಣ ತಜ್ಞರ ಸಭೆ ಕರೆದು ಅವರ ಸಲಹೆಗಳನ್ನು ಪಡೆಯಬೇಕು. ಬಳಿಕ ಪ್ರತಿಯೊಂದು ವಿಷಯದ ಬಗ್ಗೆ ಸಮಗ್ರ ಮಾಹಿತಿ ಕಲೆಹಾಕಿ ಮುಂದುವರಿಯುವುದು ಸೂಕ್ತ. ವಿದ್ಯಾರ್ಥಿಗಳು, ಪೋಷಕರು ಮತ್ತು ಸಾರ್ವಜನಿಕರಿಂದ ನೇರವಾಗಿ ಸಲಹೆ ಹಾಗೂ ಆಕ್ಷೇಪಣೆಗಳನ್ನು ಸ್ವೀಕರಿಸಲು ಪ್ರತ್ಯೇಕ ವೆಬ್ಸೈಟ್ ಆರಂಭಿಸಬೇಕು,” ಎಂದು ಸಭೆಯಲ್ಲಿ ಮಧು ಬಂಗಾರಪ್ಪ ಸಲಹೆ ನೀಡಿದ್ದಾರೆ.
ಸಭೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ನೇಮಕಾತಿ ಪ್ರಕ್ರಿಯೆಗಳ ಕುರಿತು ಸಚಿವರು ಕಳವಳ ವ್ಯಕ್ತಪಡಿಸಿದ್ದಾರೆ. ಯುಪಿಎಸ್ಸಿ ಮಾದರಿಯ ಪಾರದರ್ಶಕ ವ್ಯವಸ್ಥೆಯನ್ನು ಕೆಪಿಎಸ್ಸಿಯಲ್ಲಿ ಅಳವಡಿಸಿಕೊಳ್ಳುವ ಬಗ್ಗೆ ಮತ್ತು ನೇಮಕಾತಿ ಪರೀಕ್ಷೆಗಳಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆಗಳು ನಡೆದಿವೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಈ ಸಭೆಯಲ್ಲಿ ಉಪಸಮಿತಿಯ ಸದಸ್ಯರೂ ಆಗಿರುವ ಸಚಿವರಾದ ಬಸವರಾಜ ರಾಯರೆಡ್ಡಿ, ಪ್ರಿಯಾಂಕ್ ಖರ್ಗೆ, ಡಾ. ಶರಣಪ್ರಕಾಶ್ ಪಾಟೀಲ್, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಎಲ್.ಕೆ. ಅತೀಕ್, ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ವಿ. ರಷ್ಮೀ ಮಹೇಶ್, ಕಾರ್ಯದರ್ಶಿ ತುಳಸಿ ಮದ್ದಿನೇನಿ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.




