ಕಾಂಗ್ರೆಸ್‌ನಲ್ಲಿ ನೇತೃತ್ವದ ಸರ್ಕಾರದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಎಂಬ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆರೋಪಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದು, ನಮ್ಮ ಸರ್ಕಾರದಲ್ಲಿ ಯಾವುದೇ ಭ್ರಷ್ಟಾಚಾರ ನಡೆಯುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ವಿಧಾನಸೌಧದ ಬಳಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ರಾಮಲಿಂಗಾರೆಡ್ಡಿ, “ನಾವು ಹಿಂದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದೆವು. ಅವರ ವಿರುದ್ಧ ಆರೋಪ ಮಾಡುತ್ತಿದ್ದ ನಾವು ಅಧಿಕಾರಕ್ಕೆ ಬಂದ ಬಳಿಕ ಭ್ರಷ್ಟಾಚಾರ ಮಾಡಲು ಸಾಧ್ಯವೆ” ಎಂದು ಪ್ರಶ್ನಿಸಿದ್ದಾರೆ.
“ನಮ್ಮ ಸರ್ಕಾರದಲ್ಲಿ ಯಾವುದೇ ಕಾರಣಕ್ಕೂ ಭ್ರಷ್ಟಾಚಾರ ನಡೆದಿಲ್ಲ. ರಾಜಕೀಯ ಕಾರಣಗಳಿಗೆ ವಿರೋಧ ಪಕ್ಷದವರು ಹೇಳಿಕೆ ಕೊಡುತ್ತಾರೆ ಅಷ್ಟೇ” ಎಂದು ಎಚ್ ಡಿ ಕುಮಾರಸ್ವಾಮಿ ಆರೋಪವನ್ನು ತಳ್ಳಿಹಾಕಿದರು.
“ನಮ್ಮ ಸರ್ಕಾರದಲ್ಲಿ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಗಳನ್ನು ಹುಡುಕಿ ಹುಡುಕಿ ಪೋಸ್ಟಿಂಗ್ ಮಾಡುತ್ತಿದ್ದೇವೆ. ಯಾವ ಭ್ರಷ್ಟಾಚಾರನೂ ಇಲ್ಲ” ಎಂದು ಹೇಳಿದರು.
ಎಚ್ ಡಿ ಕುಮಾರಸ್ವಾಮಿ ಆರೋಪವೇನು?
ಕಾಂಗ್ರೆಸ್ ವಿರುದ್ಧ ಟ್ವೀಟ್ ಮಾಡಿರುವ ಎಚ್ ಡಿ ಕುಮಾರಸ್ವಾಮಿ, “ಪಂಚಗ್ಯಾರಂಟಿಗಳ ಕಾಂಗ್ರೆಸ್ ಸರ್ಕಾರ, ಈಗ 6ನೇ ಗ್ಯಾರಂಟಿಯನ್ನೂ ಖಾತ್ರಿಗೊಳಿಸಿದೆ. ಅದು; ʼಕಾಸಿಗಾಗಿ ಪೋಸ್ಟಿಂಗ್ʼ ಅಧಿಕಾರಕ್ಕೆ ಬಂದು ತಿಂಗಳು ಮುಗಿಯುತ್ತಿದ್ದಂತೆಯೇ ವರ್ಗಾವಣೆ ದಂಧೆಯ ಕೊಚ್ಚೆಯಲ್ಲಿ ಈ ಸರ್ಕಾರ ಎಗ್ಗಿಲ್ಲದೆ ಉರುಳಾಡುತ್ತಿದೆ ಎನ್ನುವುದಕ್ಕೆ ಈ ವರದಿಯೇ ಸಾಕ್ಷಿ” ಎಂದು ಆರೋಪಿಸಿದ್ದರು.
ಈ ಸುದ್ದಿ ಓದಿದ್ದೀರಾ? ವರ್ಗಾವರ್ಗಿ ದಂಧೆಗೆ ಮುಖ್ಯಮಂತ್ರಿ ಕಚೇರಿಯಲ್ಲೇ ʼಹುಂಡಿʼ ಇದೆ; ಎಚ್ ಡಿ ಕುಮಾರಸ್ವಾಮಿ ಆರೋಪ
“ಸ್ವತಃ ಮುಖ್ಯಮಂತ್ರಿ ಕಚೇರಿಯಲ್ಲೇ ವರ್ಗಾವರ್ಗಿ ದಂಧೆಗೆ ʼಹುಂಡಿʼ ಇದೆ ಎನ್ನುವುದು ಇಲ್ಲಿ ದಾಖಲೆ ಸಮೇತ ಬಟಾಬಯಲಾಗಿದೆ. ಒಂದೇ ಹುದ್ದೆಗೆ ಸ್ವತಃ ಮುಖ್ಯಮಂತ್ರಿ ಅವರೇ ನಾಲ್ವರಿಗೆ ಶಿಫಾರಸು ಪತ್ರ ಕೊಟ್ಟಿದ್ದಾರೆ. ಸಿಎಂ ಕಚೇರಿಯಲ್ಲಿ ಏನೇನು ನಡೆಯುತ್ತಿದೆ? ಸಿಎಂಒ ಎಂದರೆ ಸಿಎಂ ಆಫ್ ಕರ್ನಾಟಕವೋ ಅಥವಾ ಕರಪ್ಷನ್ ಆಫ್ ಕರ್ನಾಟಕವೋ” ಎಂದು ಪ್ರಶ್ನಿಸಿದ್ದರು.