ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪದ ಮೇಲೆ ಕಾಂಗ್ರೆಸ್ ಸಂಸದ ರಾಕೇಶ್ ರಾಥೋಡ್ ಅವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶದ ಸೀತಾಪುರ ಲೋಕಸಭಾ ಕ್ಷೇತ್ರದ ಸಂಸದ ರಾಕೇಶ್ ರಾಥೋಡ್ ಲೋಹರ್‌ಬಾಗ್‌ನಲ್ಲಿರುವ ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸುತ್ತಿದ್ದರು. ಈ ವೇಳೆ, ಮಧ್ಯಪ್ರವೇಶಿಸಿದ ಕೊತ್ವಾಲಿ ಪೊಲೀಸರು, ಅವರನ್ನು ಬಂಧಿಸಿದ್ದಾರೆ. ಬಳಿಕ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರಿಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ.
ಸಂಸದ ರಾಕೇಶ್ ರಾಥೋಡ್ ತಮ್ಮನ್ನು ಮದುವೆಯಾಗುವುದಾಗಿ ನಂಬಿಸಿ, ನಾಲ್ಕು ವರ್ಷಗಳಲ್ಲಿ ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆಯೊಬ್ಬರು ಜನವರಿ 17ರಂದು ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅವರ ದೂರಿನ ಆಧಾರದ ಮೇಲೆ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ಪ್ರಕರಣ ದಾಖಲಾದ ಬಳಿಕ ನಿರೀಕ್ಷಣಾ ಜಾಮೀನು ಪಡೆಯಲು ರಾಥೋಡ್ ಯತ್ನಿಸಿದ್ದರು. ಆದರೆ, ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿತ್ತು.
ತಮಗೆ ನಿರೀಕ್ಷಣಾ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದ್ದ ಬಗ್ಗೆ ರಾಥೋಡ್ ಪ್ರತಿಕಾಗೋಷ್ಠಿ ನಡೆಸುತ್ತಿದ್ದರು.ಈ ವೇಳೆ, ಅವರ ಮನೆಗೆ ಧಾವಿಸಿದ ಪೊಲೀಸರು, ಅವರನ್ನು ಬಂಧಿಸಿದ್ದಾರೆ.