ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಜೂನ್ 20) ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿ ಎಲ್ಲ ಆರೋಪಿಗಳನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಕಾಮಾಕ್ಷಿಪಾಳ್ಯ ಪೊಲೀಸರು ಹಾಜರುಪಡಿಸಿದ್ದರು.
ಈ ಕೊಲೆ ಪ್ರಕರಣದಲ್ಲಿ ದರ್ಶನ್ ಸೇರಿದಂತೆ ಆರು ಆರೋಪಿಗಳನ್ನು ನ್ಯಾಯಾಲಯವು ಮೂರನೇ ಬಾರಿಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದರೆ, ಪವಿತ್ರಾ ಗೌಡ ಮತ್ತು ಇತರ ಆರೋಪಿಗಳು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಪೊಲೀಸರ ಪರವಾಗಿ ಎಸ್ಪಿಪಿ ಪ್ರಸನ್ನಕುಮಾರ್ ವಾದ ಮಂಡಿಸಿ, “ಕೊಲೆ ಪ್ರಕರಣದ ತನಿಖೆ ವೇಳೆ ಹಲವು ಮಾಹಿತಿ ಲಭ್ಯವಾಗಿದೆ. ಪ್ರಕರಣದ ಕುರಿತು ಆರೋಪಿಗಳ ವಿಚಾರಣೆಯ ಅಗತ್ಯವಿದೆ. ಹಾಗಾಗಿ, ನ್ಯಾಯಾಲಯವು ಇನ್ನೂ ನಾಲ್ಕು ದಿನ ಪೊಲೀಸ್ ಕಸ್ಟಡಿಗೆ ನೀಡಬೇಕು” ಎಂಬುದಾಗಿ ಮನವಿ ಮಾಡಿದರು.
ಇದಕ್ಕೆ ದರ್ಶನ್ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿ, “ಬಹುತೇಕ ವಿಚಾರಣೆ ಮುಗಿದಿದೆ. ಹಾಗಾಗಿ, ಪೊಲೀಸ್ ಕಸ್ಟಡಿಗೆ ನೀಡುವ ಅಗತ್ಯವಿಲ್ಲ” ಎಂದರು.
ಇದಕ್ಕೆ ಮರು ವಾದ ಮಂಡಿಸಿದ ಎಸ್ಪಿಪಿ, “ರೇಣುಕಾಸ್ವಾಮಿ ಮೊಬೈಲ್ ಇನ್ನೂ ಪತ್ತೆಯಾಗಿಲ್ಲ. ಅದನ್ನು ಪತ್ತೆ ಹಚ್ಚಬೇಕಿದೆ. ಪವಿತ್ರಾ ಗೌಡ ಅವರನ್ನು ನ್ಯಾಯಾಂಗ ಬಂಧನಕ್ಕೆ ಹಾಗೂ ದರ್ಶನ್ ಸೇರಿ ಆರು ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಬೇಕು” ಎಂದು ಮನವಿ ಮಾಡಿದರು. ಇದಕ್ಕೆ ನ್ಯಾಯಾಧೀಶರು ಸಮ್ಮತಿ ಸೂಚಿಸಿದರು. ಆರೋಪಿಗಳಾದ ನಟ ದರ್ಶನ್, ವಿನಯ್, ಪ್ರದೋಷ್, ನಾಗರಾಜ್, ಲಕ್ಷ್ಮಣ್ ಹಾಗೂ ಧನರಾಜ್ ಅವರನ್ನು ಬೆಂಗಳೂರಿನ 24ನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ವಿಶ್ವನಾಥ್ ಚನ್ನಬಸಪ್ಪ ಗೌಡರ್ ಪೊಲೀಸ್ ಕಸ್ಟಡಿಗೆ ನೀಡಿದರು.
ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಹಿನ್ನೆಲೆಯಲ್ಲಿ ಒಂದನೇ ಆರೋಪಿಯಾಗಿರುವ ಪವಿತ್ರಾ ಗೌಡ ಮತ್ತು ಇತರ ಆರೋಪಿಗಳು ಇಂದು ಸಂಜೆಯೇ ಪರಪ್ಪನ ಅಗ್ರಹಾರ ಸೇರಲಿದ್ದಾರೆ ಎಂದು ತಿಳಿದುಬಂದಿದೆ.
ಪ್ರಕರಣದ ಹಿನ್ನೆಲೆ
ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳಿಸಿದ್ದ. ಆತನಿಗೆ ಪಾಠ ಕಲಿಸಲು ದರ್ಶನ್ ಮತ್ತು ಸಹಚರರು ರೇಣುಕಾಸ್ವಾಮಿಯನ್ನು ಅಪಹರಿಸಿ ಬೆಂಗಳೂರಿಗೆ ಕರೆತಂದು ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಜೂನ್ 8ರಂದು ರೇಣುಕಾಸ್ವಾಮಿ ಕೊಲೆ ನಡೆದಿತ್ತು. ಜೂನ್ 11ರಂದು ಹತ್ಯೆ ಸಂಬಂಧ ದರ್ಶನ್ನನ್ನು ಮೈಸೂರಿನಲ್ಲಿ ವಶಕ್ಕೆ ಪಡೆದು ಬಂಧಿಸಲಾಗಿತ್ತು.
ಈ ಪ್ರಕರಣದಲ್ಲಿ ಪವಿತ್ರ ಗೌಡ ಎ1 ದರ್ಶನ್ ಎ2 ಆಗಿದ್ದರು. ಹೀಗಾಗಿ ಈ ಕೊಲೆಯಲ್ಲಿ ಭಾಗಿಯಾಗಿದ್ದ ಎಲ್ಲ ಆರೋಪಿಗಳನ್ನು ಪೊಲೀಸ್ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಎಲ್ಲ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ದಿನ ಕಳೆದಂತೆ ಸಾಕ್ಷಿಗಳನ್ನು ಪತ್ತೆ ಹಚ್ಚಿದ್ದರು.
