ಕಸ್ತೂರಿ ರಂಗನ್ ವರದಿ | 16,114 ಚ.ಕಿ.ಮೀ. ಪರಿಸರ ಸೂಕ್ಷ್ಮ ಪ್ರದೇಶ ಮಿತಿಗೆ ಸಮ್ಮತಿ: ಸಚಿವ ಈಶ್ವರ ಖಂಡ್ರೆ

Date:

Advertisements

ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ 16,114 ಚ.ಕಿ.ಮೀ ಪರಿಸರ ಸೂಕ್ಷ್ಮ ಪ್ರದೇಶವನ್ನು ಈಗಾಗಲೇ ಸಂರಕ್ಷಿಸಲಾಗಿದ್ದು, ಈ ಮಿತಿಗೆ ಒಳಪಟ್ಟು ಕಸ್ತೂರಿ ರಂಗನ್ ವರದಿಯನ್ನು ಸಮ್ಮತಿಸಬಹುದು ಎಂಬ ಸಲಹೆಯನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ನೀಡಿದ್ದಾರೆ.

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕುರಿತಂತೆ ಕೇಂದ್ರ ಸರ್ಕಾರ ಆ.2ರಂದು 6ನೇ ಅಧಿಸೂಚನೆ ಹೊರಡಿಸಿರುವ ಬೆನ್ನಲ್ಲೇ ಈ ಮಾಸಾಂತ್ಯದೊಳಗೆ ರಾಜ್ಯ ಸರ್ಕಾರದ ನಿಲುವು ಸಲ್ಲಿಸಬೇಕಿರುವ ಹಿನ್ನೆಲೆಯಲ್ಲಿ ನಡೆದ 11 ಜಿಲ್ಲೆಗಳ ಜನಪ್ರತಿನಿಧಿಗಳ (ಬಾಧ್ಯಸ್ಥರ) ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ವಿವರ ನೀಡಿದರು.

“ಇಂದು ನಡೆದ ಸಭೆಯಲ್ಲಿ ಪಶ್ಚಿಮಘಟ್ಟ ವ್ಯಾಪ್ತಿಯ 11 ಜಿಲ್ಲೆಗಳ ಸಚಿವರ, ಶಾಸಕರ ಮತ್ತು ಸಂಸತ್ ಸದಸ್ಯರ ಅಭಿಪ್ರಾಯ ಪಡೆಯಲಾಗಿದೆ. ಆ ಎಲ್ಲ ಅಭಿಪ್ರಾಯವನ್ನು ನಾಳೆ ನಡೆಯಲಿರುವ ಸಚಿವ ಸಂಪುಟದ ಉಪ ಸಮಿತಿ ಸಭೆಯಲ್ಲಿ ಚರ್ಚಿಸಿ, ಮುಖ್ಯಮಂತ್ರಿಗಳೊಂದಿಗೆ ಸಮಾಲೋಚಿಸಿ, ಸಂಪುಟದ ಅನುಮೋದನೆ ಪಡೆದು ಕೇಂದ್ರಕ್ಕೆ ಸಲ್ಲಿಸಲಾಗುವುದು” ಎಂದರು.

Advertisements

“ಹಲವು ಜನಪ್ರತಿನಿಧಿಗಳು ಈಗಾಗಲೇ ರಾಜ್ಯದಲ್ಲಿ 16114 ಚ.ಕಿ.ಮೀ ಪರಿಸರ ಸೂಕ್ಷ್ಮ ಪ್ರದೇಶ ಇದ್ದು, ಇನ್ನು ಹೆಚ್ಚಳ ಮಾಡಿದರೆ ಅರಣ್ಯದಂಚಿನ ಜನರ ಬದುಕು ದುಸ್ತರವಾಗುತ್ತದೆ. ಹೀಗಾಗಿ ಬಫರ್ ವಲಯವನ್ನು ಶೂನ್ಯಕ್ಕೆ ತರಬೇಕು ಎಂದು ಸಲಹೆ ನೀಡಿದ್ದಾರೆ. ಹಾಲಿ ಇರುವ 16,114 ಚ.ಕಿ.ಮೀ. ಮಿತಿಗೆ ನಾವು ಸಮ್ಮತಿಸಿದರೆ ಶೂನ್ಯ ಬಫರ್ ಆಗುತ್ತದೆ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ” ಎಂದು ಹೇಳಿದರು.

“ಕಸ್ತೂರಿ ರಂಗನ್ ಸಮಿತಿ ವರದಿಯಲ್ಲಿ ರಾಜ್ಯದಲ್ಲಿ 20,668 ಚದರ ಕಿ.ಮೀ ಪರಿಸರ ಸೂಕ್ಷ್ಮ ವಲಯ ಗುರುತಿಸಲಾಗಿದೆ. ಈ ಬಗ್ಗೆ ಭೌತಿಕ ಸರ್ವೆ ನಡೆಸಿದರೆ ಈ ಪ್ರದೇಶ ಇನ್ನೂ ಹೆಚ್ಚಳವಾಗಲಿದೆ ಎಂಬ ಅಭಿಪ್ರಾಯವನ್ನೂ ಜನಪ್ರತಿನಿಧಿಗಳು ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪರಿಶೀಲಿಸಲಾಗುವುದು” ಎಂದರು.

“ಹಲವು ತಲೆಮಾರುಗಳಿಂದ ಅರಣ್ಯ ಪ್ರದೇಶದಲ್ಲೇ ಜೀವನ ನಡೆಸುತ್ತಿರುವವರನ್ನು ಒಕ್ಕಲೆಬ್ಬಿಸುವುದು ಸೂಕ್ತವಲ್ಲ. ಅವರಿಗೆ ಬೇರೆ ಕಡೆ ಪುನರ್ವಸತಿ ಕಲ್ಪಿಸಿದರೂ ಅವರು ಅಲ್ಲಿಗೆ ಹೋಗುವುದಿಲ್ಲ ಎಂಬ ಅಭಿಪ್ರಾಯವೂ ಸಭೆಯಲ್ಲಿ ವ್ಯಕ್ತವಾಗಿದೆ ಹೀಗಾಗಿ ನಾಳೆಯ ಸಭೆಯಲ್ಲಿ ಈ ಎಲ್ಲ ವಿಚಾರಗಳ ಬಗ್ಗೆ ಚಿಂತನ ಮಂಥನ ನಡೆಸಲಾಗುವುದು” ಎಂದು ಹೇಳಿದರು.

ವಿಶೇಷ ಪ್ಯಾಕೇಜ್‌ಗೆ ಒತ್ತಾಯ

“ಈಗಾಗಲೇ ಇರುವ 16,114 ಚ.ಕಿ.ಪ್ರದೇಶಕ್ಕೆ ಅಂಗೀಕಾರ ನೀಡಿದರೂ ಈ ಪ್ರದೇಶದಲ್ಲಿರುವ 1576 ಗ್ರಾಮಗಳ ಜನರ ಜೀವನೋಪಾಯಕ್ಕೆ ಅನಾನುಕೂಲ ಆಗಲಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂಬ ಒತ್ತಾಯ ಮಾಡಬಹುದು” ಎಂದು ತಾವು ಸಲಹೆ ನೀಡಿರುವುದಾಗಿ ಅರಣ್ಯ ಸಚಿವರು ತಿಳಿಸಿದರು.

“ಪಶ್ಚಿಮ ಘಟ್ಟ ಕೇವಲ ಗುಜರಾತ್, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳ ಮತ್ತು ತಮಿಳುನಾಡಿಗೆ ಮಾತ್ರ ಸಂಬಂಧಿಸಿದ್ದಲ್ಲ. ಈ ಘಟ್ಟ ಪ್ರದೇಶ ಹಲವು ನದಿಗಳ ಉಗಮ ಸ್ಥಾನವಾಗಿದೆ ಮಿಗಿಲಾಗಿ ಮಳೆಯ ಮಾರುತಗಳನ್ನು ತಡೆಯುವ ಕಾರಣ ದೇಶಾದ್ಯಂತ ವ್ಯಾಪಕ ಮಳೆಯಾಗುತ್ತದೆ. ಹೀಗಾಗಿ ಈ ಪಶ್ಚಿಮಘಟ್ಟ ಸಂರಕ್ಷಣೆಯ ಹೊಣೆ ಕೇಂದ್ರದ್ದೂ ಆಗಿದೆ. ಆದ ಕಾರಣ ವಿಶೇಷ ಪ್ಯಾಕೇಜ್ ಘೋಷಿಸಬೇಕು” ಎಂದು ಒತ್ತಾಯಿಸಿದರು.

ಒತ್ತುವರಿ ತೆರವಿನ ಬಗ್ಗೆ ಸ್ಪಷ್ಟೀಕರಣ

“ಒತ್ತುವರಿ ತೆರವಿನ ಬಗ್ಗೆ ತಾವು ನೀಡಿರುವ ಟಿಪ್ಪಣಿಗಳು ಸ್ಪಷ್ಟವಾಗಿವೆ. 2015ರ ನಂತರದ ಒತ್ತುವರಿ ಮಾತ್ರ ತೆರವು ಮಾಡಲು ಸೂಚಿಸಲಾಗಿದೆ. ಜೊತೆಗೆ 2015ರ ಸರ್ಕಾರದ ಆದೇಶ ಮತ್ತು ನಡವಳಿಯಂತೆ 3 ಎಕರೆಗಿಂತ ಮೇಲ್ಪಟ್ಟ ದೊಡ್ಡ ಒತ್ತುವರಿ ತೆರವು ಮಾಡಲಾಗುತ್ತಿದ್ದು, ಬಡ ರೈತರ ಒತ್ತುವರಿಯನ್ನು (ಪಟ್ಟಾಭೂಮಿ ಮತ್ತು ಒತ್ತುವರಿ ಸೇರಿ 3 ಎಕರೆ) ತೆರವು ಮಾಡಿಸುವುದಿಲ್ಲ” ಎಂದು ಹಲವು ಬಾರಿ ಸ್ಪಷ್ಟಪಡಿಸಿದ್ದೇನೆ” ಎಂದರು.

ರಾಜೇಗೌಡರ ಮನವಿ

“ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾಸಕ ರಾಜೇಗೌಡರು 3 ಎಕರೆಗಿಂತ ಕಡಿಮೆ ಅರಣ್ಯ ಒತ್ತುವರಿ ಮಾಡಿರುವವರ ಜೀವನೋಪಾಯಕ್ಕೆ ತೊಂದರೆ ಆಗದಂತೆ ಕ್ರಮ ವಹಿಸಲು ಮನವಿ ಮಾಡಿರುತ್ತಾರೆ” ಎಂದು ಈಶ್ವರ ಖಂಡ್ರೆ ತಿಳಿಸಿದರು.

ಸಭೆಯಲ್ಲಿ ಸಚಿವರಾದ ಕೆ.ಜೆ.ಜಾರ್ಜ್, ಡಾ.ಎಚ್.ಸಿ. ಮಹದೇವಪ್ಪ, ಸತೀಶ್ ಜಾರಕಿಹೋಳಿ, ಮಧು ಬಂಗಾರಪ್ಪ, ಮಾಂಕಾಳ ವೈದ್ಯ, ವಿಧಾನಪರಿಷತ್ ಉಪ ಸಭಾಪತಿ ಪ್ರಾಣೇಶ್,ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ಶಾಸಕರುಗಳಾದ ಆರಗ ಜ್ಞಾನೇಂದ್ರ, ನಯನ ಮೋಟಮ್ಮ, ರಾಜೇಗೌಡ, ಹರೀಶ್ ಪೂಂಜಾ, ಸಂಸದರಾದ ಶ್ರೇಯಸ್ ಪಟೇಲ್ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ವೋಟ್ ಬ್ಯಾಂಕ್ ಗಾಗಿ ಜನಪ್ರತಿನಿಧಿಗಳು ಏನೋ ಒಂದು ಹೇಳಿದರೆ ಸರಿಯೇ? ಈ ಸಭೆಯಲ್ಲಿ ಪರಿಸರವಾದಿಗಳನ್ನು ಏಕೆ ಆಮಂತ್ರಿಸರಲಿಲ್ಲ ಅವರ ಅಭಿಪ್ರಾಯವನ್ನು ಏಕೆ ಪಡೆಯಲಿಲ್ಲ?

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

Download Eedina App Android / iOS

X