ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ 94.73 ಕೋಟಿ ರೂ. ಹಣ ವರ್ಗಾವಣೆ ಅಕ್ರಮದಲ್ಲಿ ಭಾಗಿಯಾದ ಆರೋಪಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರು ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಎಲ್ಲ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಅಲ್ಲದೇ, ಡಿಸಿಎಂ ಡಿ ಕೆ ಶಿವಕುಮಾರ್ ಕೂಡ ಪಕ್ಷ ಹಾಗೂ ಸರ್ಕಾರದ ಘನತೆ ಉಳಿಸಲು ನಾಗೇಂದ್ರ ಸ್ವಯಂ ಪ್ರೇರಣೆಯಿಂದ ರಾಜೀನಾಮೆಗೆ ಮುಂದಾಗಿದ್ದಾರೆ ಎಂದು ಹೇಳಿಕೆ ನೀಡಿದ್ದರು.
ಈ ಎಲ್ಲ ಸುದ್ದಿಗಳ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಸಚಿವ ಬಿ ನಾಗೇಂದ್ರ, “ನಾನಿನ್ನೂ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ” ಎಂದು ಹೇಳಿಕೆ ನೀಡಿದ್ದಾರೆ. ಅಲ್ಲದೇ, ಸಂಜೆ 4.30ಕ್ಕೆ ವಿಧಾನಸೌಧದಲ್ಲಿರುವ ಸಚಿವರ ಕೊಠಡಿಯಲ್ಲಿ ಪತ್ರಿಕಾಗೋಷ್ಠಿ ಕರೆದಿದ್ದಾರೆ.
ಈ ನಡುವೆ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ ವೇಳೆಯಲ್ಲಿಯೇ ಡಿಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಕರೆ ಮಾಡಿರುವ ನಾಗೇಂದ್ರ, “ನಾನು ರಾಜೀನಾಮೆ ನೀಡಿಲ್ಲ. ಎಲ್ಲ ವಿವರಗಳನ್ನು ಪತ್ರಿಕಾಗೋಷ್ಠಿಯಲ್ಲಿ ತಿಳಿಸುತ್ತೇನೆ” ಎಂದು ಹೇಳಿದ್ದಾರೆ.
ಇದನ್ನು ಓದಿದ್ದೀರಾ? ಸರ್ಕಾರ ರಚನೆಗೆ ಮುನ್ನವೆ ಮೋದಿಗೆ ಸಂಕಷ್ಟ: ಅಗ್ನಿಪಥ್, ಒಂದು ದೇಶ ಒಂದು ಚುನಾವಣೆಗೆ ಜೆಡಿಯು ಆಕ್ಷೇಪ
ನಾಗೇಂದ್ರ ಅವರ ಕರೆಯ ಬಳಿಕ ಹೇಳಿಕೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್, “ನಾನು ಮಾಧ್ಯಮಗಳಲ್ಲಿ ಬಂದಿದ್ದ ವರದಿ ನೋಡಿ ಹೇಳಿಕೆ ನೀಡಿದ್ದೆ. ಇದು ಸತ್ಯಕ್ಕೆ ದೂರವಾದದ್ದು. ಮಾಧ್ಯಮಗಳನ್ನು ಉದ್ದೇಶಿಸಿ ವಿಧಾನಸೌಧದಲ್ಲಿ ಮಾತನಾಡುತ್ತೇನೆ ಎಂದು ನಾಗೇಂದ್ರ ನನಗೆ ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಎಂಬ ನನಗೆ ಈಗ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ನೀವು ಪತ್ರಿಕಾಗೋಷ್ಠಿಗೆ ತೆರಳಿ” ಎಂದು ಮಾಧ್ಯಮಗಳಿಗೆ ತಿಳಿಸಿದರು.
ಏನಿದು ಪ್ರಕರಣ?
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ 94.73 ಕೋಟಿ ರೂ. ಹಣವು ಅಕ್ರಮ ನಡೆದಿದೆ ಎಂದು ಆರೋಪಿಸಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದರ ಬೆನ್ನಲ್ಲೇ ಸಚಿವ ನಾಗೇಂದ್ರ ಅವರ ತಲೆ ತಂಡಕ್ಕೆ ಒತ್ತಡ ಉಂಟಾಗಿತ್ತು. ಇದರ ಬೆನ್ನಲ್ಲೇ ಇಡೀ ಅಕ್ರಮದ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿತ್ತು. ಮತ್ತೊಂದೆಡೆ ಯೂನಿಯನ್ ಬ್ಯಾಂಕ್ ಈ ಬಗ್ಗೆ ಸಿಬಿಐ ತನಿಖೆ ನಡೆಸಲು ಕೋರಿ ಪತ್ರ ಬರೆದಿತ್ತು.
ಈ ಬೆಳವಣಿಗೆಯ ನಡುವೆ ಅಕ್ರಮದ ತನಿಖೆಗೆ ಮನೀಷ್ ಖರ್ಬೀಕರ್ ನೇತೃತ್ವದಲ್ಲಿ ರಚಿಸಿದ್ದ ಎಸ್‌ಐಟಿಯು ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಆರೋಪದಲ್ಲಿ ಸಚಿವ ಬಿ. ನಾಗೇಂದ್ರ ಆಪ್ತ ನೆಕ್ಕಂಟಿ ನಾಗರಾಜ್ ಹಾಗೂ ನಾಗೇಶ್ವರರಾವ್ ಅವರನ್ನು ಬಂಧಿಸಿತ್ತು.
ಇದನ್ನು ಓದಿದ್ದೀರಾ? ಜನರ ಅಪೇಕ್ಷೆ ಈಡೇರಿಸಲು ಸರಿಯಾದ ಸಂದರ್ಭದಲ್ಲಿ ಸರಿಯಾದ ನಿರ್ಧಾರ: ‘ಇಂಡಿಯಾ’ ಸಭೆ ಬಳಿಕ ಮಲ್ಲಿಕಾರ್ಜುನ ಖರ್ಗೆ
ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಹಣ ವರ್ಗಾವಣೆ ಪ್ರಕರಣದಲ್ಲಿ ನಾಗೇಂದ್ರ ಅವರ ಪಾತ್ರವಿರುವ ಬಗ್ಗೆಯೂ ಪುರಾವೆಗಳನ್ನು ಕಲೆ ಹಾಕಿರುವುದಾಗಿ ವರದಿಯಾಗಿದೆ. ಜೊತೆಗೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಬೆಂಗಳೂರು ಪೂರ್ವ ವಲಯದ ಡೆಪ್ಯುಟಿ ಜನರಲ್ ಮ್ಯಾನೇಜರ್ (ಡಿಜಿಎಂ) ಮಹೇಶ್ ಜೆ. ಅವರ ದೂರು ಆಧರಿಸಿ ಸಿಬಿಐ ಅಧಿಕಾರಿಗಳು ತನಿಖೆ ಕೈಗೆತ್ತಿಕೊಂಡಿದ್ದಾರೆ.
