ಕಾವೇರಿ ನೀರು ಬಿಡುವ ಆದೇಶಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿರ್ವಹಣಾ ಮಂಡಳಿ ಮುಂದೆ ಮರುಪರಿಶೀಲನಾ ಅರ್ಜಿಯನ್ನು ಇಂದು ಸಲ್ಲಿಸಲಾಗಿದೆ. ನಂತರ ಪರಿಸ್ಥಿತಿ ಅವಲೋಕಿಸಿ ಸರ್ವೋಚ್ಚ ನ್ಯಾಯಾಲಯದ ಮುಂದೆಯೂ ಮರುಪರಿಶೀಲನಾ ಅರ್ಜಿ ಸಲ್ಲಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಶನಿವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ಶುಕ್ರವಾರ ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರು, ಅಡ್ವೊಕೇಟ್ ಜನರಲ್ ಅವರೊಂದಿಗೆ ಸಭೆ ನಡೆಸಿ ಸಲಹೆಗಳನ್ನು ಪಡೆಯಲಾಗಿದ್ದು, ಅದರಂತೆ ಕ್ರಮ ಕೈಗೊಳ್ಳಲಾಗುವುದು” ಎಂದರು.
ಲಿಂಗಾಯತ ಸಮುದಾಯದ ಅಧಿಕಾರಿಗಳಿಗೆ ಗೌರವ ಸಿಗುತ್ತಿಲ್ಲ ಎಂಬ ದೂರಿನ ಬಗ್ಗೆ ಪ್ರತಿಕ್ರಿಯಿಸಿ, “ಲಿಂಗಾಯತ ಸಮುದಾಯಕ್ಕೆ ಸೇರಿದ ಏಳು ಸಚಿವರು ಸಚಿವ ಸಂಪುಟದಲ್ಲಿದ್ದು, ಈ ಸಮುದಾಯಕ್ಕೆ ಸೇರಿದ ಅಧಿಕಾರಿಗಳಿಗೆ ಅನ್ಯಾಯವಾಗಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಜಾತಿ ಧರ್ಮದವರಿಗೂ ಅನ್ಯಾಯವಾಗುವುದಿಲ್ಲ” ಎಂದು ತಿಳಿಸಿದರು.