ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಲುಕಿಸಿ, ಅವರು ಭ್ರಷ್ಟಾಚಾರ ಮಾಡಿದ್ದಾರೆ ಎಂದು ಆರೋಪಿಸಲು ಬಿಜೆಪಿ ಭಾರೀ ಕಸರತ್ತು ನಡೆಸಿತು. ಆದರೆ, ಅದು ಬಿಜೆಪಿಗೆ ಲಾಭ ತಂದುಕೊಡಲಿಲ್ಲ. ಸಿದ್ದರಾಮಯ್ಯ ಅವರನ್ನು ಆರೋಪಿ ಅಥವಾ ಭ್ರಷ್ಟಾಚಾರಿ ಎಂದು ಬಿಂಬಿಸಲು ಸಾಧ್ಯವಾಗಲಿಲ್ಲ. ಪ್ರಕರಣದ ತನಿಖೆ ನಡೆಸಿದ ಲೋಕಾಯುಕ್ತ, ‘ಬಿ ರಿಪೋರ್ಟ್’ ಸಲ್ಲಿಸಿದ್ದು, ಪ್ರಕರಣದ ಸದ್ದು ಕಡಿಮೆಯಾಗಿದೆ. ಇದೀಗ, ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಆರೋಪವನ್ನು ಮುನ್ನೆಲೆಗೆ ತರಲಾಗಿದ್ದು, ಅವರ ವಿರುದ್ಧದ ತನಿಖೆ ನಡೆಸಲು ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಲಾಗಿದೆ.
ಗಣಿ ಗುತ್ತಿಗೆ ನವೀಕರಣದ ಹೆಸರಲ್ಲಿ ಸಿದ್ದರಾಮಯ್ಯ ಅವರು 500 ಕೋಟಿ ರೂ. ಕಿಕ್‌ಬ್ಯಾಕ್ ಪಡೆದಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ರಾಮಮೂರ್ತಿ ಗೌಡ ಆರೋಪಿಸಿದ್ದಾರೆ. ಈ ಬಗ್ಗೆ ತನಿಖೆಗಾಗಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಕೆಂದು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರಿಗೆ ಮನವಿ ಮಾಡಿದ್ದಾರೆ.
2015ರಲ್ಲಿ ಸಿದ್ದರಾಮಯ್ಯ ಅವರು ಮೊದಲ ಅವಧಿಯ ಮುಖ್ಯಮಂತ್ರಿಯಾಗಿದ್ದರು. ಆ ವೇಳೆ, “ಅವರು 8 ಗಣಿ ಗುತ್ತಿಗೆಗಳನ್ನು ಹರಾಜು ಹಾಕುವ ಬದಲು ನವೀಕರಣ ಮಾಡಿದ್ದರು. ಮಾತ್ರವಲ್ಲ, ಗಣಿ ಹಗರಣದಲ್ಲಿ ಆರೋಪಿಗಳಾಗಿರುವ ಮತ್ತು ತನಿಖೆ ಎದುರಿಸುತ್ತಿರುವ ಗಣಿ ಕಂಪೆನಿಗಳ ಪರವಾನಗಿಯನ್ನೂ ನವೀಕರಣ ಮಾಡಿದ್ದರು. ಈ ರೀತಿ ನವೀಕರಣ ಮಾಡಿಕೊಟ್ಟು, ಆ ಕಂಪನಿಗಳಿಂದ ಅವರು 500 ಕೋಟಿ ಕಿಕ್‌ಬ್ಯಾಕ್ ಪಡೆದಿದ್ದಾರೆ” ಎಂದು ರಾಮಮೂರ್ತಿ ಗೌಡ ಆರೋಪಿಸಿದ್ದಾರೆ.
“ಸಿದ್ದರಾಮಯ್ಯ ಅವರು ಕಿಕ್‌ಬ್ಯಾಕ್ ಪಡೆದಿದ್ದಾರೆ. ಈ ಬಗ್ಗೆ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿ ತನಿಖೆ ನಡೆಸಬೇಕು. ಅದಕ್ಕಾಗಿ, ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ-1988ರ ಸೆಕ್ಷನ್ 7, 9, 11, 12 ಹಾಗೂ 15 ಅಡಿ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಬೇಕು” ಎಂದು ತಮ್ಮ ದೂರು ಪತ್ರದಲ್ಲಿ ಬರೆದಿದ್ದಾರೆ.