ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗುವುದು ನೂರಕ್ಕೆ ನೂರರಷ್ಟು ಸತ್ಯ ಎಂದು ಕಾಂಗ್ರೆಸ್ ಶಾಸಕ ವಿಶ್ವಾಸ್ ವೈದ್ಯ ಹೇಳಿದ್ದಾರೆ. ಮುಖ್ಯಮಂತ್ರಿ ಹುದ್ದೆಗಾಗಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಈಗಲೂ ಮುಗುಸಿನ ತಿಕ್ಕಾಟ ನಡೆಯುತ್ತಿದೆ ಎನ್ನಲಾಗುತ್ತಿರುವಾಗ ವಿಶ್ವಾಸ್ ವೈದ್ಯ ಹೊಸ ಬಾಂಬ್ ಸಿಡಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಯರಗಟ್ಟಿಯಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಸತೀಶ್ ಜಾರಕಿಹೊಳಿ ಪ್ರಭಾವಿ ನಾಯಕರಾಗಿದ್ದಾರೆ. ಪೂರ್ವದಲ್ಲಿ ಸೂರ್ಯ ಹುಟ್ಟುವುದು ಎಷ್ಟೋ ಸತ್ಯವೋ, ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗುವುದೂ ಅಷ್ಟೇ ಸತ್ಯ” ಎಂದಿದ್ದಾರೆ.
“ಕಳೆದ ವಿಧಾನಸಭಾ ಚುನಾವಣೆಯಲ್ಲಿ ಯರಗಟ್ಟಿ ಜನರು ಅಭೂತಪೂರ್ವ ಬೆಂಬಲ ನೀಡಿದ್ದೀರಿ. ತಮಗೆಲ್ಲರಿಗೂ ಕೃತಜ್ಞತೆಗಳು” ಎಂದು ಅವರು ಹೇಳಿದ್ದಾರೆ.
ಇತ್ತೀಚೆಗಷ್ಟೇ ಸಚಿವ ಸತೀಶ್ ಜಾರಕಿಹೊಳಿ ಅವರು ತಮ್ಮ ಆಪ್ತರೊಂದಿಗೆ ವಿದೇಶಕ್ಕೆ ತೆರಳಿದ್ದರು. ಅವರು ಹೋಗಿದ್ದು ಕಾಂಗ್ರೆಸ್ ಒಳಗಿನ ಅಸಮಾಧಾನವನ್ನು ಸೂಚಿಸುತ್ತದೆ ಎಂದು ಹೇಳಲಾಗಿತ್ತು. ಅಲ್ಲದೆ, ಅವರು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರೊಂದಿಗೆ ಅಸಮಾಧಾನ ಹೊಂದಿದ್ದಾರೆ ಎಂದೂ ಹೇಳಲಾಗಿದೆ.