- ನ್ಯಾ. ಎಂ ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠದಿಂದ ವಿಚಾರಣೆ
- ಎಸ್‌ಡಿಪಿಐ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಲ್ಲಿಸಿರುವ ಅರ್ಜಿ
ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಹಲವೆಡೆ ಎಸ್‌ಡಿಪಿಐ (ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾಗೆ) ಕಚೇರಿಗಳ ಮೇಲೆ ದಾಳಿ ನಡೆಸಿ, ಜಪ್ತಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್ ತನ್ನ ಆದೇಶವನ್ನು ಕಾಯ್ದಿರಿಸಿದೆ.
ರಾಜ್ಯ ಸರ್ಕಾರದ ಧೋರಣೆ ಮತ್ತು ನಿರ್ಧಾರವನ್ನು ಪ್ರಶ್ನಿಸಿ ಎಸ್‌ಡಿಪಿಐನ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್ ಅವರು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು, “ರಾಜ್ಯ ಸರ್ಕಾರವು ಯಾವುದೇ ಮಾಹಿತಿ ನೀಡದೇ ರಾಜ್ಯದ ಹಲವು ಕಡೆ ಎಸ್‌ಡಿಪಿಐ ಕಚೇರಿಗಳು ಹಾಗೂ ಚುನಾಯಿತ ಕಾರ್ಪೊರೇಟರ್‌ಗಳ ಕಚೇರಿಗಳಿಗೆ ಬೀಗ ಹಾಕಿದ್ದಾರೆ. ಎಸ್‌ಡಿಪಿಐನ ಜನಪ್ರತಿನಿಧಿಗಳಿಗೆ ರಾಜಕೀಯ ಚಟುವಟಿಕೆ ನಡೆಸಲು ಕಚೇರಿಯ ಅಗತ್ಯವಿದೆ. ಆದ್ದರಿಂದ, ರಾಜ್ಯ ಸರ್ಕಾರವು ಜಪ್ತಿ ಮಾಡಿರುವ ಕಚೇರಿಗಳನ್ನು ತೆರವು ಮಾಡುವಂತೆ ಜಿಲ್ಲಾಧಿಕಾರಿಗೆ ಸೂಚಿಸಬೇಕು” ಎಂದು ಮನವಿ ಮಾಡಿದರು.
ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅರುಣ್ ಶ್ಯಾಮ್, “ರಾಜ್ಯದ ಕೆಲವು ಎಸ್‌ಡಿಪಿಐ ಕಚೇರಿಗಳನ್ನು ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಮತ್ತು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್‌ಐ) ಸಂಘಟನೆಗಳ ಚಟುವಟಿಕೆಗಳಿಗೆ ಬಳಸಿಕೊಳ್ಳಲಾಗುತ್ತಿತ್ತು ಎಂಬ ಬಗ್ಗೆ ಖಚಿತ ಮಾಹಿತಿ ಇತ್ತು. ಇದನ್ನು ಆಧರಿಸಿದ ಜಿಲ್ಲಾಧಿಕಾರಿಗಳು ಮಾಹಿತಿ ತರಿಸಿಕೊಂಡು ಪರೀಶಿಲಿಸಿದ್ದರು. ಅಕ್ರಮ ಚಟುವಟಿಕೆ ನಡೆಯುತ್ತಿದ್ದ ಬಗ್ಗೆ ದೃಢಪಡಿಸಿಕೊಂಡ ನಂತರ ಕಚೇರಿಗಳ ಮೇಲೆ ದಾಳಿ ಮಾಡಿದ್ದಾರೆ” ಎಂದು ರಾಜ್ಯ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡರು.
ಈ ಸುದ್ದಿ ಓದಿದ್ದೀರಾ? : ಕೇಂದ್ರ ಸಚಿವ ಅನುರಾಗ್ ಠಾಕೂರ್ ವಿರುದ್ಧ ಎಫ್‌ಐಆರ್ ರದ್ದು; ದೆಹಲಿ ಪೊಲೀಸ್ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್
ಕೇಂದ್ರ ಸರ್ಕಾರದ ಪರ ವಾದಿ ಮಂಡಿಸಿದ ಸಹಾಯಕ ಸಾಲಿಸಿಟರ್ ಜರನಲ್ ಎಚ್ ಶಾಂತಿಭೂಷಣ್, “ಕೇಂದ್ರ ಸರ್ಕಾರವು ಪಿಎಫ್‌ಐ ಸಂಘಟನೆಯನ್ನು ನಿಷೇಧಿಸಿದೆ. ಇದರ ಆಧಾರದ ಮೇಲೆ ರಾಜ್ಯ ಸರ್ಕಾರವು ತನ್ನ ಗುಪ್ತಚರ ಮಾಹಿತಿಯನ್ನು ಆಧರಿಸಿ ಎಸ್‌ಡಿಪಿಐ ಕಚೇರಿಗಳಲ್ಲಿ ನಿಷೇಧಿತ ಪಿಎಫ್‌ಐ ಸಂಘಟನೆಯ ಚಟುವಟಿಕೆ ನಡೆಯುತ್ತಿರುವುದನ್ನು ಗಮನಿಸಿ, ಕಾನೂನು ರೀತಿಯ ಕ್ರಮ ಜರುಗಿಸಿದೆ” ಎಂದರು.
ಅರ್ಜಿದಾರರು ಒಂದು ವೇಳೆ ಜಿಲ್ಲಾಡಳಿತದ ಕ್ರಮ ಪ್ರಶ್ನಿಸಬೇಕೆಂದಿದ್ದರೆ, ಅದನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಪ್ರಶ್ನಿಸಬಹುದು ಎಂದು ಹೇಳಿದರು.
ಮೂರು ಕಡೆಯ ವಾದಗಳನ್ನು ಆಲಿಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠವು ಆದೇಶವನ್ನು ಕಾಯ್ದಿರಿಸಿದೆ.