ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ನಡೆಸಿದ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಹೊಂದಿಕೊಂಡ ಕ್ರಿಮಿನಲ್ ಪ್ರಕರಣದಲ್ಲಿ ಸಂತ್ರಸ್ತೆಯೊಬ್ಬರ ಅಪಹರಣದ ಪ್ರತ್ಯೇಕ ಎಫ್ಐಆರ್‌ಗೆ ಸಂಬಂಧಿಸಿದಂತೆ ಹೊಳೆನರಸೀಪುರ ಶಾಸಕ ಎಚ್ ಡಿ ರೇವಣ್ಣ ಅವರಿಗೆ ಜಾಮೀನು ನೀಡಲು ನ್ಯಾಯಾಲಯವು ನಿರಾಕರಿಸಿದೆ.
ಜಾಮೀನು ನಿರಾಕರಣೆಯ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡದ ಅಧಿಕಾರಿಗಳು ಇಂದು ಸಂಜೆಯೇ ಎಚ್ ಡಿ ರೇವಣ್ಣ ಅವರನ್ನು ಬಂಧಿಸುವ ಸಾಧ್ಯತೆಗಳಿವೆ.
ಎಚ್ ಡಿ ರೇವಣ್ಣ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನಿರಾಕರಿಸಿದ ವಿಶೇಷ ನ್ಯಾಯಾಲಯ.#HDRevanna #AnticipatoryBail
— ಬಾರ್ & ಬೆಂಚ್ – Kannada Bar & Bench (@Kbarandbench) May 4, 2024
ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್, ಜಾಮೀನು ನೀಡಲು ನಿರಾಕರಿಸಿದ್ದಾರೆ. ಅರ್ಜಿಯ ಮುಂದಿನ ವಿಚಾರಣೆಯನ್ನು ಮೇ 6ಕ್ಕೆ ಅರ್ಜಿಯನ್ನು ಮುಂದೂಡಿದ್ದಾರೆ.
“ಸಂತ್ರಸ್ತೆಯೊಬ್ಬರ ಅಪಹರಣದ ಪ್ರತ್ಯೇಕ ಎಫ್ಐಆರ್‌ಗೆ ಸಂಬಂಧಿಸಿದಂತೆ ಹೊಳೆನರಸೀಪುರ ಶಾಸಕ ಎಚ್ ಡಿ ರೇವಣ್ಣ ಅವರನ್ನು ಬಂಧಿಸದಂತೆ ರಕ್ಷಣೆ ನೀಡಿದರೆ ಇಂದೇ ಎಸ್ಐಟಿ ಮುಂದೆ ಹಾಜರಾಗುತ್ತಾರೆ” ಎಂದು ಅವರ ಪರ ವಕೀಲರು ನ್ಯಾಯಾಲಯಕ್ಕೆ ಭರವಸೆ ನೀಡಿದ್ದರು. ಆದರೆ ಈ ಮನವಿಯನ್ನು ಪುರಸ್ಕರಿಸದ ನ್ಯಾಯಾಲಯವು, ಜಾಮೀನು ನೀಡಲು ನಿರಾಕರಿಸಿದೆ.
ರೇವಣ್ಣ ಪರವಾಗಿ ಹಿರಿಯ ವಕೀಲ ಮೂರ್ತಿ ಡಿ. ನಾಯ್ಕ್ ಹಾಗೂ ವಿಶೇಷ ತನಿಖಾ ತಂಡದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಬಿ ಎನ್ ಜಗದೀಶ್ ವಾದ ಮಂಡನೆ ಮಾಡಿದ್ದರು.
ಸುಮಾರು ಒಂದೂವರೆ ತಾಸು ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಆದೇಶ ಕಾಯ್ದಿರಿಸಿ, ಸುಮಾರು ಎರಡು ತಾಸುಗಳ ಬಳಿಕ ರೇವಣ್ಣ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.
