ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಆ ಮೂಲಕ, ಚುನಾವಣಾ ರಾಜಕೀಯಕ್ಕೆ ಗುಡ್‌ಬೈ ಹೇಳಿದ್ದಾರೆ. ರಾಜಕೀಯದಲ್ಲಿ ಸಕ್ರಿಯವಾಗಿರುವುದಾಗಿ ತಿಳಿಸಿದ್ದಾರೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “2028ರ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಆದರೆ, ಸಕ್ರಿಯ ರಾಜಕಾರಣದಿಂದ ದೂರವಾಗುವುದಿಲ್ಲ. ಜನರ ಪರವಾಗಿ, ಅವರ ಕಷ್ಟ-ಸುಖಗಳಿಗೆ ಧ್ವನಿಯಾಗಿ ಕೆಲಸ ಮುಂದುವರಿಸುತ್ತೇನೆ” ಎಂದು ಹೇಳಿದ್ದಾರೆ.
ರಾಜಕೀಯ ವ್ಯವಸ್ಥೆಯಲ್ಲಿ ಹಣದ ಪ್ರಭಾವ ಹೆಚ್ಚುತ್ತಿರುವುದರ ಬಗ್ಗೆ ಬೇಸರ ವ್ಯಕ್ತಪಡಿಸಿದ ಅವರು, “ಈ ಹಿಂದೆ ಚುನಾವಣೆಗೆ ನಿಲ್ಲುತ್ತಿದ್ದಾಗ ಕ್ಷೇತ್ರದ ಜನರೇ ತಮ್ಮ ಹಣದಿಂದ ನಮ್ಮನ್ನು ಗೆಲ್ಲಿಸುತ್ತಿದ್ದರು. ಈಗ ಪರಿಸ್ಥಿತಿ ಸಂಪೂರ್ಣ ಬದಲಾಗಿದೆ. ರಾಜಕೀಯ ಇಂದು ಕಲುಷಿತಗೊಂಡಿದೆ” ಎಂದಿದ್ದಾರೆ.
“ವರುಣ ಕ್ಷೇತ್ರದ ಜನರು ಮತ್ತೊಮ್ಮೆ ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ. ಆದರೆ, ಇನ್ನು ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂಬ ನಿರ್ಧಾರಕ್ಕೆ ಬಂದಿದ್ದೇನೆ” ಎಂದು ಸ್ಪಷ್ಟಪಡಿಸಿದ್ದಾರೆ.
ಫೇಸ್‌ಬುಕ್‌ನಲ್ಲಿಯೂ ಪೋಸ್ಟ್ ಹಂಚಿಕೊಂಡಿರುವ ಸಿದ್ದರಾಮಯ್ಯ, “ಈಗ ನನಗೆ 79 ವರ್ಷ. ನಮ್ಮ ಸರ್ಕಾರದ ಅವಧಿ ಇನ್ನು ಒಂದೂವರೆ ವರ್ಷ ಇದೆ. ಆಗ ನನಗೆ 81-82 ವರ್ಷವಾಗಿರುತ್ತದೆ. ಈಗಿನಂತೆ ಆರೋಗ್ಯವೂ ಸದೃಢವಾಗಿ ಇರುವುದಿಲ್ಲ. ಹಿಂದಿನಂತೆ ಉತ್ಸಾಹದಿಂದ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ. 2028ರ ವೇಳೆಗೆ ನನಗೆ 82 ವರ್ಷವಾಗಿರುತ್ತದೆ. ಆಗ ನನ್ನ ರಾಜಕೀಯ ಜೀವನಕ್ಕೆ 50 ವರ್ಷಗಳು ಪೂರ್ಣಗೊಳ್ಳುತ್ತದೆ. 1978ರಲ್ಲಿ ನಾನು ತಾಲೂಕು ಮಂಡಳಿ ಸದಸ್ಯನಾಗಿ ರಾಜಕೀಯ ಜೀವನ ಆರಂಭಿಸಿದ್ದೆ. ಸೋಲು – ಗೆಲುವು ಎಲ್ಲವನ್ನೂ ಕಂಡಿದ್ದೇನೆ. ಆದರೆ ನಂಬಿದ ಸಿದ್ಧಾಂತಕ್ಕೆ ವಿರುದ್ಧವಾಗಿ ನಡೆದಿಲ್ಲ, ಆತ್ಮಸಾಕ್ಷಿಗೆ ದ್ರೋಹ ಬಗೆದಿಲ್ಲ ಎನ್ನುವ ಸಂತೃಪ್ತಿ ನನಗಿದೆ” ಎಂದು ಬರೆದಿದ್ದಾರೆ.
ಇತ್ತೀಚೆಗೆ ಮುಖ್ಯಮಂತ್ರಿ ಹುದ್ದೆಯಿಂದ ನಿರ್ಗಮಿಸಿದ್ದ ಸಿದ್ದರಾಮಯ್ಯ, ಕರ್ನಾಟಕದ ಸುದೀರ್ಘ ಅವಧಿಯ ಮುಖ್ಯಮಂತ್ರಿಗಳಲ್ಲಿ ಒಬ್ಬರಾಗಿ ದಾಖಲೆ ನಿರ್ಮಿಸಿದ್ದರು. ಈಗ ಚುನಾವಣಾ ರಾಜಕೀಯದಿಂದ ಹಿಂದೆ ಸರಿದಿದ್ದಾರೆ.
ಸಿದ್ದರಾಮಯ್ಯ ಅವರ ಈ ಘೋಷಣೆ ಕಾಂಗ್ರೆಸ್‌ನ ಮುಂದಿನ ನಾಯಕತ್ವ, ಉತ್ತರಾಧಿಕಾರ ರಾಜಕೀಯ ಹಾಗೂ 2028ರ ವಿಧಾನಸಭಾ ಚುನಾವಣೆಯ ಸಮೀಕರಣಗಳ ಕುರಿತು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.





