ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಹೊತ್ತಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ ಬಂಧನ ಭೀತಿ ಎದುರಾಗಿದ್ದು, ಪ್ರಜ್ವಲ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ಬುಧವಾರ ತಿರಸ್ಕರಿಸಿದೆ. ಈ ಹಿನ್ನೆಲೆಯಲ್ಲಿ ವಿದೇಶದಿಂದ ಬಂದ ಕೂಡಲೇ, ಎಸ್‌ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸುವ ಸಾಧ್ಯತೆ ಇದೆ.
ಅತ್ಯಾಚಾರ ಸೇರಿದಂತೆ ಹಲವು ಪ್ರಕರಣದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ವಿಶೇಷ ನ್ಯಾಯಾಲಯ ಬುಧವಾರ ತಿರಸ್ಕರಿಸಿದೆ. ಚುನಾಯಿತ ಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಪ್ರಜ್ವಲ್ ಪರ ವಕೀಲ ಅರುಣ್ ಸಲ್ಲಿಸಿದ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ಮೇ 30 ರಂದು ಮ್ಯೂನಿಚ್‌ನಿಂದ ಬೆಂಗಳೂರಿಗೆ ಹಿಂತಿರುಗಲಿದ್ದಾರೆ ಎಂದು ಹೇಳಲಾಗಿದ್ದು, ಈಗಾಗಲೇ ಪ್ರಜ್ವಲ್ ವಿಮಾನ ಟಿಕೆಟ್ ಕೂಡ ಬುಕ್ ಮಾಡಿದ್ದಾರೆ ಎಂದು ಹೇಳಲಾಗಿದೆ. ಮೇ 31 ರಂದು ಅವರು ನಗರಕ್ಕೆ ಬಂದಿಳಿಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಹೀಗಾಗಿ, ಇದೀಗ ಎಲ್ಲರ ಚಿತ್ತ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದತ್ತ ನೆಟ್ಟಿದ್ದು, ಪ್ರಜ್ವಲ್ ರೇವಣ್ಣರನ್ನು ವಿಮಾನ ನಿಲ್ದಾಣದಲ್ಲೇ ಬಂಧಿಸಲು ಎಸ್ ಐಟಿ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆಯ ಮತದಾನ ನಡೆದ ಏಪ್ರಿಲ್ 27ರಂದೇ ಪ್ರಜ್ವಲ್ ಮತದಾನ ಮಾಡಿ ವಿದೇಶಕ್ಕೆ ಹಾರಿದ್ದರು. ಬಳಿಕ ಅವರದ್ದು ಎಂದು ಹೇಳಲಾದ ಸೆಕ್ಸ್ ಹಗರಣದ ವಿಡಿಯೋಗಳು ಭಾರೀ ಸದ್ದು ಮಾಡಿದ್ದವು. ಇದೇ ಪ್ರಕರಣದಲ್ಲಿ ಪ್ರಜ್ವಲ್ ತಂದೆ ಎಚ್ ಡಿ ರೇವಣ್ಣ ಕೂಡ ಬಂಧನಕ್ಕೀಡಾಗಿ ಬಳಿಕ ಜಾಮೀನಿನ ಮೇಲೆ ಹೊರಬಂದಿದ್ದಾರೆ.
ಇದನ್ನು ಓದಿದ್ದೀರಾ? ಪಶ್ಚಿಮ ಬಂಗಾಳ ಸೇರಿ ಮೂರು ರಾಜ್ಯಗಳಲ್ಲಿ ಸಿಎಎ ಅಡಿಯಲ್ಲಿ ಪೌರತ್ವ ಆರಂಭ: ಗೃಹ ಸಚಿವಾಲಯ
ಅಪಹರಣ ಪ್ರಕರಣದಲ್ಲಿ ಅವರ ರೇವಣ್ಣ ಪತ್ನಿ ಭವಾನಿ ರೇವಣ್ಣಗೂ ಬಂಧನ ಭೀತಿ ಇದ್ದು 31ರಂದು ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಅಂದೇ ಪ್ರಜ್ವಲ್ ಕೂಡ ನಗರಕ್ಕೆ ಆಗಮಿಸುವ ಸಾಧ್ಯತೆ ಇದೆ. ಮೇ 18 ರಂದು, ಎಸ್‌ಐಟಿ ಸಲ್ಲಿಸಿದ ಅರ್ಜಿಯ ಮೇರೆಗೆ ಚುನಾಯಿತ ಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಪ್ರಜ್ವಲ್ ರೇವಣ್ಣ ವಿರುದ್ಧ ಬಂಧನ ವಾರಂಟ್ ಹೊರಡಿಸಿತ್ತು. ಈಗಾಗಲೇ ಅವರನ್ನು ಜೆಡಿಎಸ್ ಪಕ್ಷದಿಂದ ಅಮಾನತು ಮಾಡಲಾಗಿದೆ.
