ಬಿಜೆಪಿಯ ಗೂಂಡಾಗಳ ಜೊತೆ ಶಾಮೀಲಾಗಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಸುವ ಅಧಿಕಾರಿಗಳು ಇರುವಾಗ ನ್ಯಾಯಯುತ ಮತದಾನ ನಡೆಯಲು ಸಾಧ್ಯವೇ? ಎಂದು ಕಾಂಗ್ರೆಸ್ ಕಿಡಿ ಕಾರಿದೆ.
ರಾಜ ರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಕುಸುಮಾ ಹನಮಂತರಾಯಪ್ಪ ಅವರನ್ನು ತಳ್ಳಿರುವ ವಿಚಾರಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಕಾಂಗ್ರೆಸ್, “ಪ್ರಚಾರ ಕಣದಲ್ಲಿದ್ದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಮತ್ತು ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ ಪೊಲೀಸ್ ಅಧಿಕಾರಿಯನ್ನು ಕೂಡಲೇ ವಜಾ ಮಾಡಬೇಕು” ಎಂದು ಆಗ್ರಹಿಸಿದೆ.
ರಾಜ ರಾಜೇಶ್ವರಿ ನಗರ ವಿಧಾನಸಭಾ ಸಭಾ ಕ್ಷೇತ್ರದಲ್ಲಿ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಶನಿವಾರ ಗಲಾಟೆ ನಡೆದಿದೆ. ಯಶವಂತಪುರ ವಾರ್ಡ್‌ನಲ್ಲಿ ಪ್ರಚಾರದ ಸಂದರ್ಭದಲ್ಲಿ ಎರಡು ಪಕ್ಷದ ಕಾರ್ಯಕರ್ತರು ಮುಖಾಮುಖಿಯಾಗಿದ್ದಾರು.
ಈ ಸಂದರ್ಭದಲ್ಲಿ ಮಾತಿನ ಚಕಮಕಿ ನಡೆದಿದ್ದು, ಒಬ್ಬರ ಮೇಲೆ ಮತ್ತೊಬ್ಬರು ಕೈ ಕೈ ಮಿಲಾಯಿಸಲು ಮುಂದಾಗಿದ್ದಾರೆ. ಈ ವೇಳೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರನ್ನು ಪೊಲೀಸ್ ಅಧಿಕಾರಿಯೊಬ್ಬರು ತಳ್ಳಿ, ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ಮಾಡಿದ್ದರು. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.