ಕೊರೋನಾ ಕಾಲದಲ್ಲಿ ಬಿಜೆಪಿ ಸರ್ಕಾರ ನಡೆಸಿದ ಅವ್ಯವಹಾರಗಳ ಕುರಿತು ತನಿಖೆ ನಡೆಸುತ್ತಿರುವ ಆಯೋಗದ ಮುಖ್ಯಸ್ಥ ನ್ಯಾ. ಮೈಕಲ್ ಡಿ ಕುನ್ಹಾ ಅವರ ಬಗ್ಗೆ ನಿಂದನಾತ್ಮಕ ಹೇಳಿಕೆ ನೀಡಿರುವ ಕೇಂದ್ರ ಸಚಿವ ಪ್ರಲ್ಹಾದ್ ವಿರುದ್ಧ ಕ್ರಮಕ್ಕೆ ರಾಷ್ಟ್ರಪತಿಗೆ ಶಿಫಾರಸು ಮಾಡಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮತ್ತು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಿದರು.
“ನೀವು ನ್ಯಾಯಾಧೀಶರು, ಸರ್ಕಾರದ ಏಜೆಂಟ್ ಅಲ್ಲ” ಎಂದು ನ್ಯಾ ಡಿ ಕುನ್ಹಾ ಅವರ ಬಗ್ಗೆ ಪ್ರಲ್ಹಾದ್ ಜೋಶಿ ಹೇಳಿದ್ದರು. ಮುಡಾ ವಿಚಾರದಲ್ಲಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ರದ್ದು ಕೋರಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ್ದ ಹೈಕೋರ್ಟ್‌ನ ನಡೆಯನ್ನು ರಾಜಕೀಯ ಪ್ರೇರಿತ ಎಂದು ಸಚಿವ ಜಮೀರ್ ಅಹಮದ್ ಖಾನ್ ನೀಡಿದ್ದ ಹೇಳಿಕೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನಿನ್ನೆಯಷ್ಟೇ ರಾಜ್ಯಪಾಲರು ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ. ಆ ಬೆನ್ನಲ್ಲೇ ಇಬ್ಬರು ಸಚಿವರು ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ.
ರಾಜ್ಯಪಾಲರ ಭೇಟಿ ಬಳಿಕ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, “ಪ್ರಲ್ಹಾದ್ ಜೋಶಿ ಹೇಳಿಕೆ ಖಂಡಿಸಿ ಕ್ರಮಕ್ಕೆ ಒತ್ತಾಯಿಸಿ ದೂರು ನೀಡಿದ್ದೇವೆ. ನ್ಯಾಯಾಂಗ ತನಿಖಾ ಆಯೋಗದ ಬಗ್ಗೆ ಹಾಗೂ ನಿವೃತ್ತ ನ್ಯಾಯಾಧೀಶರ ಬಗ್ಗೆ ನಿಂದಿಸಿ ಕೆಟ್ಟದಾಗಿ ಮಾತನಾಡಿದ್ದಾರೆ. ಇದು ಅಹಂಕಾರದ ಪರಮಾವಧಿ” ಎಂದು ವಾಗ್ದಾಳಿ ನಡೆಸಿದರು.
“ಮೈಕಲ್ ಡಿ ಕುನ್ಹಾ ನ್ಯಾಯಾಧೀಶರಲ್ಲ, ಬದಲಾಗಿ ರಾಜಕೀಯ ಏಜೆಂಟ್” ಎಂದು ಜೋಶಿ ಹೇಳಿದ್ದಾರೆ. ವರದಿ ದುರುದ್ದೇಶದಿಂದ ಹಾಗೂ ಚುನಾವಣಾ ದೃಷ್ಟಿಯಿಂದ ನೀಡಿದ್ದಾರೆ ಎಂದೂ ಆರೋಪ ಮಾಡಿದ್ದಾರೆ. ಇಂತಹ ಹೇಳಿಕೆ ಘೋರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರಲ್ಹಾದ್ ಜೋಶಿ ಸಾಮಾನ್ಯ ವ್ಯಕ್ತಿಯಲ್ಲ, ಅವರು ಕೇಂದ್ರ ಸಚಿವರು. ಸಂವಿಧಾನದಲ್ಲಿ ಸ್ವಾಯತ್ತ ಸಂಸ್ಥೆಗಳು, ಆಯೋಗಗಳ ಬಗ್ಗೆ ವೈಯುಕ್ತಿಕ ಟೀಕೆ ಸರಿಯಲ್ಲ. ಇದು ಪ್ರಜಾಪ್ರಭುತ್ವ ಮೌಲ್ಯಗಳಿಗೆ ವಿರುದ್ದ, ಕಾನೂನುಬಾಹಿರವಾಗಿದೆ ಎಂದರು.
ನ್ಯಾಯಾಲಯದ ತೀರ್ಪಿಗೆ ಪ್ರತಿಕ್ರಿಯಿಸಬಹುದು. ಆದರೆ ನ್ಯಾಯಾಧೀಶರ ಬಗ್ಗೆ ಟೀಕಿಸಬಾರದು. ಡಿ ಕುನ್ಹಾ ಅವರು ಆಗಸ್ಟ್‌ನಲ್ಲಿ ಮಧ್ಯಂತರ ವರದಿ ಕೊಟ್ಟಿದ್ದಾರೆ. ಈಗ ಉಪಚುನಾವಣೆ ನಡೆಯುತ್ತಿದೆ. ಅದಕ್ಕೂ ಚುನಾವಣೆಗೂ ಏನು ಸಂಬಂಧ? ಎಂದು ಪ್ರಶ್ನಿಸಿದರು.
ನ್ಯಾಯಾಧೀಶರನ್ನು ನಿಂದನೆ ಮಾಡುವುದು, ಅವರ ಗೌರವಕ್ಕೆ ಚ್ಯುತಿ ಬರುವ ಹೇಳಿಕೆ ನೀಡುವುದು ಒತ್ತಡ ಹೇರುವ ಕೆಲಸ. ತನಿಖಾ ಹಂತದಲ್ಲಿ ಯಾರೂ ಈ ರೀತಿ ಮಾತನಾಡಬಾರದು. ಇಂತಹ ಅಂಶಗಳನ್ನು ರಾಜ್ಯಪಾಲರಿಗೆ ವಿವರಿಸಿ ಕ್ರಮಕ್ಕೆ ಒತ್ತಾಯಿಸಿದ್ದೇವೆ. ನ್ಯಾಯಾಧೀಶರ ಮಾನಹರಣ ಮಾಡಿದ ಪ್ರಲ್ಹಾದ ಜೋಶಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದೇವೆ ಎಂದರು.
ಜಮೀರ್ ಅಹಮದ್ ಖಾನ್ ಹೇಳಿಕೆ ಸರಿಯಲ್ಲ. ಅವರ ವಿರುದ್ಧ ಕ್ರಮಕ್ಕೆ ರಾಜ್ಯಪಾಲರು ಸೂಚಿಸಿದ್ದಾರೆ. ಅದೇ ರೀತಿ ಪ್ರಲ್ಹಾದ್ ಜೋಶಿಯ ಅವರ ವಿರುದ್ಧವೂ ಕ್ರಮಕ್ಕೆ ಶಿಫಾರಸು ಮಾಡಲಿ ಎಂದು ದಿನೇಶ್ ಹೇಳಿದರು.
ನ್ಯಾಯಾಧೀಶರ ವಿರುದ್ಧ ಬೇಜವಾಬ್ದಾರಿ ಹೇಳಿಕೆ ನೀಡಿರುವುದು ಅಕ್ಷಮ್ಯ. ಈ ಕೂಡಲೇ ಜೋಶಿಯವರು ನ್ಯಾ ಡಿ ಕುನ್ಹಾ ಅವರ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದರು.
