ಹಲಗೆವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಈ ಹಿಂದೆ ಈ ಪ್ರಕರಣದಲ್ಲಿ ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಸಿತ್ತು. ಆದರೆ ಹೈಕೋರ್ಟ್ ಅದನ್ನು ರದ್ದುಗೊಳಿಸಿತ್ತು. ಹೈಕೋರ್ಟ್ ತೀರ್ಪು ಪ್ರಶ್ನಿಸಿ ಕುಮಾರಸ್ವಾಮಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು, ಈಗ ದೇಶದ ಉನ್ನತ ನ್ಯಾಯಾಲಯ ಕೂಡಾ ಅರ್ಜಿ ತಿರಸ್ಕರಿಸಿದೆ.
ಇದನ್ನು ಓದಿದ್ದೀರಾ? ಕುಮಾರಸ್ವಾಮಿ ಭೂ ಕಬಳಿಕೆ ಪ್ರಕರಣ | ಹೈಕೋರ್ಟ್ ಚಾಟಿಗೆ ಎಚ್ಚೆತ್ತ ಸರ್ಕಾರ, ತನಿಖೆಗೆ ಎಸ್‌ಐಟಿ ರಚನೆ
ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದರು. ಆದರೆ ದೂರುದಾರರು ಈ ವರದಿ ಪ್ರಶ್ನಿಸಿದ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಕೋರ್ಟ್, ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ತಿರಸ್ಕರಿಸಿ ವಿಚಾರಣೆಯನ್ನು ಕೈಗೆತ್ತಿಕೊಂಡಿತ್ತು.
ಇದನ್ನು ಪ್ರಶ್ನಿಸಿ ಕುಮಾರಸ್ವಾಮಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಈಗ ಎಚ್‌ಡಿಕೆ ಅರ್ಜಿಯನ್ನು ಸುಪ್ರೀಂ ಕೋರ್ಟ್ ಕೂಡಾ ವಜಾಗೊಳಿಸಿದೆ.
ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬನಶಂಕರಿ ಬಳಿಯ ಹಲಗೆವಡೇರಹಳ್ಳಿ ಸರ್ವೆ ನಂ. 128, 137ರಲ್ಲಿನ 2 ಎಕರೆ 24 ಗುಂಟೆ ಜಮೀನನ್ನು ಕಾನೂನು ಬಾಹಿರವಾಗಿ ಡಿನೋಟಿಫಿಕೇಷನ್ ಮಾಡಿದ ಆರೋಪವಿದೆ.
2012ರಲ್ಲಿ ಮಹದೇವಸ್ವಾಮಿ ಎಂಬವರು ಈ ಆರೋಪವನ್ನು ಮಾಡಿದ್ದು, ದಾಖಲೆ ಸಮೇತವಾಗಿ ಖಾಸಗಿ ದೂರು ನೀಡಿದ್ದರು. ಎಚ್‌ಡಿಕೆ ಜೊತೆಗೆ ಇನ್ನೂ ಹಲವು ಮಂದಿಯ, ಹಲವು ಬಿಲ್ಡರ್ಸ್‌ಗಳ ವಿರುದ್ಧ ಈ ಪ್ರಕರಣದಲ್ಲಿ ದೂರು ದಾಖಲಾಗಿದೆ.
ಇದನ್ನು ಓದಿದ್ದೀರಾ? 25ರಲ್ಲೇ 45 ಎಕರೆ ಜಮೀನು ಖರೀದಿಸಿದ್ದರಂತೆ ಕುಮಾರಸ್ವಾಮಿ, ನಿಜವೇ ಗೌಡ್ರೇ?
ಕುಮಾರಸ್ವಾಮಿ ವಿರುದ್ಧ ಈಗಾಗಲೇ ಹಲವು ಭೂ ಅಕ್ರಮಗಳ ಬಗ್ಗೆ ತನಿಖೆ ನಡೆಯುತ್ತಿದೆ. ಈಗಾಗಲೇ ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಸರ್ಕಾರಿ ಜಮೀನುಗಳನ್ನು ಕಬಳಿಸಿರುವ ಪ್ರಕರಣ ಮತ್ತಷ್ಟು ಬಿಗಿಯಾಗಿದೆ. ಹೈಕೋರ್ಟ್ ಚಾಟಿ ಬೀಸಿದ ಬಳಿಕ ಸರ್ಕಾರ ಎಸ್‌ಐಟಿ ರಚಿಸಿದೆ.
ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹಾಗೂ ಅವರ ಸಂಬಂಧಿಕರು ರಾಮನಗರ ಜಿಲ್ಲೆ ಬಿಡದಿ ಹೋಬಳಿ ಕೇತಗಾನಹಳ್ಳಿಯಲ್ಲಿ ವಿವಿಧ ಸರ್ವೆ ನಂಬರ್‌ಗಳಲ್ಲಿ ಇವರೆಲ್ಲರೂ 110.32 ಎಕರೆ ಪೈಕಿ ಸುಮಾರು 54 ಎಕರೆಯಷ್ಟು ಭೂಮಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಮಾಜಿ ಸಂಸದ ದಿವಂಗತ ಜಿ. ಮಾದೇಗೌಡರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.
