ದಕ್ಷಿಣ ಕನ್ನಡ ಜಿಲ್ಲೆಯ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ಗೆ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪುವ ಸಾಧ್ಯತೆ ಅವರ ಮಾತಿನಲ್ಲೇ ವ್ಯಕ್ತವಾಗಿದೆ.
ಮಂಗಳೂರಿನಲ್ಲಿ ಭಾವುಕರಾಗಿ ಮಾತನಾಡಿದ ಕಟೀಲ್, “ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸುವುದು ನಮ್ಮ ಪಕ್ಷದ ವಿಶೇಷತೆ. ಪಕ್ಷದ ರಾಷ್ಟ್ರೀಯ ನಾಯಕರು ಎಲ್ಲ ಯೋಚನೆ ಮಾಡಿ ಆಯ್ಕೆ ಮಾಡುತ್ತಾರೆ. ಅವರ ಆಯ್ಕೆಯನ್ನು ನಾನು ಸ್ವಾಗತಿಸುತ್ತೇನೆ” ಎಂದಿದ್ದಾರೆ.
“ನನಗೆ ಮೂರು ಬಾರಿ ಅವಕಾಶ ನೀಡಿದ್ದಾರೆ. ಪಕ್ಷ ನಿಂತ ನೀರಾಗಬಾರದು, ಹೊಸಬರು ಬರ್ತಾ ಇರಬೇಕು. ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ. ಪಕ್ಷ ಕಸ ಗುಡಿಸಿ ಎಂದರೂ ಗುಡಿಸುತ್ತೇನೆ” ಎಂದು ಹೇಳಿದ್ದಾರೆ.
“ಯಾರೇ ಅಭ್ಯರ್ಥಿಯಾದರೂ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕೆಂಬುದು ನಮ್ಮ ಗುರಿ. ರಾಷ್ಟ್ರೀಯ ನಾಯಕರ ಯೋಚನೆಗಳಿಗೆ ಬದ್ಧರಾಗಿ ಕೆಲಸ ಮಾಡುವವರು ನಾವು. ಪಕ್ಷ ಏನೇ ಹೇಳಿದರೂ ಮಾಡುತ್ತೇವೆ. ನಮಗೆ ಅಧಿಕಾರವೇ ಮುಖ್ಯವಲ್ಲ” ಎಂದು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾರ್ಯಕರ್ತರನ್ನು ಕಡೆಗಣಿಸಿದ ಬಿಜೆಪಿ ‘ಗೋ ಬ್ಯಾಕ್’ ಘೋಷಣೆಗೆ ಬೆಚ್ಚಿತೇ?
ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಮಾತನಾಡಿರುವುದನ್ನು ಗಮನಿಸಿದ್ದೇನೆ. ರಾಷ್ಟ್ರೀಯ ನಾಯಕರು ಯಾವ ತೀರ್ಮಾನ ತಗೆದುಕೊಂಡರೂ ಅದು ಪಾರ್ಟಿಯ ತೀರ್ಮಾನ. ಆ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರುತ್ತೇವೆ” ಎಂದಿದ್ದಾರೆ.
“ಬಿಜೆಪಿಯಲ್ಲಿ ಯಾರನ್ನೂ ತುಳಿಯುವುದಿಲ್ಲ. ಅವಕಾಶ ಸಿಕ್ಕಾಗ ನನಗೆ ನ್ಯಾಯ ಸಿಕ್ಕಿದೆ. ಅವಕಾಶ ಸಿಕ್ಕಿಲ್ಲ ಅಂದಾಗ ಅನ್ಯಾಯ ಆಗಿದೆ ಎಂದು ಹೇಳುವ ಹಕ್ಕು ನಮಗಿಲ್ಲ. ಎಲ್ಲರನ್ನೂ ಪಾರ್ಟಿ ಬೆಳೆಸಿದೆ. ಟಿಕೆಟ್ ಸಿಕ್ಕಿಲ್ಲ ಎಂದ ಕೂಡಲೇ ಅಂಥವರನ್ನು ಕೈಬಿಟ್ಟಿದೆ” ಎಂದು ಅರ್ಥವಿಲ್ಲ” ಎಂದು ಕಟೀಲ್ ಸಮರ್ಥಿಸಿಕೊಂಡಿದ್ದಾರೆ.
