- ರಾಜ್ಯದ 16 ಜಿಲ್ಲೆಗಳಲ್ಲಿ ನೀರಿನ ಕೊರತೆಯುಂಟಾಗಿರುವ ಹಿನ್ನೆಲೆಯಲ್ಲಿ ಸಭೆ
- ತಾಲೂಕುಗಳಿಗೆ ಪ್ರವಾಸ ಕೈಗೊಳ್ಳಲು ಸಿಇಓಗಳಿಗೆ ನಿರ್ದೇಶನ ನೀಡಿದ ಸಚಿವರು
ರಾಜ್ಯದ ಜನರಿಗೆ ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಸಮಸ್ಯೆ ಎದುರಾಗಬಾರದು. ಇದಕ್ಕಾಗಿ ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೆತ್ತಿಕೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಎದುರಾಗಿರುವ ನೀರಿನ ಸಮಸ್ಯೆ ಸಂಬಂಧ ಸಚಿವರು ರಾಜ್ಯದ ಎಲ್ಲ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ, ಚರ್ಚೆ ನಡೆಸಿದರು.
ರಾಜ್ಯದ ಗ್ರಾಮೀಣ ಭಾಗಗಳ ಕೆಲವು ಸ್ಥಳಗಳಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಅರಿತು, ತಕ್ಷಣದ ಪರಿಹಾರ ಕಂಡುಕೊಳ್ಳುವ ಸಲುವಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ತಕ್ಷಣವೇ ತಾಲೂಕು ಪ್ರವಾಸ ಕೈಗೊಳ್ಳಬೇಕೆಂದು ತಿಳಿಸಿದರು.
ರಾಜ್ಯದ 16 ಜಿಲ್ಲೆಗಳಲ್ಲಿ ನೀರಿನ ಕೊರತೆಯುಂಟಾಗಿದೆ. ಇವುಗಳಲ್ಲಿ ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಂತರ್ಜಲ ಮಟ್ಟ ಕುಸಿದಿರುವುದರಂದ ನೀರಿನ ತೀವ್ರ ಕೊರತೆಯಿದೆ ಎಂಬ ವಿಚಾರವನ್ನು ಗ್ರಾಮೀಣಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಸಚಿವರ ಗಮನಕ್ಕೆ ತಂದರು.

ಅಂತರ್ಜಲ ಕುಸಿತದಿಂದ ಬಳಲುತ್ತಿರುವ ಜಿಲ್ಲೆಗಳನ್ನು ಆದ್ಯತೆಯಾಗಿ ಪರಿಗಣಿಸಿ ಕುಡಿಯುವ ನೀರಿನ ವ್ಯವಸ್ಥೆಗೆ ವಿಶೇಷ ಆದ್ಯತೆ ನೀಡಲು ಸಚಿವ ಪ್ರಿಯಾಂಕ್ ಖರ್ಗೆ ನಿರ್ದೇಶಿಸಿದರು.
ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಸಾರ್ವಜನಿಕರು ನೀಡುವ ದೂರುಗಳ ಪರಿಹಾರಕ್ಕೆ ಆದ್ಯತೆ ನೀಡಬೇಕು. ತಾಲೂಕು ಅಧಿಕಾರಿಗಳನ್ನು ದೂರು ನಿರ್ವಹಣೆ ಕಾರ್ಯಕ್ಕೆ ಸಜ್ಜುಗೊಳಿಸಬೇಕು. ನೀರಿನ ಅಭಾವ, ಕಲುಷಿತ ನೀರು ಸರಬರಾಜು ಕುರಿತಂತೆ ಬರುವ ದೂರುಗಳಿಗೆ ಅಧಿಕಾರಿಗಳು ಪ್ರಥಮ ಆದ್ಯತೆ ನೀಡಿ ತಕ್ಷಣದ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ನಿರ್ದೇಶಿಸಿದರು.
ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಲ್ಲಿ ಜಿಲ್ಲಾ ಪಂಚಾಯತಿಗಳಿಗೆ ಹಣಕಾಸು ತೊಂದರೆ ಎದುರಾದಲ್ಲಿ ಅವಶ್ಯವಿರುವ ಹೆಚ್ಚುವರಿ ಅನುದಾನಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲು ಸಚಿವರು ಸೂಚಿಸಿದರು.
ರಾಜ್ಯದ 31 ಜಿಲ್ಲೆಗಳಲ್ಲಿ, 24 ಜಿಲ್ಲೆಗಳ 424 ಗ್ರಾಮಗಳಿಗೆ 365 ಟ್ಯಾಂಕರ್‌ಗಳ ಮೂಲಕ 969 ಟ್ರಿಪ್ ನೀರು ಸರಬರಾಜು ಮಾಡಲಾಗುತ್ತಿದೆ, ಇದರೊಂದಿಗೆ 431 ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆಗೆ ಪಡೆದು, 357 ಗ್ರಾಮಗಳಿಗೆ ನೀರು ಪೂರೈಸಲಾಗುತ್ತಿದೆ ಎಂದು ಸಭೆಯಲ್ಲಿ ಅಧಿಕಾರಿಗಳು, ಸಚಿವರಿಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಶ್ರೀಮತಿ ಉಮಾ ಮಹದೇವನ್, ಕರ್ನಾಟಕ ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆಯ ನಿರ್ದೇಶಕ ಗಂಗಾಧರಸ್ವಾಮಿ, ಮುಖ್ಯ ಅಭಿಯಂತರ ಎಜಾಝ್ ಹುಸೇನ್ ಹಾಗೂ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.