- ತೇಜಸ್ವಿನಿ ಅನಂತಕುಮಾರ್ ಬಿಜೆಪಿ ತೊರೆದು, ಕಾಂಗ್ರೆಸ್ ಸೇರಲಿದ್ದಾರಾ?
- ‘ನನ್ನನ್ನು ಭೇಟಿಯಾಗಿ ರಾಜ್ಯ ರಾಜಕೀಯದ ವಿಚಾರಗಳನ್ನು ಚರ್ಚಿಸಿದ್ದಾರೆ’
ರಾಜ್ಯದಲ್ಲಿ ಆಪರೇಷನ್ ಹಸ್ತ ಚರ್ಚೆ ಗರಿಗೆದರಿದ ನಡುವೆ ಮಾಜಿ ಕೇಂದ್ರ ಸಚಿವ ದಿ. ಅನಂತಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತಕುಮಾರ್ ಅವರು ಸೋಮವಾರ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದು, ರಾಜ್ಯ ರಾಜಕೀಯದಲ್ಲಿ ಕುತೂಹಲ ಕೆರಳಿಸಿದೆ.
ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳುಗಳ ಮುನ್ನ ತೇಜಸ್ವಿನಿ ಅನಂತಕುಮಾರ್ ಅವರು ಡಿಕೆ ಶಿವಕುಮಾರ್ ಅವರನ್ನು ಸೋಮವಾರ ಕುಮಾರಕೃಪಾ ಅತಿಥಿ ಗೃಹದಲ್ಲಿ ಭೇಟಿಯಾಗಿದ್ದಾರೆ. ಈ ಮೂಲಕ ತೇಜಸ್ವಿನಿ ಅನಂತಕುಮಾರ್ ಅವರು ಬಿಜೆಪಿ ತೊರೆದು, ಕಾಂಗ್ರೆಸ್ ಸೇರಲಿದ್ದಾರಾ ಎಂಬ ಚರ್ಚೆ ಕೂಡ ಮುನ್ನೆಲೆಗೆ ಬಂದಿದೆ.
ಈ ಮಾತಿಗೆ ಮತ್ತಷ್ಟು ಪುಷ್ಟಿ ನೀಡುವಂತೆ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಅವರು ತಮ್ಮ ಟ್ವೀಟ್‌ನಲ್ಲಿ “ತೇಜಸ್ವಿನಿ ಅನಂತಕುಮಾರ್ ಅವರು ನನ್ನನ್ನು ಭೇಟಿಯಾಗಿ ರಾಜ್ಯ ರಾಜಕೀಯ ವಿಚಾರಗಳನ್ನು ಚರ್ಚಿಸಿದ್ದಾರೆ” ಎಂದು ಹೇಳಿರುವುದು ರಾಜಕೀಯ ಆಸಕ್ತರ ಕಣ್ಣು ಅರಳಿಸಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬರ ಘೋಷಣೆಯಲ್ಲ, ಪೀಡಿತರಿಗೆ ಪರಿಹಾರ ಮುಟ್ಟಿಸುವುದು ಮುಖ್ಯ
2019ರ ಲೋಕಸಭಾ ಚುನಾವಣೆ ವೇಳೆ ತಮ್ಮ ಪತಿ ಅನಂತಕುಮಾರ್ ಪ್ರತಿನಿಧಿಸುತ್ತಿದ್ದ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ತೇಜಸ್ವಿನಿ ಅವರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಕೊನೆ ಕ್ಷಣದಲ್ಲಿ ಅವರ ಬದಲು ತೇಜಸ್ವಿ ಸೂರ್ಯ ಅವರಿಗೆ ಟಿಕೆಟ್ ನೀಡಲಾಗಿತ್ತು. ಇದರಿಂದ ತೇಜಸ್ವಿನಿ ಅನಂತಕುಮಾರ್ ಅಸಮಾಧಾನಗೊಂಡಿದ್ದರು.
ಇದಾದ ಬಳಿಕ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿಯೂ ಬಸವನಗುಡಿ ಮತ್ತು ಜಯನಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆಗಲೂ ಬಿಜೆಪಿ ನಾಯಕರು ಅವರಿಗೆ ಮಣೆ ಹಾಕಲಿಲ್ಲ. ಆಗಲೂ ಕೂಡ ಪರೋಕ್ಷವಾಗಿ ತಮ್ಮ ಅಸಮಾಧಾನವನ್ನು ತೇಜಸ್ವಿನಿ ಅನಂತಕುಮಾರ್ ವ್ಯಕ್ತಪಡಿಸಿದ್ದನ್ನು ಇಲ್ಲಿ ನೆನೆಯಬಹುದು.